ಚುನಾವಣೆ ರಣಕಹಳೆ ಮೊಳಗಿಸಲು ಬಿಜೆಪಿ ಸಜ್ಜು

Social Share

ಬೆಂಗಳೂರು,ಆ.19- 2023ರ ಚುನಾವಣೆಯ ಕಾರ್ಯತಂತ್ರದ ಕುರಿತು ಬಿಜೆಪಿ, ತನ್ನ ರಾಜ್ಯ ಪದಾಧಿಕಾರಿಗಳ ಸಭೆ ನಡೆಸಿದ್ದು, ಮೊದಲು ಪಕ್ಷ ದುರ್ಬಲವಾಗಿರುವ ವಿಧಾನಸಭಾ ಕ್ಷೇತ್ರಗಳ ಮೇಲೆ ಗಮನ ಕೇಂದ್ರೀಕರಿಸಲು ನಿರ್ಧರಿಸಿದೆ.
ಪಕ್ಷ ಸಂಘಟನೆಗೆ ಪೂರಕವಾಗಿ ಮುಂದಿನ ತಿಂಗಳಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದ ತಂಡಗಳು ಬಿಜೆಪಿ ಶಾಸಕರಿಲ್ಲದ 50 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಳ್ಳಲಿವೆ.
ಸೆಪ್ಟೆಂಬರ್ 10 ಮತ್ತು 11 ರಂದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯ ನಂತರ ಪ್ರವಾಸ ಕೈಗೊಳ್ಳಲಿದ್ದಾರೆ.

ಬಿಜೆಪಿ ಕರ್ನಾಟಕ ಪ್ರಭಾರಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜೇಶ್ ಕುಂತೂರು, ಜಿಲ್ಲಾ ಉಸ್ತುವಾರಿಗಳು ಮತ್ತು ಮುಖಂಡರಿಗೆ ಪ್ರವಾಸಕ್ಕೆ ಸಿದ್ಧಪಡಿಸುವಂತೆ ಸೂಚಿಸಿದರು.

ಆರಂಭಿಕ ಹಂತದಲ್ಲಿ ಮುಖ್ಯಮಂತ್ರಿ ಮತ್ತು ರಾಜ್ಯಾಧ್ಯಕ್ಷರ ನೇತೃತ್ವದ ತಂಡಗಳು ಪ್ರತಿದಿನ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಲಿವೆ. ಬಳಿಕ ವಿಧಾನಸಭಾ ಕ್ಷೇತ್ರಗಳ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆಯಿದೆ. ಈ ವೇಳೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಪ್ರಯತ್ನ ಮಾಡಲಿದ್ದಾರೆ.

ಪಕ್ಷದ ಪದಾಧಿಕಾರಿಗಳು ತಿಂಗಳಲ್ಲಿ 15 ದಿನ ಪ್ರವಾಸ ಕೈಗೊಳ್ಳಬೇಕು ಎಂಬ ತೀರ್ಮಾನವನ್ನೂ ಕೈಗೊಳ್ಳಲಾಗಿದ್ದು, ರಾಜ್ಯದ ಪ್ರತಿ ಬೂತ್‍ನ್ನೂ ಶೇ.50ಕ್ಕಿಂತ ಹೆಚ್ಚು ಅಂದರೆ ಅರ್ಧಕ್ಕಿಂತ ಹೆಚ್ಚು ಮತಗಳನ್ನು ಪಡೆಯುವ ಬೂತ್‍ಗಳನ್ನಾಗಿ ಪರಿವರ್ತಿಸಬೇಕು. ಅದಕ್ಕಾಗಿ ರಾಜ್ಯ ಹಾಗೂ ಜಿಲ್ಲಾ ಪದಾಧಿಕಾರಿಗಳು ಪ್ರವಾಸ ನಡೆಸಬೇಕು ಎಂಬ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ರಾಜ್ಯ ಅಸೆಂಬ್ಲಿ ಚುನಾವಣೆಯಲ್ಲಿ 145ಕ್ಕೂ ಹೆಚ್ಚು ಸ್ಥಾನ ಗೆಲ್ಲಲು ಪ್ರಧಾನಿ ನರೇಂದ್ರ ಮೋದಿಯವರ ಪಂಚ ಸಂಕಲ್ಪಗಳು ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪಂಚ ಯೋಜನೆಗಳನ್ನು ಬಳಸಿಕೊಳ್ಳಬೇಕು. ಈ ಯೋಜನೆಗಳನ್ನು ಪ್ರತಿಯೊಬ್ಬರಿಗೂ ತಲುಪಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಶ್ರಮಿಸಬೇಕು ಎಂದು ತಿಳಿಸಲಾಗಿದೆ.

ರಾಜ್ಯ ಬಿಜೆಪಿ ಸರ್ಕಾರ ಮೂರು ವರ್ಷ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ಮೊದಲ ವಾರದಿಂದ ಏಳು ಕಡೆಗಳಲ್ಲಿ ಜನೋತ್ಸವ ಸಮಾವೇಶ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಮೊದಲ ಸಮಾವೇಶ ದೊಡ್ಡಬಳ್ಳಾಪುರದಲ್ಲಿ ನಡೆಯಲಿದೆ.

Articles You Might Like

Share This Article