ಬೆಂಗಳೂರು,ಮಾ.30- ಹೃದಯ ತಜ್ಞ ಡಾ.ಸಿ.ಎನ್.ಮಂಜುನಾಥ್ ಅವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಏ.4ರಂದು ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರು ಏ.3ರಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಲಿದ್ದಾರೆ.
ಪ್ರಸಕ್ತ ಲೋಕಸಭಾ ಚುನಾವಣೆಯ ಮೊದಲ ಹಂತದ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಏ.1ರಿಂದ ಏ.4ರ ನಡುವೆ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಲಿದ್ದಾರೆ.
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಸಂಸದ ಪಿ.ಸಿ.ಮೋಹನ್ ಏ.1ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಮೈಸೂರು ಕ್ಷೇತ್ರದ ಅಭ್ಯರ್ಥಿ ರಾಜ ವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿ ಎಸ್.ಬಾಲರಾಜ್, ತುಮಕೂರು ಕ್ಷೇತ್ರದ ಅಭ್ಯರ್ಥಿ ಮಾಜಿ ಸಚಿವ ವಿ.ಸೋಮಣ್ಣ, ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಏ.3ರಂದು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಲಿದ್ದಾರೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್, ದಕ್ಷಿಣಕನ್ನಡ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ಚಿತ್ರದುರ್ಗ ಕ್ಷೇತ್ರದ ಅಭ್ಯರ್ಥಿ ಗೋವಿಂದ ಕಾರಜೋಳ, ಚಿಕ್ಕಬಳ್ಳಾಪುರ ಕ್ಷೇತ್ರದ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರು ಏ.4ರಂದು ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮುನ್ನ ದೇವಾಲಯದಲ್ಲಿ ಬಿಜೆಪಿ ಅಭ್ಯರ್ಥಿಗಳು ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ರೋಡ್ ಶೋ ನಡೆಸಲಿದ್ದಾರೆ. ಚುನಾವಣಾ ಅಧಿಕಾರಿಗೆ ನಾಮಪತ್ರ ಸಲ್ಲಿಸಿ ಆನಂತರ ಬಹಿರಂಗ ಸಭೆ ನಡೆಸುವ ಸಾಧ್ಯತೆ ಇದೆ.