ನಾಳೆ ಬಿಜೆಪಿ ಮಹತ್ವದ ಕೋರ್ ಕಮಿಟಿ ಸಭೆ, ಉಪಚುನಾವಣೆ ಅಭ್ಯರ್ಥಿಗಳ ಆಯ್ಕೆ ಫೈನಲ್ ಸಾಧ್ಯತೆ
ಬೆಂಗಳೂರು,ಅ.2- ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಟಿಕೆಟ್ ನೀಡುವ ಸಂಬಂಧ ನಾಳೆ ಬಿಜೆಪಿಯ ಮಹತ್ವದ ಕೋರ್ ಕಮಿಟಿ ಸಭೆ ನಡೆಯಲಿದೆ. ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಮುಖ್ಯಮಂತ್ರಿ ಬಸವರಾ ಬೊಮ್ಮಾಯಿ, ಪಕ್ಷದ ರಾಜ್ಯಾಧ್ಯಕ್ಷ ನಳೀನ್ಕುಮಾರ್ ಕಟೀಲ್, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಚಿವರಾದ ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್, ಪ್ರಹ್ಲಾದ್ ಜೋಷಿ, ಗೋವಿಂದ ಕಾರಜೋಳ, ಮಾಜಿ ಸಚಿವ ಜಗದೀಶ್ ಶೆಟ್ಟರ್ ಸೇರಿದಂತೆ ಕೋರ್ ಕಮಿಟಿಯ ಸದಸ್ಯರು ಸಭೆಯಲ್ಲಿ ಭಾಗವಹಿಸುವರು.
ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಿ ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿಯಾಗಿ ನೇಮಕ ಮಾಡಿದ ಬಳಿಕ ಮೊದಲ ಉಪ ಸಮರ ಇದೇ ತಿಂಗಳು ನಡೆಯಲಿದೆ.ಹೀಗಾಗಿ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಮಾಡುವ ಕುರಿತಂತೆ ಚರ್ಚಿಸಲು ನಾಳೆ ರಾಜ್ಯ ಬಿಜೆಪಿ ಮಹತ್ವದ ಕೋರ್ ಕಮಿಟಿ ಸಭೆ ನಡೆಯಲಿದೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷ್ಯತೆಯಲ್ಲಿ ನಡೆಯುವ ಸಭೆಯಲ್ಲಿ ಸಿಂಧಗಿ ಹಾಗೂ ಹಾನಗಲ್ ಕ್ಷೇತ್ರಗಳಿಗೆ ಪಕ್ಷದ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಿ ಪಕ್ಷದ ಹೈಕಮಾಂಡ್ಗೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಆದಗ್ಯೂ ಅದು ಅಷ್ಟು ಸುಲಭವಲ್ಲ ಎನ್ನಲಾಗುತ್ತಿದೆ.
# ಕಗ್ಗಂಟಾದ ಹಾನಗಲ್ ಕ್ಷೇತ್ರದ ಅಭ್ಯರ್ಥಿ ಆಯ್ಕೆ:
ಹಾನಗಲ್ ಕ್ಷೇತ್ರದಲ್ಲಿ ನಾಲ್ಕೈದು ಮಂದಿ ಪ್ರಬಲ ಆಕಾಂಕ್ಷಿಗಳಿದ್ದಾರೆ. ದಿವಂಗತ ಸಿಎಂ ಉದಾಸಿ ಅವರ ಸೊಸೆ ರೇವತಿ ಶಿವಕುಮಾರ್ ಉದಾಸಿ, ಮೂಲ ಬಿಜೆಪಿಗ ಕಲ್ಯಾಣ ಕುಮಾರ್ ಶೆಟ್ಟರ್, ಸಿದ್ದರಾಜ ಕಲಕೋಟೆ, ಮಾಜಿ ಶಾಸಕ ಶಿವರಾಜ ಸಜ್ಜನ್, ಮಹಾಂತೇಶ ಸೊಪ್ಪಿನ ಅವರ ಹೆಸರುಗಳು ಪ್ರಮುಖವಾಗಿ ಕೇಳಿಬರುತ್ತಿವೆ.
ಸಂಸದ ಶಿವಕುಮಾರ್ ಉದಾಸಿ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರ ಆಪ್ತರು, ಹೀಗಾಗಿ ರೇವತಿ ಉದಾಸಿ ಅವರಿಗೆ ಬಿಜೆಪಿ ಟಿಕೆಟ್ ಸಿಗುವ ಸಾಧ್ಯತೆ ಹೆಚ್ಚು ಎಂಬ ಮಾತುಗಳಿವೆ. ಇನ್ನು ಸಿಂದಗಿ ಕ್ಷೇತ್ರದಲ್ಲಿಯೂ ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿದೆ.
# ಸಿಂಧಗಿಯಲ್ಲೂ ಪರಿಸ್ಥಿತಿ ಭಿನ್ನವಾಗಿಲ್ಲ:
ಸಿಂಧಗಿಯಲ್ಲಿ ಮಾಜಿ ಶಾಸಕ ರಮೇಶ್ ಭೂಸನೂರುಮಠ, ಸಂಗನಗೌಡ ಪಾಟೀಲ್ ಹಾಗೂ ಸಿದ್ದು ಬಿರಾದಾರ ಅವರ ಹೆಸರುಗಳು ಪ್ರಮುಖವಾಗಿ ಕೇಳಿ ಬರುತ್ತಿವೆ.ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಸಹ ಟಿಕೆಟ್ ಆಕಾಂಕ್ಷಿ ಎಂದು ಕೇಳಿ ಹೇಳಲಾಗುತ್ತಾದರೂ ಅವರು ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಹೀಗಾಗಿ ಬಿಜೆಪಿ ಅಭ್ಯರ್ಥಿಯ ಆಯ್ಕೆ ಸಿಂಧಗಿ ಕ್ಷೇತ್ರದಲ್ಲಿಯೂ ಬಿಜೆಪಿಗೆ ಸವಾಲಾಗಿದೆ. ದಿ. ಎಂ.ಸಿ. ಮನಗೂಳಿ ಅವರ ನಿಧನದಿಂದ ಕ್ಷೇತ್ರ ತೆರವಾಗಿದೆ. ದಿ. ಮನಗೂಳಿನ ಅವರ ಪುತ್ರ ಅಶೋಕ್ ಮನಗೂಳಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿ ಸ್ಪರ್ಧೆ ಮಾಡುತ್ತಿದ್ದಾರೆ. ಹೀಗಾಗಿ ಅಲ್ಲಿ ಬಿಜೆಪಿಗೆ ಕಾಂಗ್ರೆಸ್ ತೀವ್ರ ಪೈಪೋಟಿ ಕೊಡುವ ಸಾಧ್ಯತೆಯಿದೆ.
ಎರಡೂ ಕ್ಷೇತ್ರಗಳಲ್ಲಿ ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ಕೊಡುವ ಒತ್ತಡದಲ್ಲಿ ರಾಜ್ಯ ಬಿಜೆಪಿ ನಾಯಕರಿದ್ದಾರೆ. ಜೊತೆಗೆ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿರುವುದು ಚುನಾವಣೆಯ ಮೇಲೆ ಋಣಾತ್ಮಕ ಪರಿಣಾಮ ಬೀರದಂತೆ ತಡೆಯಲು ಬಿಜೆಪಿ ಹೈಕಮಾಂಡ್ ರಾಜ್ಯ ಬಿಜೆಪಿಗೆ ಸೂಚಿಸಿದೆ ಎನ್ನಲಾಗಿದೆ.
ಹೀಗಾಗಿ ಕೋರ್ ಕಮಿಟಿ ಸಭೆಯಲ್ಲಿ ಆಕಾಂಕ್ಷಿಗಳ ಕುರಿತು ಚರ್ಚಿಸಿ ಅಭ್ಯರ್ಥಿಗಳ ಪಟ್ಟಿ ಕಳುಹಿಸಲು ತೀರ್ಮಾನ ಮಾಡಲಾಗಿದೆ. ಸರ್ಕಾರದಿಂದ ಹಾಗೂ ಪಕ್ಷದಿಂದ ಪ್ರತ್ಯೇಕ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಲಾಗುತ್ತದೆ ಎನ್ನಲಾಗಿದೆ.ಎರಡೂ ಕ್ಷೇತ್ರಗಳಲ್ಲಿ ಗೆಲ್ಲುವ ಅಭ್ಯರ್ಥಿಗಳ ಕುರಿತು ಬಿಜೆಪಿ ಹೈಕಮಾಂಡ್ ಕೂಡ ವರದಿ ತರಿಸಿಕೊಳ್ಳಲಿದೆ ಎಂಬ ಮಾಹಿತಿಯಿದೆ.
ಹೀಗಾಗಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಅಂತಿಮವಾಗಿ ಬರುವ ಹೆಸರುಗಳನ್ನು ಪರಿಶೀಲಿಸಿ, ತಾವು ಪಡೆದುಕೊಂಡಿರುವ ವರದಿ ಆಧರಿಸಿ ಅಭ್ಯರ್ಥಿಗಳನ್ನು ಬಿಜೆಪಿ ವರಿಷ್ಠರು ಅಂತಿಮ ಮಾಡಲಿದ್ದಾರೆ. ಆ ಬಳಿಕ ಬಿಜೆಪಿ ಕೇಂದ್ರ ಚುನಾವಣಾ ಸಮಿತಿಯು ಎರಡೂ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಕೃತವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ.