Thursday, December 12, 2024
Homeರಾಜಕೀಯ | Politicsಬಿಜೆಪಿ ಬಣ ಬಡಿದಾಟಕ್ಕೆ ಬ್ರೇಕ್ ಹಾಕಲು ಕೋರ್ ಕಮಿಟಿ ಸಭೆ

ಬಿಜೆಪಿ ಬಣ ಬಡಿದಾಟಕ್ಕೆ ಬ್ರೇಕ್ ಹಾಕಲು ಕೋರ್ ಕಮಿಟಿ ಸಭೆ

BJP core committee meeting to put a stop to Internal fighting

ಬೆಂಗಳೂರು,ನ.28- ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ತಾರಕಕ್ಕೇರಿರುವ ಬೆನ್ನಲ್ಲೇ ಡಿಸೆಂಬರ್ 3ರಂದು ಮಹತ್ವದ ಕೋರ್ ಕಮಿಟಿ ಸಭೆ ನಡೆಯಲಿದೆ. ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ನಡೆಯಲಿರುವ ಈ ಸಭೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಅವರು ಭಾಗವಹಿಸಲಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯ ಯಡಿಯೂರಪ್ಪ ಸೇರಿದಂತೆ ಮತ್ತಿತರರು ಭಾಗಿಯಾಲಿದ್ದಾರೆ.

ಬೆಳಗಾವಿಯಲ್ಲಿ ಡಿಸೆಂಬರ್ 9ರಿಂದ ಆರಂಭವಾಗಲಿರುವ ಚಲಿಗಾಲದ ಅಧಿವೇಶನದಲ್ಲಿ ವಿಧಾನಮಂಡಲದ ಉಭಯ ಸದನಗಳಾದ ವಿಧಾನಸಭೆ ಮತ್ತು ವಿಧಾನಪರಿಷತ್ನಲ್ಲಿ ಚರ್ಚಿಸಬೇಕಾದ ವಿಷಯಗಳ ಬಗ್ಗೆ ಕೋರ್ ಕಮಿಟಿ ಸಭೆ ನಡೆಯಲಿದೆ ಎಂದು ಹೇಳಲಾಗುತ್ತದೆ.

ವಾಸ್ತವವಾಗಿ ಬಿಜೆಪಿಯಲ್ಲಿ ವಿಜಯೇಂದ್ರ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಬಣ ಹಾದಿಬೀದಿಯಲ್ಲಿ ಕಿತ್ತಾಡಿಕೊಂಡು ನಾನೊಂದು ತೀರ, ನೀನೊಂದು ತೀರ ಎಂಬಂತಾಗಿದ್ದು, ಬರುವ ದಿನಗಳಲ್ಲಿ ಹೊಂದಾಣಿಕೆ ಮೂಡಿಸಲು ಸಭೆ ನಡೆಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ.

ಇತ್ತೀಚೆಗೆ ನಡೆದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಎರಡು ಕಡೆ ಸೋತಿದ್ದರೆ, ಮಿತ್ರ ಪಕ್ಷ ಜೆಡಿಎಸ್ ಕೂಡ ಚನ್ನಪಟ್ಟಣದಲ್ಲಿ ಪರಾಭವಗೊಂಡಿತು. ಪದಾಧಿಕಾರಿಗಳ ಬದಲಾವಣೆ ಮಾಡಬೇಕೆಂಬ ಬೇಡಿಕೆ ಕೇಳಿಬರುತ್ತಿರುವುದರಿಂದ ಪಕ್ಷವನ್ನು ಸಂಘಟಿಸುವ ಕುರಿತು ಕೋರ್ ಕಮಿಟಿಯಲ್ಲಿ ಚರ್ಚಿಸಲಾಗುತ್ತಿದೆ ಎಂದು ಹೇಳಲಾಗಿದೆ.

ಹಾಲಿ ಇರುವ ಕೆಲವು ಪದಾಧಿಕಾರಿಗಳನ್ನು ಕೈಬಿಟ್ಟು ಬಿಜೆಪಿ ಹಾಗೂ ಸಂಘ ಪರಿವಾರದ ನಿಷ್ಠೆ ಹೊಂದಿರುವವರನ್ನು ನೇಮಕ ಮಾಡಿಕೊಂಡು ಯಾವುದೇ ರೀತಿಯ ಗೊಂದಲಕ್ಕೆ ಅವಕಾಶವಿಲ್ಲದಂತೆ ಸಮನ್ವಯ ಸಾಧಿಸಲು ಪ್ರಧಾನ ಕಾರ್ಯದರ್ಶಿಯಾಗಿರುವ ತರುಣ್ ಚುಗ್ ಪ್ರಯತ್ನ ಮಾಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಪದಾಧಿಕಾರಿಗಳನ್ನು ಬದಲಾವಣೆ ಮಾಡುವ ಕುರಿತು ಈಗಾಗಲೇ ಸುಳಿವು ಕೊಟ್ಟಿರುವ ವಿಜಯೇಂದ್ರ, ಆ ಬಣ ಈ ಬಣ ಎನ್ನದೆ ಪಕ್ಷಕ್ಕೆ ನಿಷ್ಠರಾಗಿರುವನ್ನು ಪದಾಧಿಕಾರಿಗಳನ್ನಾಗಿ ನೇಮಕ ಮಾಡಿಕೊಳ್ಳುವ ಸಂಭವವಿದೆ. ಬಿಜೆಪಿಯೊಳಗೆ ನಡೆಯುತ್ತಿರುವ ಕೆಲವು ವಿದ್ಯಮಾನಗಳ ನಡುವೆಯೇ ಡಿ.3ರಂದು ನಡೆಯಲಿರುವ ಕೋರ್ ಕಮಿಟಿ ಸಭೆ ರಾಜಕೀಯವಾಗಿ ಹೆಚ್ಚಿನ ಮಹತ್ವ ಪಡೆದುಕೊಂಡಿದೆ.

RELATED ARTICLES

Latest News