ಬೆಂಗಳೂರು,ಫೆ.25- ಸರ್ಕಾರದ ಸ್ಪಂದನೆ ಸಿಗದೆ ಪಿಂಚಣಿಗಾಗಿ ಮುಷ್ಕರದಲ್ಲಿ ತೊಡಗಿದ್ದ ಇಬ್ಬರು ಶಿಕ್ಷಕರ ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ತೀಕ್ಷ್ಣವಾಗಿ ಸ್ಪಂದಿಸಿರುವ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಸದಾ ಕಾಲ ಕಿವಿಯಲ್ಲಿ ಕಮಿಷನ್ ಸದ್ದು ಗುಯ್ಗುಡುವಾಗ ಬಡವರ ಕೂಗು ಕೇಳುವುದಾದರೂ ಹೇಗೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಾಗಲಕೋಟೆ ಜಿಲ್ಲೆ ಬಾದಾಮಿಯ ಶಿಕ್ಷಕ ಸಿದ್ದಯ್ಯ ಹಿರೇಮಠ ಮತ್ತು ರಾಯಚೂರು ಜಿಲ್ಲೆ ಸಿಂಧನೂರು ಮೂಲದ ಶಂಕರಪ್ಪ ಬೋರಡ್ಡಿ ಅವರು ಸರ್ಕಾರ ತಮ್ಮ ಹೋರಾಟಕ್ಕೆ ಸ್ಪಂದಿಸದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನು ಸರ್ಕಾರಿ ಕೊಲೆಗಳು ಅನ್ನದೆ ಬೇರೇನು ಹೇಳಬೇಕು ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಕಳೆದ 141 ದಿನಗಳಿಂದ ಫ್ರೀಡಂ ಪಾರ್ಕ್ ನಲ್ಲಿ ಮುಷ್ಕರ ನಿರತರಾಗಿರುವ ಅನುದಾನಿತ ಶಾಲಾ ಶಿಕ್ಷಕರ ಗೋಳು ಕೇಳುವವರಿಲ್ಲವಾಗಿದೆ. ಶಿಕ್ಷಕರು ಕೇಳುತ್ತಿರುವುದು ತಮ್ಮ ಹಕ್ಕಿನ ಪಿಂಚಣಿಯನ್ನು ಎಂಬ ಕನಿಷ್ಠ ಜ್ಞಾನವಾದರೂ ಈ ಸರ್ಕಾರಕ್ಕೆ ಬೇಡವೇ? ಬೊಮ್ಮಾಯಿ ಅವರು ಕಣ್ಣು ಬಿಟ್ಟು ನೋಡಲು ಇನ್ನೆಷ್ಟು ಹೆಣ ಬೀಳಬೇಕು ಎಂದು ಕಿಡಿಕಾರಿದ್ದಾರೆ.
ಪಾಕ್ ಮತ್ತು ಶ್ರೀಲಂಕಾ ಮೇಲೆ ಹತೋಟಿ ಸಾಧಿಸಲು ಚೀನಾ ಪ್ಲಾನ್
ಶಿಕ್ಷಕರು ಪ್ರತಿಭಟನೆ ಆರಂಭಿಸಿ 141 ದಿನಗಳು ಕಳೆದರೂ ಇನ್ನು ಈ ವಿಚಾರ ತಮ್ಮ ಗಮನಕ್ಕೆ ಬಂದಿರಲಿಲ್ಲ ಎಂದು ಹೇಳುವ ಮೂಲಕ ರಾಜ್ಯ ಸರ್ಕಾರ ಇಷ್ಟು ದಿನ ಕೋಮಾದಲ್ಲಿತ್ತು ಎಂಬುದನ್ನು ಸ್ವತಃ ಒಪ್ಪಿಕೊಂಡಿದೆ. ಸದಾ ಕಾಲ ಕಿವಿಯಲ್ಲಿ ಕಮಿಷನ್ ಸದ್ದು ಗುಯ್ಗುಡುವಾಗ ಬಡವರ ಕೂಗು ಕೇಳುವುದಾದರೂ ಹೇಗೆ ಮುಖ್ಯಮಂತ್ರಿಗಳೇ ಎಂದು ಪ್ರಶ್ನಿಸಲಾಗಿದ್ದು, ಕೋಮುಗಲಭೆ ನಡೆದು ಕೊಲೆಯಾದರೆ ಗಂಟೆಯೊಳಗೆ ಹೆಣದ ಸುತ್ತ ನೊಣದಂತೆ ಹೋಗಿ ಕೂರುವ ಬಿಜೆಪಿ ಸರ್ಕಾರಕ್ಕೆ, ಸಾವಿರಾರು ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರ ಜೀವಗಳು ಅಮೂಲ್ಯ ಅನ್ನಿಸುವುದಿಲ್ಲವೇ ಎಂದು ವಾಗ್ದಾಳಿ ನಡೆಸಿದ್ದಾರೆ.
2022ರಲ್ಲಿ ಕೊಂಚ ಸುಧಾರಿಸಿದೆ ನಿರುದ್ಯೋಗ ಸಮಸ್ಯೆ
ಇನ್ನಷ್ಟು ಜೀವಗಳು ಬಲಿಯಾಗುವ ಮುನ್ನ ಮುಷ್ಕರದಲ್ಲಿ ತೊಡಗಿರುವ ಅನುದಾನಿತ ಶಾಲಾ ಶಿಕ್ಷಕರನ್ನು ಕರೆದು ಸರ್ಕಾರ ಮಾತುಕತೆ ನಡೆಸಿ, ಅವರ ಬೇಡಿಕೆಗಳನ್ನು ತಕ್ಷಣ ಈಡೇರಿಸುವ ಕೆಲಸ ಮಾಡಬೇಕು ಮತ್ತು ಈಗಾಗಲೇ ಪ್ರಾಣ ಕಳೆದುಕೊಂಡವರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
BJP, government, teachers, pension, strike, Siddaramaiah,