ತಿ.ನರಸೀಪುರ, ನ.14- ಇಡಿ,ಸಿಬಿಐ,ಐಟಿ ಹಾಗೂ ರಾಜ್ಯಪಾಲರನ್ನು ದುರುಪಯೋಗಪಡಿಸಿಕೊಂಡು ಬಿಜೆಪಿಯವರು ಬೆದರಿಸುವ ಕೆಲಸ ಮಾಡುತ್ತಿದ್ದಾರೆ, ಅರವಿಂದ್ ಕೇಜ್ರಿವಾಲ್ ಆಯ್ತು, ಈಗ ನನ್ನ ಮತ್ತು ನನ್ನ ಪತ್ನಿಯನ್ನು ಟಾರ್ಗೆಟ್ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.
ಮೈಸೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಿದ್ದ ಟಿ.ನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿನ 470 ಕೋಟಿ ರೂಪಾಯಿ ಮೌಲ್ಯದ 211 ಕಾಮಗಾರಿಗಳ ಉದ್ಘಾಟನೆ ಮತ್ತು ಕಟ್ಟಡಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಿ, ಫಲಾನುಭವಿಗಳಿಗೆ ನೇರವಾಗಿ ಸವಲತ್ತುಗಳನ್ನು ವಿತರಿಸಿ ಅವರು ಮಾತನಾಡಿದರು.
ಸುಳ್ಳು ಕೇಸಲ್ಲಿ ನನ್ನನ್ನು, ನನ್ನ ಧರ್ಮಪತ್ನಿಯನ್ನು ಎಳೀತೀರಾ? ರಾಜ್ಯದ ಜನರೇನು ಮೂರ್ಖರು ಎಂದು ತಿಳಿದುಕೊಂಡಿದ್ದೀರಾ? ರಾಜ್ಯದ ಜನ್ರ ಆಶೀರ್ವಾದ ನನ್ನ ಮೇಲೆ ಇರುವವರೆಗೂ ನಾನು ಬಿಜೆಪಿ ಮತ್ತು ಕೇಂದ್ರ ಸರ್ಕಾರದ ಷಡ್ಯಂತ್ರಗಳಿಗೆ ಜಗ್ಗಲ್ಲ, ಬಗ್ಗಲ್ಲ ಎಂದರು,
ಲೂಟಿ ಮಾಡೋದು, ಕಾಂಗ್ರೆಸ್ ಶಾಸಕರನ್ನು ಖರೀದಿಸೋದು, ಜಾತಿ-ಧರ್ಮದ ಹೆಸರಲ್ಲಿ ಭಾರತೀಯರನ್ನು ವಿಭಜಿಸಿ ಆಳೋದಷ್ಟೆ ಬಿಜೆಪಿ ರಾಜಕಾರಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಮುಖ್ಯಮಂತ್ರಿ, ಬಿಜೆಪಿ ಇವತ್ತಿನವರೆಗೂ ರಾಜ್ಯದಲ್ಲಿ ಸ್ವಂತ ಶಕ್ತಿಯಿಂದ ಒಂದು ಬಾರಿಯೂ ಅಧಿ ಕಾರಕ್ಕೆ ಬಂದಿಲ್ಲ. ಆಪರೇಷನ್ ಕಮಲದ ಮೂಲಕ ಮಾತ್ರ ಅಧಿ ಕಾರಕ್ಕೆ ಬಂದಿದೆ.
ಈ ಬಾರಿ ಕಾಂಗ್ರೆಸ್ಸಿನ 50 ಮಂದಿ ಶಾಸಕರಿಗೆ ತಲಾ 50 ಕೋಟಿ ಆಫರ್ ನೀಡಿ ಖರೀದಿಸಲು ಯತ್ನಿಸಿದ್ದಾರೆ. ಎಲ್ಲಿಂದ ಬರತ್ತೆ ಈ ಹಣ? ಯಡಿಯೂರಪ್ಪ, ಬೊವ್ಮಾಯಿ, ಆರ್.ಅಶೋಕ್ ಪ್ರಿಂಟ್ ಹಾಕಿದ್ದಾರಾ ಈ ಹಣವನ್ನು? ರಾಜ್ಯವನ್ನು ಲೂಟಿ ಹೊಡೆದ ಹಣ ತಾನೇ ಇದು? ಎಂದು ಕಿಡಿಕಾರಿದ ಅವರು ನಮ್ಮ ಶಾಸಕರು ಬಿಜೆಪಿಯವರ ಆಮಿಷಕ್ಕೆ ಒಳಗಾಗಲಿಲ್ಲ ಎಂದರು.
ಬಿಜೆಪಿಯವರು ಗ್ಯಾರಂಟಿಯ ಹಣ ತಗೊತಾ ಇಲ್ವಾ? ಎದೆ ಮುಟ್ಟಿಕೊಂಡು ಹೇಳಲಿ..!: ರಾಜ್ಯದಲ್ಲಿ ನಮ್ಮ ಐದೂ ಗ್ಯಾರಂಟಿಗಳು ಯಶಸ್ವಿಯಾಗಿ ಜಾರಿಯಾದ ಬಳಿಕ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಭಯಾನಕ ಸುಳ್ಳುಗಳನ್ನು ಹೊಸೆಯುತ್ತಿದ್ದಾರೆ.
ರಾಜ್ಯ ಸರ್ಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ ಎನ್ನುವ ಹಸಿ ಹಸಿ ಸುಳ್ಳಿನ ಅಪಪ್ರಚಾರ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಗ್ಯಾರಂಟಿಗಳಿಗಾಗಿ 56 ಸಾವಿರ ಕೋಟಿ ರೂಪಾಯಿ ಕೊಟ್ಟರೆ, ಅಭಿವೃದ್ಧಿ ಕಾರ್ಯಗಳಿಗೆ 1 ಕೋಟಿ 20 ಲಕ್ಷ ರೂಪಾಯಿ ನೀಡಿದೆ. ಇಂದು ನರಸೀಪುರದಲ್ಲಿ 470 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕೆಲಸಗಳಿಗೆ ಚಾಲನೆ ದೊರೆತಿದೆ.
ಬಿಜೆಪಿಯ ಸುಳ್ಳುಗಳಿಗೆ ಇವತ್ತಿನ ಅಭಿವೃದ್ಧಿ ಕಾರ್ಯಕ್ರಮ ಕನ್ನಡಿ ಹಿಡಿದಿದೆ ಎಂದರು.
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಮಾತನಾಡಿ, 1985 ರಿಂದ ನನ್ನ ರಾಜಕೀಯ ಜೀವನ ಯಾತ್ರೆ ಟಿ ನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ಪ್ರಾರಂಭವಾಯಿತು. ಸಿದ್ದರಾಮಯ್ಯ ರಂತಹ ಮಹಾ ನಾಯಕರ ಜೊತೆ ಕೆಲಸ ಮಾಡುವ ಸೌಭಾಗ್ಯವನ್ನು ಕ್ಷೇತ್ರದ ಜನ ನನಗೆ ಕಲ್ಪಿಸಿ ಕೊಟ್ಟಿದ್ದೀರಿ. ಇದಕ್ಕೆ ನಾನು ಋಣಿಯಾಗಿದ್ದು, ಇದನ್ನು ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಮೂಲಕ ತೀರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದರು.
ರೇಷ್ಮೆ ಹಾಗೂ ಪಶು ಸಂಗೋಪನಾ ಇಲಾಖೆಯ ಸಚಿವ ಕೆ.ವೆಂಕಟೇಶ್ ಮಾತನಾಡಿ, ನಮ್ಮ ಸರ್ಕಾರ ಬಂದು 1 ವರ್ಷ 5 ತಿಂಗಳು ಆಗಿದೆ. ಈ ಅವಧಿಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ಮಾಡುವುದರ ಜೊತೆಗೆ ಹಲವು ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿ ಮಾಡಿದ್ದೇವೆ. ಸಿದ್ದರಾಮಯ್ಯ ಅವರು ಹಿಂದುಳಿದ, ಬಡವರ, ರೈತರ ಪರ ರಾಜ್ಯದ ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಗೆ ಸಾಕಷ್ಟು ಅನುದಾನವನ್ನು ನೀಡುತ್ತಿದ್ದಾರೆ ಎಂದು ತಿಳಿಸಿದರು.
ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದ ಸುನೀಲ್ ಬೋಸ್, ವಿಧಾನ ಪರಿಷತ್ ಸದಸ್ಯರಾದ ಡಾ. ಯತಿಂದ್ರ ಸಿದ್ದರಾಮಯ್ಯ ಮಾತನಾಡಿದರು.ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್, ಡಾ.ತಿಮ್ಮಯ್ಯ, ಜಿಲ್ಲಾಧಿ ಕಾರಿ ಜಿ. ಲಕ್ಷ್ಮಿಕಾಂತರೆಡ್ಡಿ, ಜಿಪಂ ಸಿಇಒ ಕೆ.ಎಂ.ಗಾಯತ್ರಿ, ಜಿಪಂ ಮಾಜಿ ಸದಸ್ಯೆ ಸುಧಾ ಮಹದೇವಯ್ಯ, ಬಿ.ಕೆ.ಜ್ಞಾನ ಪ್ರಕಾಶ್, ಮೈಸೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಮಿಕ ವಿಭಾಗದ ಕಾರ್ಯದರ್ಶಿ ಎನ್.ರಾಜೇಶ್, ವಜ್ರೀಗೌಡ, ಮೈಮೂಲ್ ಅಧ್ಯಕ್ಷ ಚೆಲುವರಾಜು, ವೈ.ಎನ್.ಶಂಕರೇಗೌಡ, ಎ.ಎನ್.ಸ್ವಾಮಿ, ಟಿ.ಎಚ್. ಮಂಜುನಾಥ್, ನರಸಿಂಹ ಮಾದನಾಯಕ, ಕುಕ್ಕೂರು ಗಣೇಶ್, ದೊಡ್ಡೇಬಾಗಿಲು ಮಲ್ಲಿಕಾರ್ಜುನ, ಸೇರಿದಂತೆ ಜಿಲ್ಲಾ ಮಟ್ಟದ ಅಧಿ ಕಾರಿಗಳು ಮತ್ತು ಹಲವು ಪ್ರಮುಖರು ಉಪಸ್ಥಿತರಿದ್ದರು.