19ರಿಂದ 23ರವರೆಗೆ ರಾಜ್ಯಾದ್ಯಂತ ಬಿಜೆಪಿ ‘ಜನ ಸ್ವರಾಜ್ ಯಾತ್ರೆ’

ಬೆಂಗಳೂರು,ನ.9- ವಿಧಾನಪರಿಷತ್ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಆಡಳಿತಾರೂಢ ಬಿಜೆಪಿ ಇದೇ 19ರಿಂದ 23ರವರೆಗೆ ಪಕ್ಷದ ಪ್ರಮುಖರು ಹಾಗೂ ಕೇಂದ್ರ ಸಚಿವರ ನೇತೃತ್ವದಲ್ಲಿ ಒಟ್ಟು ನಾಲ್ಕು ತಂಡದಂತೆ ರಾಜ್ಯಾದ್ಯಂತ ಜನ ಸ್ವರಾಜ್ ಯಾತ್ರೆ ನಡೆಸಲಿದೆ. ಪಕ್ಷದ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಚಿವರು, ಕೇಂದ್ರ ಸಚಿವರು ಇದರಲ್ಲಿ ಭಾಗಿಯಾಗಲಿದ್ದಾರೆ.

ನ.19ರಂದು ನಳೀನ್‍ಕುಮಾರ್ ನೇತೃತ್ವದ ತಂಡದಲ್ಲಿ ಕೇಂದ್ರ ಸಚಿವ ಭಗವಂತ ಖೂಬ, ಕೇಂದ್ರ ಸಚಿವರಾದ ವಿ.ಸೋಮಣ್ಣ, ಅರಗ ಜ್ಞಾನೇಂದ್ರ, ಮುರುಗೇಶ್ ನಿರಾಣಿ, ಶಾಸಕರಾದ ರಾಜು ಗೌಡ, ಎನ್.ಮಹೇಶ್, ಸಂಸದ ಪ್ರತಾಪ್ ಸಿಂಹ, ಮಾಜಿ ಶಾಸಕ ಮಾಲಿಕಯ್ಯ ಗುತ್ತೇದಾರ್ ತಂಡ ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರಗಿ ಮತ್ತು ಬೀದರ್‍ನಲ್ಲಿ ಜನ ಸ್ವರಾಜ್ ಯಾತ್ರೆ ನಡೆಯಲಿದೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ 2ನೇ ತಂಡದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಸಚಿವರಾದ ಗೋವಿಂದ ಕಾರಜೋಳ, ಬಿ.ಶ್ರೀರಾಮುಲು, ರಾಜ್ಯ ಉಪಾಧ್ಯಕ್ಷರಾದ ತೇಜಸ್ವಿನಿ ಅನಂತಕುಮಾರ್, ಎಂ.ಬಿ.ನಂದೀಶ್ ಅವರುಗಳು, ಉತ್ತರ ಕನ್ನಡ, ಹಾವೇರಿ, ಧಾರವಾಡ, ಗದಗ, ಬಾಗಲಕೋಟೆ, ವಿಜಯಪುರ, ಚಿಕ್ಕೋಡಿ ಮತ್ತು ಬೆಳಗಾವಿ ತಂಡಗಳಲ್ಲಿ ಸಮಾವೇಶವನ್ನು ನಡೆಸಲಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ನೇತೃತ್ವದ 3ನೇ ತಂಡದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಚಿವರಾದ ಆರ್.ಅಶೋಕ್, ಎಸ್.ಟಿ.ಸೋಮಶೇಖರ್, ಹಾಲಪ್ಪ ಆಚಾರ್,ಎ ಸ್.ಅಂಗಾರ, ಮಾಜಿ ಸಚಿವ ಅರವಿಂದ ಲಿಂಬಾವಳಿ, ಉಪಾಧ್ಯಕ್ಷ ಎಸ್.ಶಂಕರಪ್ಪ ಅವರನ್ನೊಳಗೊಂಡ ತಂಡ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ಮಂಗಳೂರು, ಕೊಡುಗು, ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನದಲ್ಲಿ ಜನ ಸ್ವರಾಜ್ ಯಾತ್ರೆ ನಡೆಯಲಿದೆ.

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನೇತೃತ್ವದ ತಂಡದಲ್ಲಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಸಚಿವರಾದ ಡಾ.ಅಶ್ವಥ್ ನಾರಾಯಣ, ಭೈರತಿ ಬಸವರಾಜ್, ಕೆ.ಗೋಪಾಲಯ್ಯ, ಉಪಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ, ಎಂ.ರಾಜೇಂದ್ರ ಇವರುಗಳು ದಾವಣಗೆರೆ, ಚಿತ್ರದುರ್ಗ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಯಾತ್ರೆ ಮಾಡುವರು.