Saturday, July 27, 2024
Homeರಾಜ್ಯಚಾಮರಾಜನಗರದ ಸಂಸದ, ಪ್ರಭಾವಿ ದಲಿತ ನಾಯಕ ಶ್ರೀನಿವಾಸ್‌ ಪ್ರಸಾದ್‌ ವಿಧಿವಶ: ನಾಳೆ ಅಂತ್ಯಕ್ರಿಯೆ

ಚಾಮರಾಜನಗರದ ಸಂಸದ, ಪ್ರಭಾವಿ ದಲಿತ ನಾಯಕ ಶ್ರೀನಿವಾಸ್‌ ಪ್ರಸಾದ್‌ ವಿಧಿವಶ: ನಾಳೆ ಅಂತ್ಯಕ್ರಿಯೆ

ಬೆಂಗಳೂರು,ಏ.29- ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ದಲಿತ ಸಮುದಾಯದ ಪ್ರಭಾವಿ ನಾಯಕ, ಕೇಂದ್ರದ ಮಾಜಿ ಸಚಿವ ಹಾಗೂ ಚಾಮರಾಜನಗರದ ಸಂಸದ ವಿ.ಶ್ರೀನಿವಾಸ್‌ ಪ್ರಸಾದ್‌ (76) ನಿಧನರಾಗಿದ್ದಾರೆ. ಪತ್ನಿ ಭಾಗ್ಯಲಕ್ಷ್ಮಿ, ಮೂವರು ಪುತ್ರಿಯರು, ಅಳಿಯಂದಿರಾದ ನಂಜನಗೂಡು ಮಾಜಿ ಶಾಸಕ ಹರ್ಷವರ್ಧನ್‌, ಡಾ.ಮೋಹನ್‌ ಸೇರಿದಂತೆ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವರಾದ ಅಮಿತ್‌ ಷಾ, ರಾಜ್‌ ನಾಥ್‌ ಸಿಂಗ್‌, ಮುಖ್ಯಮಂತ್ರಿ ಸಿದ್ದರಾಮಯ್ಯ,ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌.ಯಡಿಯೂರಪ್ಪ, ಹೆಚ್‌.ಡಿ.ಕುಮಾರಸ್ವಾಮಿ, ಬಸವರಾಜ್‌ ಬೊಮ್ಮಯಿ,ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಅನೇಕ ಗಣ್ಯರು ಶ್ರೀನಿವಾಸ್‌ ಪ್ರಸಾದ್‌ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ.

ಕಳೆದ ಮೂರು ದಿನಗಳ ಹಿಂದೆ ಅವರನ್ನು ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರೆ, ಚಿಕಿತ್ಸೆ ಫಲಕಾರಿಯಾಗದೆ, ಮುಂಜಾನೆ 1.27ರ ಸುಮಾರಿಗೆ ನಿಧನರಾಗಿದ್ದಾರೆ.ಮೃತರ ಅಂತ್ಯಕ್ರಿಯೆಯನ್ನು ತವರು ಜಿಲ್ಲೆ ಮೈಸೂರಿನಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ಖ್ಯಾತ ವೈದ್ಯ ಡಾ. ಸುದರ್ಶನ್‌ ಬಲ್ಲಾಳ್‌, ಶ್ರೀನಿವಾಸ್‌ ಪ್ರಸಾದ್‌ ಅವರಿಗೆ ಚಿಕಿತ್ಸೆ ನೀಡುತ್ತಿದ್ದರು. ಮೂತ್ರಕೋಶ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರ ಆರೋಗ್ಯದಲ್ಲಿ ಕಳೆದ ವಾರ ಏರುಪೇರಾಗಿತ್ತು. ಶ್ರೀನಿವಾಸ್‌ ಪ್ರಸಾದ್‌ ಪಾರ್ಥಿವ ಶರೀರವನ್ನು ಮಣಿಪಾಲ್‌ ಆಸ್ಪತ್ರೆಯಿಂದ ಮೈಸೂರಿನ ಜಯಲಕ್ಷೀಪುರಂನಲ್ಲಿರುವ ಅವರ ನಿವಾಸಕ್ಕೆ ತರಲಾಯಿತು.

ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಮಾಜಿ ಶಾಸಕರಾದ ಜಿ.ಟಿ.ದೇವೇಗೌಡ, ಪುಟ್ಟರಂಗಶೆಟ್ಟಿ ಸೇರಿ ಹಲವರು ಅಂತಿಮ ದರ್ಶನ ಪಡೆದರು. ಬಳಿಕ ಇಲ್ಲಿನ ವಸ್ತುಪ್ರದರ್ಶನ ಕೇಂದ್ರದಲ್ಲಿ ಸಾರ್ವಜನಿಕದ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು.

ನಾಳೆ ಅಂತ್ಯಕ್ರಿಯೆ: ಶ್ರೀನಿವಾಸ್‌ ಪ್ರಸಾದ್‌ ಅವರ ಅಂತ್ಯಕ್ರಿಯೆ ನಾಳೆ ಮೈಸೂರಿನಲ್ಲಿ ನಡೆಯಲಿದೆ ಎಂದು ಅವ ಪುತ್ರಿ ಪ್ರತಿಮಾ ಪ್ರಸಾದ್‌ ತಿಳಿಸಿದ್ದಾರೆ. ಇಂದು ಮಧ್ಯಾಹ್ನ 1 ಗಂಟೆ ತನಕ ಮನೆಯಲ್ಲಿ ಅಂತಿಮನಮನ ಸಲ್ಲಿಸಲಾಗುವುದು. ನಂತರ ಅಶೋಕಪುರಂನ ಎನ್‌ಟಿಎಂ ಶಾಲಾ ಆವರಣದಲ್ಲಿ ಅಂತಿಮ ನಮನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಇಡೀ ರಾತ್ರಿ ಅಂತಿಮ ನಮನಕ್ಕೆ ಅವಕಾಶ ನೀಡಲಾಗುತ್ತದೆ. ನಾಳೆ ಬೆಳಗ್ಗೆ 10 ಗಂಟೆಗೆ ಅಶೋಕಪುರಂನಲ್ಲಿ ಮೆರವಣಿಗೆ ಬಳಿಕ ಅಂತ್ಯಕ್ರಿಯೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

ಸಂತಾಪ:
ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು- ಚಾಮರಾಜನಗರ ಭಾಗದ ದಲಿತ ನಾಯಕ ವಿ.ಶ್ರೀನಿವಾಸ ಪ್ರಸಾದ್‌ ನಿಧನಕ್ಕೆ ಪ್ರಧಾನಿ ಮೋದಿ ಹಾಗೂ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರು ಸಂತಾಪ ಸೂಚಿಸಿದ್ದಾರೆ.ಚಾಮರಾಜನಗರದ ಹಿರಿಯ ನಾಯಕ ಹಾಗೂ ಸಂಸದರಾದ ವಿ.ಶ್ರೀನಿವಾಸಪ್ರಸಾದ್‌ ಅವರ ನಿಧನದಿಂದ ನನಗೆ ಅತೀವ ನೋವಾಗಿದೆ. ಅವರು ಸಾಮಾಜಿಕ ನ್ಯಾಯದ ಹೋರಾಟಗಾರರಾಗಿದ್ದರು, ಬಡವರು, ದೀನದಲಿತರು ಮತ್ತು ಹಿಂದುಳಿದವರ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು.

ತಮ್ಮ ಸಮಾಜ ಸೇವೆಗಳಿಂದಲೇ ಬಹಳ ಜನಪ್ರಿಯರಾಗಿದ್ದರು. ಅವರ ಅಗಲಿಕೆಯ ನೋವನ್ನು ಕುಟುಂಬ ವರ್ಗದವರಿಗೆ ಸಹಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ. ಅವರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಪ್ರಧಾನಿ ಮೋದಿ ಬರೆದುಕೊಂಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರು, ಶ್ರೀನಿವಾಸ್‌ ಪ್ರಸಾದ್‌ ಅವರು ನಿಧನರಾದ ವಾರ್ತೆ ಕೇಳಿ ಬಹಳ ದುಃಖವಾಗಿದೆ. ಅವರ ಅಗಲಿಕೆ ರಾಜಕೀಯಕ್ಕೆ ತುಂಬಲಾರದ ನಷ್ಟ. ಅವರ ಅಗಲಿಕೆ ಭರಿಸುವ ಶಕ್ತಿಯನ್ನು ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ಆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೋಸ್ಟ್ ಮಾಡಿ, ದಲಿತ ದಮನಿತರ ಪರವಾದ ದಿಟ್ಟ ದನಿ ಮಾಜಿ ಸಚಿವ ಮತ್ತು ಹಿರಿಯ ಮುತ್ಸದ್ದಿ ನಾಯಕ ಶ್ರೀನಿವಾಸಪ್ರಸಾದ್‌ ಅವರ ಸಾವು ನನ್ನನ್ನು ಆಘಾತಕ್ಕೀಡು ಮಾಡಿದೆ. ಅನ್ಯಾಯ-ಅಸಮಾನತೆಯ ವಿರುದ್ಧದ ಹೋರಾಟವನ್ನೇ ಬದುಕಾಗಿಸಿಕೊಂಡಿದ್ದ ಅವರ ಅಗಲಿಕೆ ರಾಜ್ಯದ ಸಾಮಾಜಿಕ ನ್ಯಾಯದ ಪರವಾದ ರಾಜಕೀಯ ಹೋರಾಟಕ್ಕೆ ದೊಡ್ಡ ಹಿನ್ನಡೆಯಾಗಿದೆ ಎಂದು ಮರುಗಿದ್ದಾರೆ.

ದೀರ್ಘಕಾಲ ಕಾಂಗ್ರೆಸ್‌ ಪಕ್ಷದ ಪ್ರಮುಖ ನೇತಾರರಾಗಿ ಕೆಲಸ ಮಾಡಿದ್ದ ಶ್ರೀನಿವಾಸ ಪ್ರಸಾದ್‌ ಸಚಿವರಾಗಿ ಮತ್ತು ಲೋಕಸಭಾ ಸದಸ್ಯರಾಗಿ ದೀರ್ಘ ಕಾಲ ಜನ ಸೇವೆ ಮಾಡಿದ್ದಾರೆ. ಅವರೊಬ್ಬ ಪ್ರಗತಿಪರ ಚಿಂತನೆಯ ರಾಜಕೀಯ ನಾಯಕ ಎಂದು ಬರೆದಿದ್ದಾರೆ.
ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬದ ಸದಸ್ಯರು ಮತ್ತು ಅಪಾರ ಅಭಿಮಾನಿ ಬಳಗದ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಹೇಳಿದ್ದಾರೆ.

RELATED ARTICLES

Latest News