ಬೆಂಗಳೂರು, ಮಾ.27- ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಬಿಜೆಪಿಯ ನಾಯಕರು ಹಾಗೂ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಒಬ್ಬರಾದ ಮೇಲೆ ಒಬ್ಬರಂತೆ ಭೇಟಿಯಾಗಿ ಬೆಂಬಲ ಕೋರುತ್ತಿದ್ದಾರೆ. ಜತೆಗೆ ಜೆಡಿಎಸ್ ಅಭ್ಯರ್ಥಿಗಳಿಗೆ ಬೆಂಬಲ ನೀಡುವ ಭರವಸೆ ನೀಡುತ್ತಿದ್ದಾರೆ.
ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಮೂರನೇ ಬಾರಿಗೆ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಬಂದ ನಂತರ ಕುಮಾರಸ್ವಾಮಿ ಅವರನ್ನು ರಾಜಕೀಯ ಮುಖಂಡರು ಭೇಟಿಯಾಗುವುದು ಸಾಮಾನ್ಯವಾಗಿದೆ. ಕಳೆದ ಸೋಮವಾರದಿಂದಲೂ ನಿತ್ಯ ಬಿಜೆಪಿ ನಾಯಕರು ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸುವುದರ ಜತೆಗೆ ಲೋಕಸಭೆ ಚುನಾವಣೆಗೆ ಸಹಕಾರ ಕೋರುವುದು ನಡೆಯುತ್ತಿದೆ.
ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡಿವೆ. ಹೀಗಾಗಿ ಟಿಕೆಟ್ ಘೋಷಣೆಯಾಗಿದ್ದು, ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳು ತಮ್ಮ ತಮ್ಮ ಬೆಂಬಲಿಗರೊಂದಿಗೆ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸುತ್ತಿದ್ದಾರೆ. ಹೀಗಾಗಿ ಚುನಾವಣೆ ಸಂದರ್ಭದಲ್ಲಿ ಕುಮಾರಸ್ವಾಮಿ ಅವರಿಗೆ ಹೆಚ್ಚಿನ ಬೇಡಿಕೆ ಉಂಟಾಗಿದೆ.
ಕ್ಷೇತ್ರಗಳಲ್ಲಿರುವ ಜೆಡಿಎಸ್- ಬಿಜೆಪಿ ಕಾರ್ಯಕರ್ತರ ನಡುವಿನ ಗೊಂದಲ ಬಗೆಹರಿಸುವುದು. ಚುನಾವಣಾ ಪ್ರಚಾರದಲ್ಲಿ ಭಾಗವಹಿಸುವುದು, ಜಂಟಿ ಪ್ರಚಾರ ಸಭೆಗಳನ್ನು ಹಮ್ಮಿಕೊಳ್ಳುವುದು ಸೇರಿದಂತೆ ಚುನಾವಣೆ ತಯಾರಿ ಕುರಿತಂತೆ ಸಮಾಲೋಚನೆ ನಡೆಸುತ್ತಿದ್ದಾರೆ.
ಇಂದು ಬೆಳಿಗ್ಗೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಚುನಾವಣೆಯಲ್ಲಿ ಬೆಂಬಲ ಕೋರಿದ್ಧಾರೆ. ಈಗಾಗಲೇ ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ, ಮಾಜಿ ಸಚಿವ ನಾರಾಯಣಗೌಡ, ಕೇಂದ್ರ ಸಚಿವೆ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ, ಶಾಸಕ ಎಸ್. ಮುನಿರಾಜು ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದಾರೆ.
ಈ ನಡುವೆ ಸಂಸದ ಮುನಿಸ್ವಾಮಿ ಅವರು ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಕೋಲಾರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ. ಸಂಸದ ಜಿ.ಎಂ.ಸಿದ್ದೇಶ್ವರ, ಮಾಜಿ ಸಚಿವರಾದ ಮುರುಗೇಶ ನಿರಾಣಿ, ಬಳ್ಳಾರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು, ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸುಧಾಕರ್, ಸಂಸದ ಕರಡಿ ಸಂಗಣ್ಣ, ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಶಾಸಕ ಚಂದ್ರಪ್ಪ ಸೇರಿದಂತೆ ಬಿಜೆಪಿ ಮುಖಂಡರು ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದಾರೆ. ಕೆಲವರು ಜೆಡಿಎಸ್ ಮುಖಂಡರೊಂದಿಗೆ ಭೇಟಿಯಾಗಿದ್ದಾರೆ. ಡಾ. ಸುಧಾರಕರ್ ಅವರು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.
ಅದೇ ರೀತಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರು ಸಂಸದ ಪ್ರಜ್ವಲ್ ರೇವಣ್ಣ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಭೇಟಿಯಾಗಿ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಬೆಂಬಲ ಕೋರಿದ್ದಾರೆ. ಅಲ್ಲದೆ, ಹಾಸನ ಕ್ಷೇತ್ರದಲ್ಲಿನ ಬಿಜೆಪಿ ಮುಖಂಡರ ಅಸಮಾಧಾನ ಹೋಗಲಾಡಿಸುವಂತೆ ಮನವಿ ಮಾಡಿದ್ದಾರೆ,