ಬೆಂಗಳೂರು,ಜ.24-ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ, ಸಚಿವ ಸಂಪುಟ ಪುನಾರಚನೆ/ವಿಸ್ತರಣೆ, ಬಿಬಿಎಂಪಿ, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿ ಚುನಾವಣೆಗಳು ಸೇರಿದಂತೆ ಮಹತ್ವದ ವಿಷಯಗಳ ಬಗ್ಗೆ ಚರ್ಚಿಸಲು ನಾಳೆ ಬಿಜೆಪಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಯಲಿದೆ. ಪಕ್ಷದ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರು, ಶಾಸಕರು, ಪದಾಧಿಕಾರಿಗಳು ಸೇರಿದಂತೆ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ.
ಒಟ್ಟು ಮೂರು ದಿನ ನಡೆಯಲಿರುವ ಸರಣಿ ಸಭೆಯಲ್ಲಿ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಯಲಿದ್ದು, ಮುಂಬರುವ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಕಾರ್ಯತಂತ್ರ ರೂಪಿಸಲಿದೆ. ಸಭೆಯಲ್ಲಿ ಪ್ರಮುಖವಾಗಿ ಸಚಿವ ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆ ಮಾಡಬೇಕೆಂದು ಶಾಸಕರು ಪದೇ ಪದೇ ಒತ್ತಡ ಹಾಕುತ್ತಿರುವುದು, ಅದಕ್ಷ ಸಚಿವರನ್ನು ಕೈಬಿಟ್ಟು ಹೊಸ ಮುಖಗಳಿಗೆ ಆದ್ಯತೆ ನೀಡುವ ಬಗ್ಗೆ ಅಭಿಪ್ರಾಯವನ್ನು ಸಂಗ್ರಹಿಸಲಾಗುವುದು.
ಶಾಸಕರು ಪ್ರತ್ಯೇಕವಾಗಿ ನಿರಂತರ ಸಭೆ ನಡೆಸಿ ಚುನಾವಣಾ ವರ್ಷ ಆಗಿರುವುದರಿಂದ ಸಂಪುಟ ಪುನಾರಚನೆ ಮಾಡಬೇಕೆಂದು ಒತ್ತಡ ಹಾಕುತ್ತಿದ್ದಾರೆ.ಇರುವ ನಾಲ್ಕು ಸ್ಥಾನಗಳ ಮೇಲೆ ಎರಡು ಡಜನ್‍ಗೂ ಅಧಿಕ ಶಾಸಕರು ಕಣ್ಣಿಟ್ಟಿರುವುದರಿಂದ ಈ ಸಭೆ ಮಹತ್ವ ಪಡೆದುಕೊಂಡಿದೆ.
ಮಾರ್ಚ್ ಅಥವಾ ಏಪ್ರಿಲ್ ತಿಂಗಳಿನಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿ ಚುನಾವಣೆ ನಡೆಯುವ ಸಂಭವವಿದೆ. ಇತ್ತೀಚೆಗೆ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ಫಲಿತಾಂಶ ಅಷ್ಟೇನೂ ತೃಪ್ತಿ ತಂದಿಲ್ಲದ ಕಾರಣ ಈ ಚುನಾವಣೆಯನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿದೆ.ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಚುನಾವಣಾ ಸಂದರ್ಭದಲ್ಲಿ ಜನತೆಗೆ ಹೊಸ ಸಂದೇಶ ನೀಡಬೇಕೆಂಬುದು ಕಮಲ ಪಕ್ಷದ ಲೆಕ್ಕಾಚಾರ.
ಮೇಕೆದಾಟು ನದಿನೀರು ಯೋಜನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಡೆಸಿದ ಪಾದಯಾತ್ರೆಯಿಂದ ತುಸು ತಲೆಕೆಡಿಸಿಕೊಂಡಿರುವ ಬಿಜೆಪಿ ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ಹೆಚ್ಚು ಸ್ಥಾನ ಗಳಿಸುವ ಮೂಲಕ ಜನಾದೇಶ ತಮ್ಮ ಪರವಾಗಿದೆ ಎಂದು ಬಿಂಬಿಸಿಕೊಳ್ಳಲು ಕಾರ್ಯತಂತ್ರ ರೂಪಿಸುತ್ತಿದೆ.
ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆ ಸಂದರ್ಭದಲ್ಲೇ ಬಿಬಿಎಂಪಿ ಚುನಾವಣೆಯನ್ನು ನಡೆಸಬೇಕೆಂಬ ಬೇಡಿಕೆ ಹೆಚ್ಚಾಗುತ್ತಿದೆ. ಸರ್ಕಾರದ ಪಾಲಿಗೆ ಈ ಚುನಾವಣೆ ಅತ್ಯಂತ ಪ್ರತಿಷ್ಟೆಯಾಗಿದ್ದು,ಇಲ್ಲಿ ಗೆದ್ದರೆ 2023 ವಿಧಾನಸಭೆ ಚುನಾವಣೆಗೆ ದಾರಿ ಸುಗಮವಾಗಲಿದೆ ಎಂಬುದು ಬಿಜೆಪಿ ನಾಯಕರ ಲೆಕ್ಕಾಚಾರವಾಗಿದೆ.
ಇದರ ಮುಂದುವರೆದ ಭಾಗವಾಗಿಯೇ ನಾಳೆಯಿಂದ ಸರಣಿ ಸಭೆಗಳನ್ನು ನಡೆಸಲಿದೆ. ಮಾಜಿ ಸಿಎಂ ಯಡಿಯೂರಪ್ಪ ಅಧಿಕಾರ ಅವಧಿಯಲ್ಲಿ ನಿಗಮ ಮಂಡಳಿ ಅಧ್ಯಕ್ಷರನ್ನು ತೆಗೆದು ಹಾಕಿ, ಪಕ್ಷಕ್ಕೆ ದುಡಿದವರಿಗೆ ನೀಡಬೇಕೆಂದು ಅನೇಕರು ಒತ್ತಾಯಿಸಿದ್ದಾರೆ.
ಯಡಿಯೂರಪ್ಪ ತಮ್ಮ ಹಿಂಬಾಲಿಕರಿಗೆ ನಿಗಮ ಮಂಡಳಿಯಲ್ಲಿ ಸ್ಥಾನಮಾನ ನೀಡಿದ್ದರಿಂದ ಅನೇಕರು ಅಸಮಾಧಾನಗೊಂಡಿದ್ದಾರೆ. ಹೀಗಾಗಿ ಪಕ್ಷಕ್ಕೆ ಹಲವು ವರ್ಷಗಳಿಂದ ದುಡಿದವರನ್ನು ಕೊನೆಯ ಒಂದು ವರ್ಷಕ್ಕಾದರೂ ನೇಮಿಸಬೇಕೆಂಬ ಕೂಗು ಕೇಳಿಬರುತ್ತಿದೆ. ಈ ಎಲ್ಲ ಬೆಳವಣಿಗೆಗಳ ಬಗ್ಗೆ ನಾಳೆಯಿಂದ ಆರಂಭವಾಗಲಿರುವ ಸಭೆಯಲ್ಲಿ ಸುದೀರ್ಘ ಚರ್ಚೆ ಡೆಯಲಿದೆ.
