ಶನಿವಾರ ಬಿಜೆಪಿಯ ಕೋರ್ ಕಮಿಟಿ ಸಭೆ

ಬೆಂಗಳೂರು,ಜೂ.3-ರಾಜ್ಯಸಭೆ ಹಾಗೂ ವಿಧಾನಪರಿಷತ್ ಚುನಾವಣೆ ಮತ್ತು ವಿಧಾನಪರಿಷತ್‍ಗೆ ನಾಮನಿರ್ದೇಶನ ಮಾಡುವ ಕುರಿತು ಶನಿವಾರ ಬಿಜೆಪಿಯ ಕೋರ್ ಕಮಿಟಿ ಸಭೆ ನಡೆಯಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಅವರು ಶನಿವಾರ ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ಸಭೆ ನಡೆಸಿ ಅಭ್ಯರ್ಥಿ ಆಯ್ಕೆ ಸಂಬಂಧ ಮುಖಂಡರ ಜೊತೆ ಮಾತುಕತೆ ನಡೆಸುವರು.

ಈ ಸಭೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೋರ್ ಕಮಿಟಿ ಸದಸ್ಯರಾದ ಕೆ.ಎಸ್.ಈಶ್ವರಪ್ಪ, ಜಗದೀಶ್ ಶೆಟ್ಟರ್, ಆರ್.ಅಶೋಕ್, ಗೋವಿಂದ ಕಾರಜೋಳ, ರಾಜ್ಯ ಉಸ್ತುವಾರಿ ಮುರುಳೀಧರ್ ರಾವ್, ಕೇಂದ್ರ ಸಚಿವರಾದ ಸದಾನಂದಗೌಡ, ಪ್ರಹ್ಲಾದ್ ಜೋಷಿ ಮತ್ತಿತರರು ಆಗಮಿಸುವರು. ಸಭೆಯಲ್ಲಿ ಮುಖ್ಯವಾಗಿ ಇದೇ 19ರಂದು ನಡೆಯಲಿರುವ ರಾಜ್ಯಸಭೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಪಕ್ಷದ ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಿಕೊಡುವ ಸಂಭವವಿದೆ.

ಹಾಲಿ ಸದಸ್ಯ ಪ್ರಭಾಕರ್ ಕೋರೆ ಅಧಿಕಾರಾವಧಿ ಕೊನೆಗೊಳ್ಳಲಿದ್ದು, ಪುನಃ ಮತ್ತೊಂದು ಅವಧಿಗೆ ಅವರನ್ನೇ ಆಯ್ಕೆ ಮಾಡುವ ಬಗ್ಗೆ ಚರ್ಚೆ ನಡೆಯಲಿದೆ.  ಈ ನಡುವೆ ಶಾಸಕ ಉಮೇಶ್ ಕತ್ತಿ ಸಹೋದರ ರಮೇಶ್ ಕತ್ತಿ ಕೂಡ ಪ್ರಬಲ ಆಕಾಂಕ್ಷಿಯಾಗಿದ್ದು, ಈಗಾಗಲೂ ತಾವು ಕೂಡ ಆಕಾಂಕ್ಷಿ ಎಂಬುದನ್ನು ಬಹಿರಂಗವಾಗಿಯೇ ಹೇಳಿದ್ದಾರೆ.

ಎರಡು ಸ್ಥಾನಗಳನ್ನು ಆಯ್ಕೆ ಮಾಡುವ ಸಾಧ್ಯತೆ ಇರುವುದರಿಂದ ಪ್ರಭಾಕರ್ ಕೋರೆಗೆ ಪುನಃ ಮಣೆ ಹಾಕಿದರೆ ಉಳಿದ ಒಂದು ಸ್ಥಾನಕ್ಕೆ ಯಾರೆಂಬುದು ಕಗ್ಗಂಟಾಗಿ ಉಳಿಯಲಿದೆ.  ತೇಜಸ್ವಿನಿ ಅನಂತಕುಮಾರ್, ಸುಧಾನಾರಾಯಣಮುರ್ತಿ, ಪ್ರೋ.ನಾಗರಾಜ್, ಡಾ.ವಾಮನಚಾರ್ಯ, ಉದ್ಯಮಿ ವಿಜಯ್ ಸಂಕೇಶ್ವರ್ ಸೇರಿದಂತೆ ಅನೇಕರ ಹೆಸರುಗಳು ಕೇಳಿಬರುತ್ತಿದೆ.

ವಿಧಾನಸಭೆಯಿಂದ ವಿಧಾನಪರಿಷತ್‍ಗೆ ನಾಲ್ವರನ್ನು ಆಯ್ಕೆ ಮಾಡಲು ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಯಾರನ್ನು ಆಯ್ಕೆ ಮಾಡಬೇಕು ಎಂಬುದರ ಕುರಿತು ಕೋರ್‍ಕಮಿಟಿ ತೀರ್ಮಾನಿಸಲಿದೆ. ಆಪರೇಷನ್ ಕಮಲದಲ್ಲಿ ಮುಖ್ಯ ಪಾತ್ರ ವಹಿಸಿದ್ದ ಮಾಜಿ ಸಚಿವರಾದ ಸಿ.ಪಿ.ಯೋಗೇಶ್ವರ್, ಎಚ್.ವಿಶ್ವನಾಥ್, ಎಂ.ಟಿ.ಬಿ.ನಾಗರಾಜ್, ಮಾಜಿ ಪರಿಷತ್ ಸದಸ್ಯರಾದ ಗೋ.ಮಧುಸೂದನ್, ಭಾರತಿ ಶೆಟ್ಟಿ, ಚಿತ್ರನಟಿ ಶೃತಿ ಸೇರಿದಂತೆ ಅನೇಕರು ಆಕಾಂಕ್ಷಿಗಳಾಗಿದ್ದಾರೆ.

ಶಿಕ್ಷಣ, ಸಾಹಿತ್ಯ, ಪತ್ರಿಕೋದ್ಯಮ, ಚಿತ್ರರಂಗ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಐವರನ್ನು ವಿಧಾನಪರಿಷತ್‍ಗೆ ನಾಮನಿರ್ದೇಶನ ಮಾಡಲು ಅವಕಾಶವಿದೆ. ಈಗಾಗಲೇ ನಾಮನಿರ್ದೇಶನ ಮಾಡಲು ಮುಖ್ಯಮಂತ್ರಿಗೆ ಸಚಿವ ಸಂಪುಟ ಸಭೆ ಸಂಪೂರ್ಣ ಅಧಿಕಾರ ನೀಡಿದೆ. ಔಪಚಾರಿಕವಾಗಿ ಪಕ್ಷದ ಸಭೆಯಲ್ಲಿ ಚರ್ಚೆ ಮಾಡಿ ತೀರ್ಮಾನಿಸಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ.