ಬೆಂಗಳೂರು,ಜ.1- ಹೊಸ ವರ್ಷದಲ್ಲಿ ಸರ್ಕಾರ ಮತ್ತು ಪಕ್ಷದ ನಡುವೆ ಯಾವುದೇ ರೀತಿಯ ಸಮನ್ವಯತೆ ಉಂಟಾಗದಂತೆ ಆಡಳಿತಕ್ಕೆ ಚುರುಕು ನೀಡಲು ಮುಂದಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇದೇ ಜ.8 ಮತ್ತು 9ರಂದು ಮಹತ್ವದ ಸಭೆ ನಡೆಸಲಿದ್ದಾರೆ.
ಸಚಿವ ಸಂಪುಟ ಪುನರ್ ರಚನೆ ಸುಳಿವು ಬೆನ್ನಲ್ಲೇ ಸಚಿವರ ಜೊತೆ ಸಭೆ ನಡೆಸುತ್ತಿರುವುದು ಕುತೂಹಲ ಮೂಡಿಸಿದೆ.
ಬಿಜೆಪಿ ವರಿಷ್ಠರ ಸಮ್ಮುಖದಲ್ಲಿ ನಡೆಯಲಿರುವ ಸಭೆಯಲ್ಲಿ ಸಚಿವರ ಕಾರ್ಯವೈಖರಿ ಹಾಗೂ ಪಕ್ಷ ಸಂಘಟನೆ ಬಗ್ಗೆ ಸಮಾಲೋಚನೆ ನಡೆಯಲಿದೆ ಎಂದು ಹೇಳಲಾಗಿದೆ.
ಚುನಾವಣೆ ವರ್ಷ ಬರುತ್ತಿರುವ ಕಾರಣ ಸಂಪುಟ ಪುನರಚನೆಯ ಕೂಗು ಬಲವಾಗಿ ಕೇಳಿ ಬರುತ್ತಿದ್ದು, ಹಿರಿಯರನ್ನು ಕೈ ಬಿಟ್ಟು ಹೊಸ ಮುಖಗಳಿಗೆ ಮಣೆ ಹಾಕುವ ಸಂಬಂಧ ಒತ್ತಡ ಹೆಚ್ಚಾಗಿದೆ. ಕೆಲ ಸಚಿವರ ಕಾರ್ಯವೈಖರಿ ಬಗ್ಗೆ ಹೈಕಮಾಂಡ್ ಗೆ ಅತೃಪ್ತಿ ಇದ್ದು, ಈ ಸಂದರ್ಭ ನಡೆಯುತ್ತಿರುವ ಹೈ ಕಮಾಂಡ್ ಜೊತೆಗಿನ ಸಭೆ ಸಾಕಷ್ಟು ಮಹತ್ವ ಪಡೆದುಕೊಂಡಿದೆ. ಇತ್ತೀಚಿನ ಪರಿಷತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶದ ಬಗ್ಗೆನೂ ಸಭೆಯಲ್ಲಿ ಚರ್ಚೆ ನಡೆಯಲಿದೆ.
ಇದರ ಜೊತೆಗೆ ಕೇಂದ್ರ ಸರ್ಕಾರದ ಯೋಜನೆಗಳ ಅನುಷ್ಠಾನ, ಲಸಿಕೆ ಕಾರ್ಯಕ್ರಮದ ಬಗ್ಗೆ ಮೋದಿ ಸರ್ಕಾರದ ಸಾಧನೆಯನ್ನು ಜನತೆಗೆ ತಲುಪಿಸುವ ನಿಟ್ಟಿನಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.
ನಂದಿಬೆಟ್ಟದಲ್ಲಿ ಈ ಸಭೆ ಆಯೋಜಿಸಲಾಗಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಪಾಲ್ಗೊಳ್ಳುವರು ಎಂದು ಪಕ್ಷದ ಮೂಲಗಳು ತಿಳಿಸಿವೆ.
