ಬೆಂಗಳೂರು,ಫೆ.20- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಲೆದಂಡಕ್ಕೆ ಪಟ್ಟು ಹಿಡಿದು ಪ್ರತಿಪಕ್ಷ ಕಾಂಗ್ರೆಸ್ ಉಭಯ ಸದನಗಳಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ನಾಳೆ ಬಿಜೆಪಿ ತುರ್ತು ಸಭೆ ಕರೆದಿದೆ. ಒಂದು ಕಡೆ ಈಶ್ವರಪ್ಪನವರ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಕಳೆದ ನಾಲ್ಕು ದಿನಗಳಿಂದ ವಿಧಾನಸಭೆ ಮತ್ತು ವಿಧಾನಪರಿಷತ್‍ನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿರುವ ಬೆನ್ನಲ್ಲೇ ಬಿಜೆಪಿ ಪ್ರಮುಖರ ಸಭೆ ನಡೆಸುತ್ತಿರುವುದು ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.
ನಾಳೆ ಬೆಳಗ್ಗೆ 7 ಗಂಟೆಗೆ ಪಕ್ಷದ ಕಚೇರಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್, ಮಾಜಿ ಸಿಎಂ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಸಚಿವರಾದ ಆರ್.ಅಶೋಕ್, ಕೆ.ಎಸ್.ಈಶ್ವರಪ್ಪ, ಜೆ.ಸಿ.ಮಾಧುಸ್ವಾಮಿ ಸೇರಿದಂತೆ ಮತ್ತಿತರ ಪ್ರಮುಖರು ಭಾಗವಹಿಸಲಿದ್ದಾರೆ.
ಬಿಜೆಪಿ ಹೈಕಮಾಂಡ್ ಸೂಚನೆ ಮೇರೆಗೆ ತುರ್ತು ಸಭೆಯನ್ನು ಕರೆಯಲಾಗಿದ್ದು, ಸಭೆಯಲ್ಲಿ ಪ್ರಮುಖವಾಗಿ ಈಶ್ವರಪ್ಪ ರಾಜೀನಾಮೆಗೆ ಕಾಂಗ್ರೆಸ್ ನಾಳೆ ರಾಜ್ಯಾದ್ಯಂತ ಹೋರಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಬಗ್ಗೆ ಚರ್ಚೆ ನಡೆಯಲಿದೆ. ಈಶ್ವರಪ್ಪ ರಾಜೀನಾಮೆ ಮುಂದಿಟ್ಟುಕೊಂಡು ಕಾಂಗ್ರೆಸ್ ರಾಜ್ಯಾದ್ಯಂತ ಹೋರಾಟಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಇದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಬಿಜೆಪಿ ವರಿಷ್ಠರ ಸೂಚನೆಯಂತೆ ಸಭೆ ಕರೆಯಲಾಗಿದ್ದು, ಕಾಂಗ್ರೆಸ್ ತಂತ್ರಕ್ಕೆ ಯಾವೆಲ್ಲ ಪ್ರತಿ ತಂತ್ರ ಹೆಣೆಯಬೇಕು ಎಂಬುದರ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುತ್ತದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಈಶ್ವರಪ್ಪ ಹೇಳಿಕೆ ಪಕ್ಷಕ್ಕೆ ಹಿನ್ನಡೆ ಉಂಟು ಮಾಡುತ್ತಿದ್ದು, ಕಾಂಗ್ರೆಸ್ ಇದನ್ನು ರಾಷ್ಟ್ರ ಮಟ್ಟಕ್ಕೆ ಕೊಂಡೊಯ್ಯುಲು ಮುಂದಾಗಿರುವುದರಿಂದ ಪಕ್ಷಕ್ಕೆ ಹೆಚ್ಚಿನ ಹಾನಿಯಾಗಬಹುದು ಎಂಬ ಆತಂಕದಿಂದ ಪ್ರಮುಖರ ಸಭೆಯನ್ನು ಕರೆಯಲಾಗಿದೆ. ರಾಷ್ಟ್ರಧ್ವಜ ಕುರಿತು ಈಶ್ವರಪ್ಪ ಇಂತಹ ಹೇಳಿಕೆ ನೀಡಬೇಕಾದ ಅಗತ್ಯವಿರಲಿಲ್ಲ. ಕಾಂಗ್ರೆಸ್‍ಗೆ ಮುನ್ನವೇ ನಾವೇ ಅಸ್ತ್ರ ನೀಡಿದಂತಾಗಿದೆ. ತಕ್ಷಣವೇ ಇದನ್ನು ಪರಿಹರಿಸಿಕೊಳ್ಳಬೇಕೆಂದು ರಾಷ್ಟ್ರೀಯ ನಾಯಕರು ಸೂಚನೆ ಕೊಟ್ಟಿದ್ದಾರೆ.
ಹಿಜಾಬ್ ಬಗ್ಗೆಯೂ ಚರ್ಚೆ: ನಾಳಿನ ಸಭೆಯಲ್ಲಿ ಇನ್ನು ರಾಜ್ಯಾದ್ಯಂತ ತೀವ್ರ ಸಂಘರ್ಷವನ್ನುಂಟು ಮಾಡಿರುವ ಹಿಜಾಬ್ ಬಗ್ಗೆಯೂ ಚರ್ಚೆ ನಡೆಯಲಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಸಂಕೇತಗಳನ್ನು ಬಳಸದೆ ಸದ್ಯಕ್ಕೆ ಎಲ್ಲರೂ ಯಥಾಸ್ಥಿತಿ ಕಾಪಾಡಿಕೊಳ್ಳಬೇಕೆಂದು ಹೈಕೋರ್ಟ್ ಮಧ್ಯಂತರ ತೀರ್ಪು ನೀಡಿದೆ. ಆದರೂ ಶಿಕ್ಷಣ ಸಂಸ್ಥೆಗಳಲ್ಲಿ ಪರ-ವಿರೋಧ ಚರ್ಚೆ ಆರಂಭವಾಗಿ ಸಂಘರ್ಷಕ್ಕೆ ಎಡೆ ಮಾಡಿಕೊಟ್ಟಿದೆ.
ಪರೀಕ್ಷೆಗಳು ಆರಂಭವಾಗಲಿದ್ದು, ಇದನ್ನು ಹೆಚ್ಚು ಮುಂದುವರೆಸದೆ ಶಿಕ್ಷಣ ಸಂಸ್ಥೆಗಳಲ್ಲಿ ಸೌಹಾರ್ದಯುತ ವಾತಾರಣ ಮೂಡಿಸುವ ಬಗ್ಗೆ ಚರ್ಚೆ ನಡೆಯಲಿದೆ.
ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಹಾಗೂ ಪಕ್ಷದ ಎಲ್ಲಾ ಪದಾಕಾರಿಗಳು ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ಸಂಘರ್ಷಕ್ಕೆ ಎಡೆ ಮಾಡಿಕೊಡದೆ ಸೌಹಾರ್ದಯುತ ವಾತಾವರಣವನ್ನು ಮೂಡಿಸಲು ಎಲ್ಲರೂ ಕಾರ್ಯೋನ್ಮುಖರಾಗಬೇಕೆಂದು ರಾಜ್ಯ ನಾಯಕರು ನಿರ್ದೇಶನ ನೀಡಲಿದ್ದಾರೆ.
ಇನ್ನು ಮುಂದೆ ಯಾವುದೇ ವಿಷಯದ ಬಗ್ಗೆ ಪ್ರಮುಖರನ್ನು ಹೊರತುಪಡಿಸಿ ಅನಗತ್ಯವಾಗಿ ಗೊಂದಲದ ಹೇಳಿಕೆ ನೀಡಿ ಪಕ್ಷ ಮತ್ತು ಸರ್ಕಾರಕ್ಕೆ ಮುಜುಗರ ಸೃಷ್ಟಿಸಬಾರದು ಎಂದು ಎಲ್ಲರಿಗೂ ಕಟ್ಟಪ್ಪಣೆ ವಿಸುವ ಸಾಧ್ಯತೆ ಇದೆ.
