Monday, June 17, 2024
Homeರಾಜ್ಯಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಆಸ್ಪತ್ರೆಗೆ ದಾಖಲು

ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಆಸ್ಪತ್ರೆಗೆ ದಾಖಲು

ಬೆಂಗಳೂರು, ಏ.23- ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅನಾರೋಗ್ಯಕ್ಕೀಡಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ರಾತ್ರಿಯೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಾಲಿನಲ್ಲಿ ಗಾಯ ಉಲ್ಬಣಗೊಂಡ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಡಾ.ಸುದರ್ಶನ್ ಬಲ್ಲಾಳ್ ಅವರು ಚಿಕಿತ್ಸೆ ನೀಡುತ್ತಿದ್ದಾರೆ.

ಇನ್ನೆರಡು ದಿನಗಳು ಐಸಿಯುನಲ್ಲೇ ಚಿಕಿತ್ಸೆ ಮುಂದುವರೆಯಲಿದೆ. ನಂತರ ವಾರ್ಡ್ಗೆ ಶಿಫ್ಟ್ ಮಾಡಲಾಗುವುದು ಎಂದು ಬಲ್ಲಾಳ್ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಶ್ರೀ ನಿವಾಸ್ ಪ್ರಸಾದ್ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. ಈ ಮಧ್ಯೆ, ಶ್ರೀ ನಿವಾಸ್ ಪ್ರಸಾದ್ ಅಳಿಯ ಧೀರಜ್ ಪ್ರಸಾದ್ ಮತ್ತು ಸಹೋದರ ಕಾಂಗ್ರೆಸ್ ಸೇರಿದ್ದರು. ಇದು ಚಾಮರಾಜನಗರ ರಾಜಕೀಯದಲ್ಲಿ ಬಹಳ ಚರ್ಚೆಗೆ ಗ್ರಾಸವಾಗಿತ್ತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ತವರು ಕ್ಷೇತ್ರ ವರುಣಾ ಇರುವ ಲೋಕಸಭಾ ಕ್ಷೇತ್ರವಾದ ಚಾಮರಾಜನಗರ ಗೆಲ್ಲಿಸಲೇಬೇಕೆಂದು ಪಣ ತೊಟ್ಟಿದ್ದು, ಶ್ರೀನಿವಾಸ್ ಪ್ರಸಾದ್ರನ್ನು ಇತ್ತೀಚೆಗೆ ಭೇಟಿಯಾಗಿ ಮಾತುಕತೆ ನಡೆಸಿದ್ದರು. ಇದು ಶ್ರೀನಿವಾಸ್ ಪ್ರಸಾದ್ ಕಾಂಗ್ರೆಸ್ ಕಡೆ ವಾಲಿದ್ದಾರೆಯೇ ಎಂಬ ಅನುಮಾನಕ್ಕೆ ಕಾರಣವಾಗಿತ್ತು.

ಈ ಎಲ್ಲ ಬೆಳವಣಿಗೆಗಳ ಮಧ್ಯೆ, ಮೈಸೂರಿನಲ್ಲಿ ಪ್ರಧಾನಿ ಮೋದಿ ಸಮಾವೇಶದ ಸಂದರ್ಭದಲ್ಲಿ ಶ್ರೀನಿವಾಸ್ ಪ್ರಸಾದ್ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ ನೀಡಿಮನವೊಲಿಸುವ ಪ್ರಯತ್ನ ಮಾಡಿದ್ದರು. ಮೋದಿ ಕಾರ್ಯಕ್ರಮಕ್ಕೆ ಬರುವಂತೆ ಆಹ್ವಾನ ನೀಡಿದ್ದರು. ಆದರೆ, ಯಡಿಯೂರಪ್ಪ ಆಹ್ವಾನವನ್ನು ಶ್ರೀನಿವಾಸ್ ಪ್ರಸಾದ್ ನಯವಾಗಿ ತಿರಸ್ಕರಿಸಿದ್ದರು.

ಶ್ರೀನಿವಾಸದ ಪ್ರಸಾದ್ ಅವರು ಕೇಂದ್ರದಲ್ಲಿ ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಗ್ರಾಹಕ ಸೇವೆಗಳ ಸಚಿವರಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2013 ರಿಂದ 2016 ರವರೆಗೆ ಕರ್ನಾಟಕದಲ್ಲಿ ಸಿದ್ದರಾಮಯ್ಯ ಸರ್ಕಾರದಲ್ಲಿ ಕಂದಾಯ ಮತ್ತು ಮುಜರಾಯಿ ಖಾತೆ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಈವರೆಗೆ 6 ಬಾರಿ ಲೋಕಸಭಾ ಚುನಾವಣೆ ಸೇರಿದಂತೆ ಒಟ್ಟು 14 ಚುನಾವಣೆಗಳಲ್ಲಿ ಸ್ರ್ಪಧಿಸಿ 11 ಬಾರಿ ಜಯಗಳಿಸಿದ್ದಾರೆ.

RELATED ARTICLES

Latest News