Saturday, February 24, 2024
Homeರಾಜ್ಯಹಿಂದೂ ಕಾರ್ಯಕರ್ತರ ಬಂಧನ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಹಿಂದೂ ಕಾರ್ಯಕರ್ತರ ಬಂಧನ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಬೆಂಗಳೂರು,ಜ.3- ರಾಮ ಜನ್ಮಭೂಮಿಗಾಗಿ ಹೋರಾಟ ನಡೆಸಿದ ಹಿಂದೂ ಕಾರ್ಯಕರ್ತರನ್ನು ಬಂಧಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಪ್ರತಿಪಕ್ಷ ಬಿಜೆಪಿ ಇಂದು ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಿದೆ.
ರಾಜಧಾನಿ ಬೆಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಮೈಸೂರು, ಚಾಮರಾಜನಗರ, ದಾವಣಗೆರೆ, ಕಲಬುರಗಿ, ಮಂಗಳೂರು, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ತುಮಕೂರು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.

ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಸೇರಿದಂತೆ ಮಾಜಿ ಸಚಿವರು, ಶಾಸಕರು, ಸಂಸದರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಕೆಂಡಕಾರಿದ್ದಾರೆ. ನಗರದ ಫ್ರೀಡಂಪಾರ್ಕ್‍ನಲ್ಲಿ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು.

ಹೊಸ ಕಾನೂನು ಮಸೂದೆ ಆಧ್ಯಯನಕ್ಕೆ ಮುಂದಾದ ದೆಹಲಿ ಪೊಲೀಸರು

ಅತ್ತ ಹುಬ್ಬಳ್ಳಿಯಲ್ಲಿ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಮತ್ತು ಸಂಘ ಪರಿವಾರದ ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿ ಠಾಣೆಗೆ ಮುತ್ತಿಗೆ ಹಾಕುವ ಪ್ರಯತ್ನ ನಡೆಸಿದರು.
ಈ ವೇಳೆ ಪ್ರತಿಭಟನಾನಿರತರು ಹಾಗೂ ಪೊಲೀಸರ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆದು ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೂ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಭಾರೀ ಬಿಗಿಭದ್ರತೆಯನ್ನು ಕೈಗೊಳ್ಳಲಾಗಿತ್ತು.

ಇದೇ ರೀತಿ ರಾಜ್ಯದ ಹಲವು ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುವ ಮೂಲಕ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಅಲ್ಪಸಂಖ್ಯಾತರನ್ನು ತುಷ್ಟೀಕರಣ ಮಾಡಲು 31 ವರ್ಷಗಳ ಹಿಂದಿನ ಪ್ರಕರಣವನ್ನು ಕೆದಕಿ ರಾಮ ಜನ್ಮಭೂಮಿಗಾಗಿ ಹೋರಾಟ ನಡೆಸಿದ ಹಿಂದೂ ಕಾರ್ಯಕರ್ತರನ್ನು ಬಂಧಿಸಿ ಜೈಲಿಗಟ್ಟಿದೆ. ಬರುವ ದಿನಗಳಲ್ಲಿ ಇದರ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಹಿಂದೂ ಕಾರ್ಯಕರ್ತರನ್ನು ಇದೇ ರೀತಿ ಬಂಧಿಸಿದರೆ ರಾಷ್ಟ್ರ ಮಟ್ಟದಲ್ಲೂ ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ. ತಕ್ಷಣವೇ ಬಂಧಿಸಿರುವ ಹಿಂದೂ ಕಾರ್ಯಕರ್ತ ಶ್ರೀಕಾಂತ್ ಕುಲಕರ್ಣಿಯನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು. ಇಡೀ ದೇಶವೇ ರಾಮಮಂದಿರ ನಿರ್ಮಿಸಿದ್ದಕ್ಕಾಗಿ ಸಂಭ್ರಮದಲ್ಲಿದೆ. ಆದರೆ ಒಂದು ಸಮುದಾಯವನ್ನು ತೃಪ್ತಿಪಡಿಸಲು ಸರ್ಕಾರ ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಟ್ಟುಕೊಂಡು ಬಂಧಿಸುವ ಕೆಲಸಕ್ಕೆ ಕೈ ಹಾಕಿದೆ. ರಾಮಭಕ್ತರು ಸಿಡಿದೆದ್ದರೆ ಯಾವ ಸರ್ಕಾರವೂ ಉಳಿಯುವುದಿಲ್ಲ. ಇದೇ ರೀತಿ ಹಿಂದೂ ವಿರೋಧಿ ಧೋರಣೆ ಅನುಸರಿಸಿದರೆ ದೇಶದ ಜನತೆಯೇ ಮುಗಿಬೀಳಲಿದ್ದಾರೆ ಎಂದು ಎಚ್ಚರಿಕೆ ಕೊಟ್ಟರು.

RELATED ARTICLES

Latest News