ಬೆಂಗಳೂರು, ನ.11- ರಾಜ್ಯ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಬಿ.ವೈ. ವಿಜಯೇಂದ್ರ ಇದೇ 15ರಂದು ಅಕೃತವಾಗಿ ಪಕ್ಷದ ಸಾರಥ್ಯ ವಹಿಸಿಕೊಳ್ಳಲಿದ್ದಾರೆ. ದೀಪಾವಳಿ ಹಬ್ಬದ ನಂತರ ಪಕ್ಷದ ಕಚೇರಿಯಲ್ಲಿ ನಡೆಯಲಿರುವ ಅದ್ಧೂರಿ ಕಾರ್ಯಕ್ರಮದಲ್ಲಿ ಹಲವು ರಾಷ್ಟ್ರೀಯ ನಾಯಕರು ಹಾಗೂ ಪಕ್ಷದ ಪ್ರಮುಖರ ಸಮ್ಮುಖದಲ್ಲಿ ನಿರ್ಗಮಿತ ಅಧ್ಯಕ್ಷ ನಳಿನ್ಕುಮಾರ್ ಕಟಿಲ್ ಅವರಿಂದ ಅಧಿಕಾರ ಸ್ವೀಕರಿಸಲಿದ್ದಾರೆ.
ಕಾರ್ಯಕ್ರಮವನ್ನು ಅತ್ಯಂತ ಅದ್ಧೂರಿಯಾಗಿ ನಡೆಸಲು ಉದ್ದೇಶಿಸಿರುವ ವಿಜಯೇಂದ್ರ ಅಭಿಮಾನಿಗಳು ಭರ್ಜರಿ ಕಾರ್ಯಕರ್ತರನ್ನು ಸೇರಿಸಿ ಹೊಸ ಸಂದೇಶ ರವಾನಿಸಲು ಮುಂದಾಗಿದ್ದಾರೆ.ಈ ಹಿಂದೆ ಕೆಪಿಸಿಸಿ ಅಧ್ಯಕ್ಷರಾಗಿದ್ದ ವೇಳೆ ಡಿ.ಕೆ.ಶಿವಕುಮಾರ್ ಯಾವ ರೀತಿ ಕಾರ್ಯಕ್ರಮ ಆಯೋಜಿಸಿದ್ದರೋ ಅದೇ ಮಾದರಿಯಲ್ಲಿ ವಿಜಯೇಂದ್ರ ಕಾರ್ಯಕ್ರಮ ಆಯೋಜಿಸಲು ಮುಂದಾಗಿದ್ದು, ಪಕ್ಷದ ಎಲ್ಲ ನಾಯಕರನ್ನು ಅಧಿಕಾರ ಸ್ವೀಕಾರ ಸಮಾರಂಭಕ್ಕೆ ಆಹ್ವಾನಿಸಲಿದ್ದಾರೆ.
80 ಭಾರತೀಯ ಮೀನುಗಾರರ ಬಿಡುಗಡೆ ಮಾಡಿದ ಪಾಕ್
ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ ಸೇರಿದಂತೆ ಹಲವು ಗಣ್ಯರು ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ತೊಡಗಿಸಿಕೊಂಡಿರುವುದರಿಂದ ರಾಜ್ಯಕ್ಕೆ ಆಗಮಿಸುವ ಸಾಧ್ಯತೆಗಳು ತೀರಾ ಕಡಿಮೆ.
ಕಾರ್ಯಕರ್ತರಿಗೆ ಹೊಸ ಹುಮ್ಮಸ್ಸು ನೀಡುವ ಉದ್ದೇಶದಿಂದ ಜೆ.ಪಿ.ನಡ್ಡಾ ಅವರು ವರ್ಚುಯಲ್ ಮೂಲಕ ಭಾಗಿಯಾಗುವ ಸಂಭವವಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಸದಾನಂದಗೌಡ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ಸಿಂಗ್, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ನಿರ್ಮಲಾ ಸೀತಾರಾಮನ್, ರಾಜೀವ್ ಚಂದ್ರಶೇಖರ್, ಭಗವಂತ ಖೂಬಾ, ಶೋಭಾ ಕರಂದ್ಲಾಜೆ, ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಸಚಿವರು, ಶಾಸಕರು, ಪಕ್ಷದ ಪದಾಕಾರಿಗಳು ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಜತೆಗೆ ರಾಜ್ಯಾದ್ಯಂತ ಬಿಎಸ್ವೈ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಕೂಡ ಈ ಸಮಾರಂಭಕ್ಕೆ ಆಗಮಿಸಲಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಸೋತ ನಂತರ ಕಳೆಗುಂದಿರುವ ಬಿಜೆಪಿಗೆ ನವ ಚೈತನ್ಯ ನೀಡುವ ಉದ್ದೇಶದಿಂದಲೇ ಈ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ನಡೆಸಲು ಪಕ್ಷ ತೀರ್ಮಾನಿಸಿದೆ.
ರಾಜ್ಯದಲ್ಲಿ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಅದ್ಧೂರಿ ಸಮಾರಂಭ ಬೇಡ ಎಂದು ಯಡಿಯೂರಪ್ಪ ತಮ್ಮ ಪುತ್ರ ವಿಜಯೇಂದ್ರಗೆ ಸಲಹೆ ಕೊಟ್ಟಿದ್ದರು. ಆಡಂಬರವಿಲ್ಲದೆ ಕಾರ್ಯಕರ್ತರಿಗೆ ಶಕ್ತಿ ತುಂಬುವ ಹಾಗೂ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಹೊಸ ಸಂದೇಶ ನೀಡಬೇಕೆಂದು ಅಭಿಮಾನಿಗಳು ಒತ್ತಾಯಿಸಿದ್ದಾರೆ.
ಹೀಗಾಗಿ ವಿಜಯೇಂದ್ರ ತಮ್ಮ ಅಧಿಕಾರ ಸ್ವೀಕಾರ ಸಮಾರಂಭವನ್ನು ಪಕ್ಷದ ಎಲ್ಲರ ಸಮ್ಮುಖದಲ್ಲೂ ಸ್ವೀಕರಿಸಿ ಕಾರ್ಯಕರ್ತರಿಗೂ ಹೊಸ ಸಂದೇಶ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಈಗಾಗಲೇ ಕಾರ್ಯಕ್ರಮಕ್ಕೆ ಬೇಕಾದ ರೂಪುರೇಷೆಗಳ ನೀಲನಕ್ಷೆ ಸಿದ್ಧಪಡಿಸಲಾಗಿದ್ದು, ದೊಡ್ಡಮಟ್ಟದಲ್ಲಿ ಕಾರ್ಯಕರ್ತರನ್ನು ಕರೆತರುವ ಹೊಣೆಗಾರಿಕೆಯನ್ನು ಪದಾಕಾರಿಗಳಿಗೆ ನೀಡಲಾಗಿದೆ.