ಬೆಂಗಳೂರು,ಆ.15- ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲೇ ನಗರದಲ್ಲಿ ಭಾರಿ ಸ್ಫೋಟ ಸಂಭವಿಸಿದೆ. ಸ್ಫೋಟಕ್ಕೆ ಒಬ್ಬ ಬಾಲಕ ಬಲಿಯಾಗಿ, 9 ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಜನತೆಯನ್ನು ಬೆಚ್ಚಿ ಬೀಳಿಸಿದೆ.
ಸ್ಫೋಟಕ್ಕೆ ನಿಖರವಾದ ಕಾರಣ ಏನೆಂದು ತಿಳಿದುಬಂದಿಲ್ಲ. ಹೀಗಾಗಿ ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ದೌಡಾಯಿಸಿ ಕಾರಣ ಪತ್ತೆ ಹಚ್ಚಲು ಶ್ರಮಿಸುತ್ತಿದ್ದಾರೆ.ಮೇಲ್ನೋಟಕ್ಕೆ ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಸ್ಫೋಟ ಸಂಭವಿಸಿರಬಹುದು ಎಂದು ಶಂಕಿಸಲಾಗಿದ್ದರೂ ಕಿಡಿಗೇಡಿಗಳ ದುಷ್ಕೃತ್ಯವನ್ನು ಅಲ್ಲಗಳೆಯುವಂತಿಲ್ಲ.
ಅಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ಚಿನ್ನಯ್ಯನ ಪಾಳ್ಯದಲ್ಲಿರುವ ಡಿಜಿ ರಸ್ತೆಯಲ್ಲಿರುವ ಮೈಕೋ ಕಾರ್ಖಾನೆ ಹಿಂಭಾಗದ ಪ್ರದೇಶದಲ್ಲಿ ಬೆಳಿಗ್ಗೆ 9 ಗಂಟೆಗೆ ಸ್ಫೋಟ ಸಂಭವಿಸಿದೆ.
ಸ್ಪೋಟದ ರಭಸಕ್ಕೆ ಸುತ್ತಮುತ್ತಲಿನ 12 ಮನೆಗಳಿಗೆ ಹಾನಿಯಾಗಿದೆ. ಘಟನೆಯಲ್ಲಿ ಮೂರಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿದೆ. ಸ್ಫೋಟಕ್ಕೆ 10 ವರ್ಷದ ಬಾಲಕನೊಬ್ಬ ಬಲಿಯಾಗಿದ್ದಾನೆ ಎಂದು ಪೊಲೀಸರು ಈ ಸಂಜೆಗೆ ಮಾಹಿತಿ ನೀಡಿದ್ದಾರೆ.
ಘಟನೆಯಲ್ಲಿ ಇತರ 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟದಿಂದ ಹಾನಿಗೊಳಗಾಗಿರುವ ಕಟ್ಟಡ ಅವಶೇಷಗಳನ್ನು ತೆರವುಗೊಳಿಸುವ ಕಾರ್ಯ ಭರದಿಂದ ನಡೆಯುತ್ತಿದೆ.