ಲಕ್ನೋ, ಜ.11- ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಎಸ್‍ಪಿ ವರಿಷ್ಠ ನಾಯಕಿ ಮಾಯಾವತಿ ಸ್ಪರ್ಧೆ ಮಾಡುವುದಿಲ್ಲ ಎಂದು ಸಂಸದ ಸತೀಶ್ ಚಂದ್ರ ಮಿಶ್ರಾ ತಿಳಿಸಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಬಿಎಸ್‍ಪಿಯನ್ನು ಮರಳಿ ಅಧಿಕಾರಕ್ಕೆ ತರುವ ಸಲುವಾಗಿ ಈ ಬಾರಿ ಮಾಯಾವತಿ ಅವರು ರಾಜ್ಯಾದ್ಯಂತ ಪ್ರವಾಸ ಮಾಡಲಿದ್ದಾರೆ. ಹಾಗಾಗಿ ತಾವು ಒಂದು ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.
ಈ ಮೊದಲು ಪಶ್ಚಿಮ ಬಂಗಾಳದಲ್ಲಿ ಅಲ್ಲಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿಧಾನಸಭೆ ಚುನಾವಣೆಯಲ್ಲಿ ನಂದಿಗ್ರಾಮದಿಂದ ಸ್ಪರ್ಧೆ ಮಾಡಿ ಸೋಲು ಕಂಡಿದ್ದರು. ಅದರಿಂದ ಅವರಿಗೆ ಮುಖ್ಯಮಂತ್ರಿ ಹುದ್ದೆ ಉಳಿಸಿಕೊಳ್ಳುವ ವಿಷಯದಲ್ಲಿ ತಾಂತ್ರಿಕ ಸಮಸ್ಯೆಗಳು ಎದುರಾಗಿದ್ದವು.
ಕೊನೆಗೆ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಗೆದ್ದು ಅಧಿಕಾರ ಉಳಿಸಿಕೊಂಡರು. ಆದರೂ ಒಂದಷ್ಟು ದಿನಗಳ ಕಾಲ ಮುಜುಗರ ಅನುಭವಿಸಬೇಕಾಯಿತು.ಅದೇ ಪರಿಸ್ಥಿತಿ ತಮಗೆ ಬರಬಾರದು ಎಂಬ ಕಾರಣಕ್ಕೆ ಮಾಯಾವತಿ ಚುನಾವಣೆಯಿಂದ ಸ್ಪರ್ಧೆ ಮಾಡುತ್ತಿಲ್ಲ ಎನ್ನಲಾಗಿದೆ. ತಾವು ಮತ್ತು ಮಾಯಾವತಿ ಇಬ್ಬರು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿಲ್ಲ ಎಂದು ಸತೀಶ್ ಚಂದ್ರ ಸ್ಪಷ್ಟ ಪಡಿಸಿದ್ದಾರೆ.
ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಥವಾ ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ. ಬಿಎಸ್‍ಪಿ ಸಂಪೂರ್ಣ ಬಹುಮತ ಪಡೆದು ಗೆಲವು ಸಾಧಿಸಲಿದೆ ಎಂದು ಹೇಳಿದ್ದಾರೆ.
ಸಮಾಜವಾದಿ ಪಕ್ಷ 400 ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎಂದು ಹೇಳಿಕೊಂಡಿರುವುದಕ್ಕೆ ಪ್ರತಿಕ್ರಿಯಿಸಿರುವ ಸತೀಶ್ ಚಂದ್ರ ಅವರು, ಅವರ ಪಕ್ಷಕ್ಕೆ 400 ಮಂದಿ ಅಭ್ಯರ್ಥಿಗಳೇ ಇಲ್ಲ. ಮತ್ತೆ ಅಷ್ಟು ಸ್ಥಾನಗಳನ್ನು ಹೇಗೆ ಗೆಲ್ಲುತ್ತಾರೆ ಎಂದು ಲೇವಡಿ ಮಾಡಿದ್ದಾರೆ.
