ಹುಬ್ಬಳ್ಳಿ, ಡಿ.4- ಮನೆಯಲ್ಲಿ ಒಬ್ಬರೇ ಇರುವುದನ್ನು ಖಚಿತಪಡಿಸಿಕೊಂಡು ಹಿಂಬಾಗಿಲು ಮೂಲಕ ಒಳನುಗ್ಗಿ ಗರಗ ಗ್ರಾಮದ ರಿಯಲ್ ಎಸ್ಟೇಟ್ ಉದ್ಯಮಿಯನ್ನು ಬರ್ಭರವಾಗಿ ಕೊಲೆ ಮಾಡಿ ಪರಾರಿಯಾಗಿರುವ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಗರಗ ಪೊಲೀಸ್ ಠಾಣೆಯ 100 ಮೀ. ಕೂಗಳತೆಯ ದೂರದಲ್ಲಿರುವ ಮನೆಯಲ್ಲೇ ಉದ್ಯಮಿ ಗಿರೀಶ್ ಕರಡಿಗುಡ್ಡ(43) ಎಂಬುವರ ಕೊಲೆ ನಡೆದಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪ್ರಕರಣ ದಾಖಲಿಸಿಕೊಂಡಿರುವ ಗರಗ ಠಾಣೆ ಪೊಲೀಸರು ಆರೋಪಿಗಳ ಪತ್ತೆಗಾಗಿ ಎರಡು ತಂಡಗಳನ್ನು ರಚಿಸಿಕೊಂಡು ಕಾರ್ಯಾಚರಣೆ ಕೈಗೊಂಡಿದ್ದಾರೆ.
ಪ್ರಮುಖ ರಸ್ತೆಗಳಲ್ಲಿರುವ ಸಿಸಿ ಟಿವಿಗಳನ್ನುಪರಿಶೀಲಿಸಿ ಅದರಲ್ಲಿ ಸೆರೆಯಾಗಿರುವ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಗಳ ಪತ್ತೆಗಾಗಿ ಶೋಧ ನಡೆಸುತ್ತಿದ್ದಾರೆ.
ಹಳೆ ವೈಷಮ್ಯ ಅಥವಾ ಹಣಕಾಸಿನ ವಿಚಾರಕ್ಕೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಈ ನಿಟ್ಟಿನಲ್ಲಿಯೂ ಸಹ ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ.
ಧಾರವಾಡ ತಾಲೂಕಿನ ಗರಗ ಗ್ರಾಮದ ನಿವಾಸಿಯಾದ ಗಿರೀಶ್ ಅವರು ನಿನ್ನೆ ಸಂಜೆ ಮನೆಯಲ್ಲಿ ಒಬ್ಬರೇ ಇದ್ದರು. ಇದೇ ಸಮಯಕ್ಕಾಗಿ ಹೊಂಚು ಹಾಕಿದ್ದ ದುಷ್ಕರ್ಮಿಗಳು ಹಿಂಬಾಗಿಲು ಮೂಲಕ ಒಳನುಗ್ಗಿ ಚಾಕು ಹಾಗೂ ಮಾರಕಾಸ್ತ್ರಗಳಿಂದ ಮನಬಂದಂತೆ ಅವರ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿ ಹಿಂಬಾಗಿಲ ಮೂಲಕವೇ ಪರಾರಿಯಾಗಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಎಸ್ಪಿ ಗೋಪಾಲ ಬ್ಯಾಕೋಡ, ಎಎಸ್ಪಿ ಬರಮಣಿ, ಸಿಪಿಐ ಸಮೀರ್ಮುಲ್ಲಾ ಅವರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಆಗಮಿಸಿ ಸ್ಥಳ ಪರಿಶೀಲಿಸಿ ಹಲವು ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ.