ಬೆಂಗಳೂರು, ಅ.19- ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಹಿನ್ನೆಲೆಯಲ್ಲಿ ನಾಳೆ ಸಂಜೆ ಜೆಡಿಎಸ್ ಪ್ರಮುಖರ ಸಭೆಯನ್ನು ಕರೆಯಲಾಗಿದೆ.ಬಿಡದಿ ಬಳಿಯ ತೋಟದ ಮನೆಯಲ್ಲಿ ನಾಳೆ ಸಂಜೆ 5ಗಂಟೆಗೆ ಪಕ್ಷದ ರಾಜ್ಯಾಧ್ಯಕ್ಷರಾದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿರವರು ಪಕ್ಷದ ಪ್ರಮುಖರ ಸಭೆಯನ್ನು ಕರೆದಿದ್ದಾರೆ.
ಸಭೆಯಲ್ಲಿ ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ, ಬಿಜೆಪಿ ಜೊತೆಗೂಡಿ ಚುನಾವಣಾಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವುದು, ಮುಖ್ಯವಾಗಿ ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಆಯ್ಕೆ, ಪ್ರಚಲಿತ ರಾಜಕೀಯ ವಿದ್ಯಮಾನಗಳು, ಮುಂಬರುವ ನಗರ ಸ್ಥಳಿಯ ಸಂಸ್ಥೆಗಳ ಚುನಾವಣೆ ಸಿದ್ಧತೆ ಮೊದಲಾದ ವಿಚಾರಗಳ ಬಗ್ಗೆ ಚರ್ಚಿಸಿ ಸಲಹೆ ಸೂಚನೆ ನೀಡಲಾಗುತ್ತದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ನಾಳಿನ ಸಭೆಗೆ ಸಂಸದರು, ಮಾಜಿ ಸಂಸದರು, ಹಾಲಿ ಹಾಗೂ ಮಾಜಿ ವಿಧಾನಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರು, ಮಾಜಿ ಸಚಿವರು, ರಾಜ್ಯ ಕೋರ್ ಕಮಿಟಿ ಅಧ್ಯಕ್ಷರು, ಸಂಚಾಲಕರು ಹಾಗೂ ಸದಸ್ಯರು ತಪ್ಪದೇ ಹಾಜರಾಗುವಂತೆ ಜೆಡಿಎಸ್ ರಾಜ್ಯ ಮಹಾಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವ ವೆಂಕಟರಾವ್ ನಾಡಗೌಡ ಅವರು ಕೋರಿದ್ದಾರೆ.
ಕಾರ್ಯಕರ್ತರ ಸಭೆ: ಉಪ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್ ಬಾಬು, ಪಕ್ಷದ ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ವೆಂಕಟರಾವ್ ನಾಡಗೌಡ, ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಪ್ರವಾಸ ಕೈಗೊಂಡು ಕಾರ್ಯಕರ್ತರು ಮತ್ತು ಮುಖಂಡರ ಸಭೆ ನಡೆಸಿದ್ದಾರೆ. ಚುನಾವಣೆ ಸಿದ್ಧತೆ, ಅಭ್ಯರ್ಥಿಗಳ ಆಯ್ಕೆ ಹಾಗೂ ಬಿಜೆಪಿಯೊಂದಿಗಿನ ಹೊಂದಾಣಿಕೆ ಕುರಿತಂತೆ ಅಭಿಪ್ರಾಯ ಸಂಗ್ರಹಿಸಿ ಸಲಹೆ ಸೂಚನೆ ನೀಡಿದ್ದಾರೆ.