Friday, November 22, 2024
Homeರಾಜ್ಯಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ, "ಕಾಂಗ್ರೆಸ್ಸಿನ ಗೂಂಡಾ"ನ ವಿರುದ್ಧ ಕ್ರಮಕ್ಕೆ ವಿಜಯೇಂದ್ರ ಆಗ್ರಹ

ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ, “ಕಾಂಗ್ರೆಸ್ಸಿನ ಗೂಂಡಾ”ನ ವಿರುದ್ಧ ಕ್ರಮಕ್ಕೆ ವಿಜಯೇಂದ್ರ ಆಗ್ರಹ

ಬೆಂಗಳೂರು,ಏ.11- ರೇಷ್ಮೆ ಬೆಳೆಗಾರ ಹಾಗೂ ಬಿಜೆಪಿ ಕಾರ್ಯಕರ್ತ ಶೇಖರ್ ಅವರ ಮೇಲೆ ಕಾಂಗ್ರೆಸ್ಸಿನ ಗೂಂಡಾ ವ್ಯಕ್ತಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿರುವ ಪ್ರಕರಣವನ್ನು ನಿಷ್ಪಕ್ಷಪಾತ ತನಿಖೆ ನಡೆಸಿ, ಕೂಡಲೇ ಚುನಾವಣಾ ಆಯೋಗ ಹಾಗೂ ಪೊಲೀಸ್ ಇಲಾಖೆ ಕಾಂಗ್ರೆಸ್ ಗೂಂಡಾಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.

ಈ ಕುರಿತು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೊಸ್ಟ್ ಮಾಡಿ ರುವ ಅವರು, ಶಾಂತಿಯುತ ಮತದಾನ ನಡೆಸಲು ಅಗತ್ಯವಿರುವ ಎಲ್ಲಾ ರೀತಿಯ ಕ್ರಮಗಳನ್ನು ಜರುಗಿಸಲು ಹಾಗೂ ಗ್ರಾಮಾಂತರ ಮತದಾರರ ರಕ್ಷಣೆಗೆ ಮುಂದಾಗಬೇಕೆಂದು ಒತ್ತಾಯಿಸಿದ್ದಾರೆ. ಬಿಜೆಪಿ ಕಾರ್ಯಕರ್ತ ಶೇಖರ್ ಅವರ ಮೇಲೆ ಕಾಂಗ್ರೆಸ್ಸಿನ ಗೂಂಡಾ ವ್ಯಕ್ತಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿದ್ದರೂ ಆತನನ್ನು ಬಂಧಿಸದೇ ಇರುವುದು ಅನುಮಾನಗಳಿಗೆ ಆಸ್ಪದ ಮಾಡಿಕೊಟ್ಟಿದೆ.

ಜಿಲ್ಲೆಯನ್ನು ತಮ್ಮ ಕಪಿಮುಷ್ಠಿಯಲ್ಲಿ ಹಿಡಿದಿಟ್ಟುಕೊಂಡಿರುವ ಡಿ.ಕೆ.ಬ್ರದರ್ಸ್ ಅಧಿಕಾರ ದರ್ಪ ನೆತ್ತಿಗೇರಿದಂತಿದ್ದು, ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿ ಮತದಾರರನ್ನು ಬೆದರಿಸುವ ಕೆಲಸಕ್ಕೆ ಮುಂದಾಗಿರುವುದು ಅಕ್ಷಮ್ಯ ಅಪರಾಧ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಹಣ, ಹೆಂಡ ಹಾಗೂ ತೋಳ್ಬಲದ ಗೂಂಡಾಗಿರಿ ರಾಜಕೀಯಕ್ಕೆ ಹೆಸರಾಗಿರುವ ಕೆಪಿಸಿಸಿ ಅಧ್ಯಕ್ಷ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸಿಗರು ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಬಂಡೆ ಪುಡಿ ಪುಡಿಯಾಗುವ ವಾತಾವರಣ ಉದ್ಭವಿಸಿರುವ ಹಿನ್ನೆಲೆಯಲ್ಲಿ ಹತಾಶರಾಗಿದ್ದಾರೆ. ಇವರಿಗೆ ವಿರುದ್ಧವಾಗಿ ನಿಂತಿರುವ ಮತದಾರರು ಹಾಗೂ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಮೇಲೆ ಅಮಾನುಷ ಹಲ್ಲೆ ನಡೆಸಿ ಕ್ಷೇತ್ರದಲ್ಲಿ ಭಯ ಮೂಡಿಸುವ ಕೃತ್ಯ ಆರಂಭಿಸಿದ್ದಾರೆ ಎಂದು ವಿಜಯೇಂದ್ರ ಕಿಡಿಕಾರಿದ್ದಾರೆ.

ಆಯೋಗ ಕಡಿವಾಣ ಹಾಕಬೇಕು :
ಇನ್ನು ಇದೇ ವಿಷಯಕ್ಕೆ ಸಬಂಧಿಸಿದಂತೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಆಶೋಕ್ ಕೂಡಾ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಸರ್ಕಾರ ವಿರುದ್ದ ಪೊಸ್ಟ್ ಮಾಡಿದ್ದು, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರು ನಿರ್ಭೀತಿಯಿಂದ ಮತದಾನ ಮಾಡುವ ವಾತಾವರಣ ಕೆಡಿಸಿ ಮತದಾರರಲ್ಲಿ ಭಯದ ವಾತಾವರಣ ಸೃಷ್ಟಿ ಮಾಡುವ ಈ ದುಷ್ಕøತ್ಯಕ್ಕೆ ಚುನಾವಣಾ ಆಯೋಗ ಕಡಿವಾಣ ಹಾಕಬೇಕು. ಕಾಂಗ್ರೆಸ್ ಪಕ್ಷದ ವಿರುದ್ಧ ಕ್ರಮ ಕೈಗೊಂಡು ನಿಷ್ಪಕ್ಷಪಾತವಾಗಿ ಅವಕಾಶ ಕಲ್ಪಿಸಿ, ಮತದಾರರಲ್ಲಿ ಧೈರ್ಯ, ವಿಶ್ವಾಸ ತುಂಬುವ ಕೆಲಸ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ಬೆಂಗಳೂರು ಗ್ರಾಮಾಂತರದಲ್ಲಿ ಸೋಲು ಗ್ಯಾರಂಟಿ ಆಗುತ್ತಿದ್ದಂತೆ, ಮುಖ್ಯಮಂತ್ರಿ ಸ್ಥಾನಕ್ಕೆ ಶಾಶ್ವತವಾಗಿ ಕಾಯಬೇಕಾಗುತ್ತದೆ ಎನ್ನುವ ಹತಾಶೆಯಿಂದ ಕಂಗಾಲಾಗಿರುವ ಡಿ.ಕೆ.ಶಿವಕುಮಾರ್ ಮತ್ತು ಅವರ ಸಹೋದರ ಡಿ.ಕೆ.ಸುರೇಶ್ ಮತದಾರರ ಮೇಲಿನ ಕೋಪಕ್ಕೆ ಗೂಂಡಾಗಿರಿಗೆ ಇಳಿದಿದ್ದಾರೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ಕಾರ್ಯಕರ್ತ ಸಹೋದರ ನವೀನ್ ಮೇಲೆ ಕಾಂಗ್ರೆಸ್ಸಿನ ಗೂಂಡಾಗಳು ಮಾರಣಾಂತಿಕ ಹಲ್ಲೆ ಮಾಡಿದ್ದರೂ ಆತನನ್ನು ಬಂಧಿಸದೆ ಕಾಟಾಚಾರಕ್ಕೆ ಕೇಸ್ ಹಾಕುವ ಮೂಲಕ ಯಾರನ್ನು ರಕ್ಷಣೆ ಮಾಡುತ್ತಿದ್ದೀರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿರುವ ಆಶೋಕ್, ಸಿದ್ದರಾಮಯ್ಯನವರೇ? ಸ್ಟ್ರಾಂಗ್ ಸಿಎಂ ಎಂದು ಹೇಳಿಕೊಳ್ಳುವ ನೀವು ಡಿಕೆ ಸಹೋದರದ ಮುಂದೆ ಅಷ್ಟೊಂದು ವೀಕ್ ಯಾಕಾಗಿದ್ದೀರಿ ಎಂದು ವ್ಯಂಗ್ಯವಾಡಿದ್ದಾರೆ.

RELATED ARTICLES

Latest News