Monday, December 2, 2024
Homeರಾಜಕೀಯ | Politicsಡಿಕೆ ಸೊಕ್ಕು ಮುರಿಯಲೆಂದೇ ಸಿದ್ದರಾಮಯ್ಯ ಡಿಸಿಎಂ ಹುದ್ದೆ ಸೃಷ್ಟಿಯ ಗುಲ್ಲೆಬ್ಬಿಸಿದ್ದಾರೆ : ವಿಜಯೇಂದ್ರ ಆರೋಪ

ಡಿಕೆ ಸೊಕ್ಕು ಮುರಿಯಲೆಂದೇ ಸಿದ್ದರಾಮಯ್ಯ ಡಿಸಿಎಂ ಹುದ್ದೆ ಸೃಷ್ಟಿಯ ಗುಲ್ಲೆಬ್ಬಿಸಿದ್ದಾರೆ : ವಿಜಯೇಂದ್ರ ಆರೋಪ

ನವದೆಹಲಿ,ಜೂ.26- ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಸೊಕ್ಕು ಮುರಿಯಬೇಕೆಂದೇ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಸಬೇಕೆಂಬ ಸಿಎಂ ಸಿದ್ದರಾಮಯ್ಯನವರ ಪಾತ್ರವಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌‍ನಲ್ಲಿ ಒಂದು ಬಣ ಡಿ.ಕೆ.ಶಿವಕುಮಾರ್‌ ಅವರನ್ನು ರಾಜಕೀಯವಾಗಿ ಕಟ್ಟಿ ಹಾಕಲು ವ್ಯವಸ್ಥಿತ ಷಡ್ಯಂತರ ರೂಪಿಸಿದೆ. ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಸಬೇಕೆಂಬುದು ಸಿದ್ದರಾಮಯ್ಯ ಬಣದ ಸಚಿವರು ಹಾಗೂ ಶಾಸಕರ ಒತ್ತಾಸೆ. ನನಗೆ ಭರವಸೆ ಇದ್ದು, ಇದರಲ್ಲಿ ಸಿಎಂ ಸಿದ್ದರಾಮಯ್ಯ ಯಶಸ್ವಿಯಾಗುತ್ತಾರೆ ಎಂದರು.

ಶಿವಕುಮಾರ್‌ ವಿರುದ್ಧ ಆಡಳಿತ ಪಕ್ಷದಲ್ಲಿ ಸಾಕಷ್ಟು ರಾಜಕೀಯ ಪಿತೂರಿಗಳು ನಡೆಯುತ್ತಿವೆ. ಒಂದು ಬಣ ಅವರ ರಾಜಕೀಯ ಏಳಿಗೆಯನ್ನು ಸಹಿಸಿಕೊಳ್ಳುತ್ತಿದೆ. ಹೀಗಾಗಿ ಸಿದ್ದರಾಮಯ್ಯನವರು ಹೈಕಮಾಂಡ್‌ ಮೇಲೆ ಒತ್ತಡ ಹಾಕಿ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಸಿಕೊಳ್ಳಬಹುದು ಎಂದು ಭವಿಷ್ಯ ನುಡಿದರು.

ರಾಜ್ಯದಲ್ಲಿ ಬೆಲೆ ಏರಿಕೆಯ ಪರ್ವ ನಡೆಯುತ್ತಿದೆ. ರಾಜ್ಯದ ಜನರಿಗೆ ಬರೆ ಎಳೆಯುವ ಕೆಲಸ ಆಗುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಕಳೆದ ವಾರ ಸಿಎಂ ಪೆಟ್ರೋಲ್‌‍, ಡೀಸೆಲ್‌ ಬೆಲೆ ಏರಿಕೆ ಮಾಡಿದ್ದಾರೆ. ನಾವು ಪ್ರಶ್ನೆ ಮಾಡಿದರೆ ಉದ್ಧಟತನದ ಉತ್ತರ ಹೇಳುತ್ತಾರೆ. ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ಸಿಎಂ ಸಿದ್ದರಾಮಯ್ಯ ಯಾಕಿಷ್ಟು ಕಟುವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಅವರು ಪ್ರಶ್ನಿಸಿದರು.

ಟ್ರ್ಯಾಕ್ಟರ್‌ ಟಿಲ್ಲರ್‌ ಬಳಸುವ ರೈತರೂ ತೊಂದರೆ ಅನುಭವಿಸುತ್ತಿದ್ದಾರೆ. ಬಿತ್ತನೆ ಬೀಜದ ದರ ಶೇ.40- 50ರಷ್ಟು ಹೆಚ್ಚಾಗಿದೆ. ಇಂಥ ಸಂಕಷ್ಟದ ಸಂದರ್ಭದಲ್ಲೂ ಜನರಿಗೆ ಸ್ಪಂದಿಸುತ್ತಿಲ್ಲ. ಮುಖ್ಯಮಂತ್ರಿಗಳು ಮತ್ತು ಕಾಂಗ್ರೆಸ್‌‍ ಸರಕಾರ ಯಾಕೆ ಇಷ್ಟು ಕಟುವಾಗಿ ನಡೆದುಕೊಳ್ಳುತ್ತಿದೆ ಎಂದು ಕಟುವಾಗಿ ಪ್ರಶ್ನಿಸಿದರು.

ಕಾಂಗ್ರೆಸ್ಸಿಗರು ಸಾಕಷ್ಟು ಭರವಸೆ ನೀಡಿ ಅಧಿಕಾರಕ್ಕೆ ಬಂದಿದ್ದಾರೆ. ಸಿಎಂ ಸಿದ್ದರಾಮಯ್ಯರನ್ನು ನೋಡಿದರೆ ಅಯ್ಯೋ ಎನ್ನಿಸುತ್ತಿದೆ. ಆಡಳಿತ ಪಕ್ಷದ ಶಾಸಕರು ತಲೆ ಎತ್ತಿ ಓಡಾಡಲು ಆಗುತ್ತಿಲ್ಲ. ಅಭಿವೃದ್ಧಿಗೆ ಹಣ ಕೊಡಿ ಎಂದು ಸಿಎಂ ಮೇಲೆ ಒತ್ತಡ ಹಾಕುತ್ತಿದ್ದಾರೆ. ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಆಗುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

ರಾಜ್ಯದ ಕಾಂಗ್ರೆಸ್‌‍ ಸರಕಾರವು ಅನುಭವಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇದ್ದರೂ ಸಹ ರಾಜ್ಯವನ್ನು ಸಾಲದ ಕೂಪಕ್ಕೆ ತಳ್ಳುತ್ತಿದೆ. ಮತ್ತೊಂದೆಡೆ ಅಭಿವೃದ್ಧಿ ಶೂನ್ಯತೆ ರಾಜ್ಯವನ್ನು ಕಾಡುವಂತಾಗಿದೆ. ಅಭಿವೃದ್ಧಿ ಇಲ್ಲದೆ ಶಾಸಕರು ತಲೆ ಎತ್ತಿಕೊಂಡು ಓಡಾಡಲು ಆಗುತ್ತಿಲ್ಲ ಎಂದು ವಿಶ್ಲೇಷಿಸಿದರು.

ರಾಜೀನಾಮೆಗೆ ಒತ್ತಾಯ:
ವಾಲೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣ ಸಂಬಂಧ ಹಣಕಾಸು ಸಚಿವರಾದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜವಾಬ್ದಾರಿ ಹೊರಬೇಕು. ಈ ಸಂಬಂಧ ಶರಣಪ್ರಕಾಶ್‌ ಪಾಟೀಲ್‌‍, ನಿಗಮದ ಅಧ್ಯಕ್ಷರು ಕೂಡಲೇ ರಾಜೀನಾಮೆ ಕೊಡಬೇಕು. ಇಲ್ಲದಿದ್ದರೆ ಇದೇ 28ರಂದು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಿದ್ದೇವೆ ಎಂದು ಇದೇ ವೇಳೆ ವಿಜಯೇಂದ್ರ ತಿಳಿಸಿದರು.

ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟ ಹಣ ಪೋಲಾಗಿದ್ದು ದುರ್ಬಳಕೆಯಾಗಿದೆ. ಕಾಂಗ್ರೆಸ್‌‍ ಸರಕಾರವು ಈ ಹಣವನ್ನು ದೋಚಿದೆ ಎಂದು ಟೀಕಿಸಿದರು.ಕರ್ನಾಟಕ ರಾಜ್ಯ ಸರಕಾರವು ಜನರಿಗೆ ಶಾಪವಾಗಿ ಪರಿಣಮಿಸಿದೆ ಎಂದು ಆಕ್ಷೇಪಿಸಿದ ಅವರು, ನಿಗಮದ ಹಗರಣ ಸಂಬಂಧ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯ ಪತ್ರದನ್ವಯ ಸಿಬಿಐ ತನಿಖೆ ನಡೆಯುತ್ತಿದೆ. ರಾಜ್ಯ ಸರಕಾರ ಆತುರಾತುರವಾಗಿ ಎಸ್‌‍ಐಟಿಯನ್ನೂ ರಚಿಸಿ ತಮಗೆ ಬೇಕಾದಂತೆ ತನಿಖೆ ನಡೆಸುತ್ತಿದೆ ಎಂದು ಆರೋಪಿಸಿದರು.

ಎಸ್‌‍ಐಟಿ ತೇಪೆ ಹಚ್ಚುವ ಕೆಲಸ ಮಾಡುತ್ತಿದೆ. ಅಲ್ಲಿ-ಇಲ್ಲಿ ಅಧಿಕಾರಿ ಮನೆಯಲ್ಲಿ ಒಂದಷ್ಟು ಹಣ ಲಭಿಸಿದೆ ಎನ್ನುವ ಮೂಲಕ ಕಣ್ಣೊರೆಸುವ ತಂತ್ರವನ್ನು ರಾಜ್ಯ ಸರಕಾರ ಮಾಡುತ್ತಿದೆ ಎಂದು ದೂರಿದರು.

ಸಚಿವ ನಾಗೇಂದ್ರ ಅವರು ರಾಜೀನಾಮೆ ಕೊಟ್ಟಿದ್ದಾರೆ. ತೆಲಂಗಾಣಕ್ಕೆ ಬೇನಾಮಿ ಖಾತೆಗೆ ಹಣ ವರ್ಗಾವಣೆ ಮಾಡಿ ವಿತ್‌‍ಡ್ರಾ ಮಾಡಿದ್ದಾರೆ. ಈ ಹಣವನ್ನು ಲೋಕಸಭಾ ಚುನಾವಣೆಗೆ ಬಳಸಿದ್ದಾರೆ. ಹಿಂದೆಯೂ ಕಾಂಗ್ರೆಸ್‌‍ ಸರಕಾರ ಇದ್ದಾಗ ಇಂಥ ಅನೇಕ ಹಗರಣಗಳನ್ನು ಅವರದೇ ಎಸಿಬಿ ಮೂಲಕ ಮುಚ್ಚಿ ಹಾಕಿದ್ದರು ಎಂದು ಆರೋಪಿಸಿದರು.

RELATED ARTICLES

Latest News