ಬೆಂಗಳೂರು,ಮೇ 27- ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೆ ಖಾತೆ ಹಂಚಿಕೆಯ ಕುರಿತು ಚರ್ಚೆಗಳು ಆರಂಭವಾಗಿವೆ. ಕಳೆದ ಏಳು ದಿನಗಳ ಹಿಂದೆ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್, ಸಚಿವರಾಗಿ ಡಾ.ಜಿ.ಪರಮೇಶ್ವರ್, ಕೆ.ಹೆಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾರೆಡ್ಡಿ, ಜಮೀರ್ ಅಹ್ಮದ್‍ಖಾನ್ ಮೊದಲ ಹಂತದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.
ಎರಡನೇ ಹಂತದಲ್ಲಿ ಇಂದು ನಡೆದ ಸಂಪುಟ ವಿಸ್ತರಣೆಯಲ್ಲಿ 24 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಹಲವು ವರ್ಷಗಳ ಬಳಿಕ ಪೂರ್ಣ ಪ್ರಮಾಣ ಸಂಪುಟ ರಚನೆಯಾಗಿದೆ.
ಈವರೆಗೂ ಸಚಿವ ಸಂಪುಟದಲ್ಲಿ ಅವಕಾಶ ಗಿಟ್ಟಿಸಲು ಲಾಬಿ ನಡೆಸಿದ್ದವರು. ಈಗ ಪ್ರಬಲ ಖಾತೆಗಳಿಗೆ ಮುಖಂಡರ ಮೇಲೆ ಒತ್ತಡ ಹೇರಲು ಆರಂಭಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಅಥವಾ ನಾಳೆ ಖಾತೆ ಹಂಚಿಕೆ ಮಾಡುವುದಾಗಿ ತಿಳಿಸಿದ್ದಾರೆ.
ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಸವಾಲು ಸರ್ಕಾರದ ಮುಂದಿದೆ. ಹೀಗಾಗಿ ಅಳೆದು ತೂಗಿ ಖಾತೆ ಹಂಚಿಕೆ ಮಾಡಲಾಗುತ್ತದೆ. ಬಹುತೇಕ ನಾಳೆ ಖಾತೆ ಹಂಚಿಕೆಯಾಗುವ ಸಾಧ್ಯತೆ ಇದ್ದು, ಸೋಮವಾರದಿಂದ ಪೂರ್ಣ ಪ್ರಮಾಣದ ಸಂಪುಟದೊಂದಿಗೆ ಸರ್ಕಾರ ಕಾರ್ಯಾರಂಭ ಮಾಡಲಿದೆ. ಈ ಮೂಲಕ ಕಾಂಗ್ರೆಸ್ ಶಕೆ ಶುರುವಾಗಲಿದೆ.
#CabinetPortfolio, CabinetExpansion,