ಬೆಂಗಳೂರು, ನ.15- ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ಸರ್ಕಲ್‌ನಲ್ಲಿ ಇಂದು ಮುಂಜಾನೆ ಸಂಭವಿಸಿದ ಕಾರು ಅಪಘಾತದಲ್ಲಿ ನಗರದ ಮೂವರು ಮೃತಪಟ್ಟು ನಾಲ್ವರು ಗಾಯಗೊಂಡಿದ್ದಾರೆ.
ಅಪಘಾತದಲ್ಲಿ ಮೃತಪಟ್ಟವರನ್ನು ಎಲೆಕ್ಟ್ರಾನಿಕ್ ಸಿಟಿ ನಿವಾಸಿಗಳಾದ ರವಿ (60), ನಂಜಮ (75) ಮತ್ತು ರಮ್ಯ (23) ಎಂದು ಗುರುತಿಸಲಾಗಿದೆ. ಗಾಯಗೊಂಡ ನಾಲ್ವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ನಗರದಿಂದ ಇನ್ನೋವಾ ಕಾರಿನಲ್ಲಿ ಚಾಲಕ ಸೇರಿದಂತೆ ಒಂಭತ್ತು ಮಂದಿ ಉಡುಪಿಯ ಶ್ರೀಕೃಷ್ಣ ಮಠಕ್ಕೆ ತೆರಳುತ್ತಿದ್ದರು. ಈ ಕಾರು ಇಂದು ಮುಂಜಾನೆ 5ಗಂಟೆ ಸುಮಾರಿನಲ್ಲಿ ಬಂಟ್ಟಾಳ ತಾಲ್ಲೂಕಿನ ಬಿ.ಸಿ.ರೋಡ್ ಸರ್ಕಲ್‌ನಲ್ಲಿ ಚಲಿಸುತ್ತಿದ್ದಾಗ ರಸ್ತೆ ಮಧ್ಯೆ ಇದ್ದ ಟ್ರಾಫಿಕ್ ಸೂಚನ ಫಲಕಕ್ಕೆ ಡಿಕ್ಕಿ ಹೊಡೆದು ಸ್ವಯಂ ಅಪಘಾತಕ್ಕೊಳಗಾದ ಪರಿಣಾಮ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಕಾರಿನೊಳಗೆ ಸಿಕ್ಕಿಕೊಂಡಿದ್ದ ಗಾಯಾಳುಗಳನ್ನು ಹೊರಗೆ ಕರೆತಂದು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಗಂಭೀರ ಗಾಯಗೊಂಡಿದ್ದ ಮತ್ತಿಬ್ಬರು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆಂದು ಪೊಲೀಸರು ಈ ಸಂಜೆಗೆ ತಿಳಿಸಿದ್ದಾರೆ. ಬಂಟ್ವಾಳ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
