ಚಿಕ್ಕಬಳ್ಳಾಪುರ, ಮಾ.9– ಖಾಸಗಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಕಾರು ಹೊತ್ತಿಉರಿದ ಪರಿಣಾಮ ಇಬ್ಬರು ಸಜೀವವಾಗಿ ದಹನವಾಗಿರುವ ಘಟನೆ ಚಿಂತಾಮಣಿ ತಾಲ್ಲೂಕಿನ ಗೋಪಲ್ಲಿ ಗ್ರಾಮದ ಬಳಿ ನಡೆದಿದೆ.
ಮೃತಪಟ್ಟವರ ಹೆಸರು, ವಿಳಾಸ ತಿಳಿದುಬಂದಿಲ್ಲ. ಮದನಪಲ್ಲಿ ಮಾರ್ಗದ ಗೋಪಲ್ಲಿ ಗ್ರಾಮದಲ್ಲಿಂದು ಬೆಳಗ್ಗೆ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಈ ಘಟನೆಯಲ್ಲಿ ಕಾರು ಸಂಪೂರ್ಣವಾಗಿ ಸುಟ್ಟುಹೋಗಿದೆ.
ಕಾರಿನಲ್ಲಿದ್ದ ಐವರ ಪೈಕಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಉಳಿದ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಬಸ್‌ನಲ್ಲಿದ್ದವರಿಗೂ ಕೂಡ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ವಿಷಯ ತಿಳಿದ ಕೂಡಲೇ ಕೆಂಚಾರ್ಲಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರಿನಲ್ಲಿದ್ದವರು ಎಲ್ಲಿಗೆ ಹೋಗುತ್ತಿದ್ದರು ಎಂಬುದು ತಿಳಿದುಬಂದಿಲ್ಲ ಹಾಗೂ ಹೆಸರು ಮತ್ತು ವಿಳಾಸ ಕೂಡ ಪತ್ತೆಯಾಗಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.