ಬಲರಾಂಪುರ, ಮೇ 15– ಕಾರು ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬಲರಾಂಪುರ-ತುಳಸಿಪುರ ರಾಷ್ಟ್ರೀಯ ಹೆದ್ದಾರಿ ಚಲ್ವಾ ಗ್ರಾಮದ ಬಳಿ ತಡ ರಾತ್ರಿ ನಡೆದಿದೆ.
ಮದುವೆ ಸಮಾರಂಭದಲ್ಲಿ ಬಾಗಿಯಾಗಿ ಕಾರಿನಲ್ಲಿ ಹಿಂತಿರುಗುತ್ತಿದ್ದಾಗ ಎದುರಿನಿಂದ ಬಂದ ಲಾರಿ ಏಕಾಏಕಿ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘರ್ಷಣೆಯ ಪರಿಣಾಮ ಎಷ್ಟು ತೀವ್ರವಾಗಿತ್ತು ಎಂದರೆ ಕಾರು ಪಲ್ಟಿಯಾಗಿದ್ದು ಐವರು ಸ್ಥಳದಲ್ಲೇ ಸಾವನ್ನಪ್ಪಿದರೆ ಎಂಟು ಮಂದಿ ಗಂಭೀರವಾಗಿ ಗಾಯಗೊಂಡರು ಮತ್ತು ಅವರನ್ನು ಬಲರಾಂಪುರದಲ್ಲಿರುವ ಜಿಲ್ಲಾ ಸ್ಮಾರಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿ ಪವನ್ ಅಗರ್ವಾಲ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ ವಿಕಾಸ್ ಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳಿಗೆ ಸಾಧ್ಯವಾದಷ್ಟು ಉತ್ತಮ ವೈದ್ಯಕೀಯ ಆರೈಕೆ ನೀಡುವಂತೆ ಅಧಿಕಾರಿಗಳಿಗೆ ವೈದ್ಯರಿಗೆ ಸೂಚನೆ ನೀಡಿದರು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘಟನೆ ಕುರಿತು ತೀವ್ರ ಸಂತಾಪ ಸೂಚಿಸಿದರು.