ಬೆಂಗಳೂರು,ಅ.21- ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ರಾಜ್ಯ ಸಚಿವ ಸಂಪುಟದಲ್ಲಿ ತೆಗೆದುಕೊಂಡ ನಿರ್ಣಯವನ್ನು ಪ್ರಶ್ನೆಸಿ ಸಿಬಿಐ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.ಈಗಾಗಲೇ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸುಪ್ರೀಂಕೋರ್ಟ್‌ಗೆ ಮೇಲ್ನನವಿ ಅರ್ಜಿ ಸಲ್ಲಿಸಿದ್ದು, ನವಂಬರ್ 4 ರಂದು ಅರ್ಜಿ ವಿಚಾರಣೆಗೆ ಬರಲಿದೆ. ಇದರ ಬೆನ್ನಲ್ಲೇ ಸಿಬಿಐ ಕೂಡಾ ಸರ್ವೋಚ್ಛ ನ್ಯಾಯಾಲಯಕ್ಕೆ ವಿಶೇಷ ಮೇಲನವಿ ಅರ್ಜಿ ಹಾಕಿರುವುದರಿಂದ ಡಿ.ಕೆ.ಶಿವಕುಮಾರ್‌ಗೆ ಮತ್ತಷ್ಟು ಕಾನೂನಿನ ಕುಣಿಕೆ ಬಿಗಿಯಾಗುವ ಸಾಧ್ಯತೆ ಇದೆ.
ಸಿಬಿಐ ಪರವಾಗಿ ಮುಕೇಶ್ ಕುಮಾರ್ ಎಂಬುವವರು ಅರ್ಜಿ ( ಡೈರಿ ಸಂಖ್ಯೆ 48505 / 2024) ಸಲ್ಲಿಸಿದ್ದಾರೆ. ಯತ್ನಾಳ್ ಹಾಗೂ ಸಿಬಿಐ ಸಲ್ಲಿಸಿರುವ ಎರಡೂ ಅರ್ಜಿಯನ್ನು ನ್ಯಾಯಾಲಯ ನ. 4 ರಂದು ವಿಚಾರಣೆಗೆ ತೆಗೆದುಕೊಳ್ಳುವ ಸಾಧ್ಯತೆ ಇದೆ. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡಿರುವ ನಿರ್ಣಯ ಪಕ್ಷಪಾತದಿಂದ ಕೂಡಿದೆ ಎಂದು ಅರ್ಜಿದಾರರು ದೂರಿದ್ದು, ತನಿಖೆಯ ಅಗತ್ಯತೆಯನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ.
ಈ ಹಿಂದೆ ಆದಾಯ ಮೀರಿದ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಈ ಹಿಂದಿನ ಬಿಜೆಪಿ ಸರ್ಕಾರ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿದ್ದ ಈಗಿನ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಿಬಿಐ ಮತ್ತು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿತ್ತು.
ಸಿಬಿಐ ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತದೆ. ಅರ್ಜಿಯಲ್ಲಿ ದೆಹಲಿ ವಿಶೇಷ ಪೊಲೀಸ್ ಸ್ಥಾಪನಾ ಕಾಯ್ದೆ-1946 ಮತ್ತು ಅಕ್ರಮ ಹಣ ವರ್ಗಾವಣೆ ಕಾಯ್ದೆ-2002ರ ಅನ್ವಯ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಾಂವಿಧಾನಿಕ ಅಧಿಕಾರದ ಕುರಿತಾದ ನಿಬಂಧನೆಗಳಿಗೆ ಸಂಬಂಧಿಸಿದ ವಿಚಾರಗಳು ಇಲ್ಲಿ ಉದ್ಭವವಾಗಿವೆ. ಅರ್ಜಿಯಲ್ಲಿನ ಎಲ್ಲಾ ಪಕ್ಷಗಾರರ ವಾದ ಮತ್ತು ಕಾನೂನಿನ ನಿಬಂಧನೆಗಳನ್ನು ಸೂಕ್ಷ್ಮವಾಗಿ ಆಲಿಸಿದಾಗ ಇದು ಮನದಟ್ಟಾಗಿದೆ ಎಂದು ನ್ಯಾಯಪೀಠ ಹೇಳಿತ್ತು.
ಕೇಂದ್ರ ಸರ್ಕಾರವು ಎಲ್ಲಿಯವರೆಗೆ ರಾಜ್ಯವೊಂದರಲ್ಲಿ ಸಿಬಿಐ ಅನ್ನು ಕಾರ್ಯನಿರ್ವಹಣೆಗೆ ಹಚ್ಚಬಹುದು ಎಂಬುದು ಕಾನೂನಿನ ವಿಚಾರಕ್ಕೆ ಒಳಪಟ್ಟಿದೆ. ಈ ಪ್ರಕರಣದಲ್ಲಿ ರಾಜ್ಯ ಪ್ರಕರಣದಲ್ಲಿನ ಕಾನೂನಿನ ವಿಚಾರಗಳು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವ್ಯಾಪ್ತಿಗೆ ಸಂಬಂಧಿಸಿವೆ. ಅಂತೆಯೇ, ಈ ಪ್ರಕರಣದಲ್ಲಿ ರಾಜ್ಯ ಸರ್ಕಾರ ಮತ್ತು ಸಿಬಿಐ ನಡುವೆ ಸಂಘರ್ಷ ಇದ್ದು ಪ್ರಕರಣವನ್ನು ಸಂವಿಧಾನದ 131ನೇ ವಿಧಿಯಡಿ ಸುಪ್ರೀಂ ಕೋರ್ಟ್ ನಿರ್ಧರಿಸುವುದೇ ಸೂಕ್ತವಾಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿತ್ತು.
ಈ ಕಾರಣಗಳಿಂದ ಎರಡೂ ಅರ್ಜಿಗಳು ಅನೂರ್ಜಿತವಾಗಲಿದ್ದು, ಇವುಗಳನ್ನು ವಜಾಗೊಳಿಸಲಾಗಿದೆ. ಅದಾಗ್ಯೂ, ಅರ್ಜಿದಾರರು ಈ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ಸೂಕ್ತ ಪರಿಹಾರ ಕಂಡುಕೊಳ್ಳಬಹುದು ಎಂದು ನ್ಯಾಯಪೀಠ ತೀರ್ಪಿನಲ್ಲಿ ವಿವರಿಸಿತ್ತು.
ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್, ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು 4 ವಾರಗಳ ಕಾಲ ಮುಂದೂಡಿತ್ತು.
ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು, ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯ ಸರ್ಕಾರ ಹಾಗೂ ಲೋಕಾಯುಕ್ತಕ್ಕೆ ನೋಟಿಸ್ ಜಾರಿ ಮಾಡಿದ್ದು, ವಿಚಾರಣೆಯನ್ನು 4 ವಾರಗಳ ಮುಂದೂಡಿಕೆ ಮಾಡಿದೆ.
ಆ.29ರಂದು ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ರಾಜ್ಯ-ಸಿಬಿಐ ನಡುವಿನ ವಿವಾದ ಸುಪ್ರೀಂಕೋರ್ಟ್ ತೀರ್ಮಾನಿಸಬೇಕು ಎಂದು ಹೇಳಿ ಅರ್ಜಿ ವಜಾ ಗೊಳಿಸಿತ್ತು. ಹೀಗಾಗಿ ಶಾಸಕ ಬಸನಗೌಡ ಪಾಟೀಲ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಏನಿದು ಅಕ್ರಮ ಆಸ್ತಿ ಪ್ರಕರಣ? :
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಅವರ ಕುಟುಂಬದ ಸದಸ್ಯರು 74.93 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಅಕ್ರಮವಾಗಿ ಗಳಿಸಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಸಿಬಿಐ ಪ್ರಕರಣ ದಾಖಲಿಸಿಕೊಂಡಿತ್ತು. ಈ ಪ್ರಕರಣದ ತನಿಖೆಗೆ ಸರ್ಕಾರ ಕೂಡ ಅನುಮತಿ ನೀಡಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಬಾರಿ ಐಟಿ ಹಾಗೂ ಇಡಿ ಅಧಿಕಾರಿಗಳು ಡಿ.ಕೆ.ಶಿವಕುಮಾರ್ ನಿವಾಸ ಹಾಗೂ ಕಚೇರಿ ಮೇಲೆ ದಾಳಿ ನಡೆಸಿ, ದಾಖಲೆ ಪರಿಶೀಲಿಸಿದ್ದಾರೆ.
ಈ ಬಾರಿ ಕನಕಪುರದಿಂದ ಸ್ಪರ್ಧಿಸಿರುವ ಡಿ.ಕೆ.ಶಿವಕುಮಾರ್ ಅವರ ನಾಮಪತ್ರ ಇದೇ ವಿಚಾರಕ್ಕೆ ತಿರಸ್ಕೃತವಾಗುವ ಆತಂಕ ಕೂಡ ಎದುರಾಗಿತ್ತು. ಈ ಹಿನ್ನೆಲೆ ಡಿ.ಕೆ.ಸುರೇಶ್ ಅವರು ಕೂಡ ಮುಂಜಾಗ್ರತಾಕ್ರಮವಾಗಿ ಕನಕಪುರದಲ್ಲಿ ನಾಮಪತ್ರವನ್ನು ಸಲ್ಲಿಸಿದ್ದರು.
ಡಿ.ಕೆ.ಶಿವಕುಮಾರ್‌ಅವರು 2013ರಿಂದ 2018ರ ಅವಧಿಯಲ್ಲಿ ತಮ ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ್ದಾರೆ ಎಂದು ಸಿಬಿಐ 2020ರ ಅಕ್ಟೋಬರ್ 3ರಂದು ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988ರ ಅಡಿಯಲ್ಲಿ 13(2), 13(1)ಇ ಕ್ರಿಮಿನಲ್ ಪ್ರಕರಣ ದಾಖಲಿಸಿತ್ತು. ಸಿಬಿಐ ಈ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡಿತ್ತು.
ಈ ಪ್ರಕರಣವನ್ನು ರದ್ದು ಮಾಡಬೇಕು ಎಂದು ಕೋರಿ ಡಿ.ಕೆ.ಶಿವಕುಮಾರ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ತನಿಖೆಗೆ ಮಧ್ಯಂತರ ತಡೆ ತಡೆಯಾಜ್ಞೆ ನೀಡಿತ್ತು. ಅಷ್ಟೇ ಅಲ್ಲ ಆಗಾಗ ತಡೆಯಾಜ್ಞೆಯನ್ನು ವಿಸ್ತರಿಸುತ್ತಾ ಸಾಗಿತ್ತು. ಸಿಬಿಐ ಈ ಹಿಂದೆಯೇ ಒಮೆ ಸುಪ್ರೀಂಕೋರ್ಟ್ ಮೊರೆ ಹೊಕ್ಕಿದ್ದರೂ ಆ ಹಂತದಲ್ಲಿ ಮಧ್ಯ ಪ್ರವೇಶ ಮಾಡಲು ಅದು ನಿರಾಕರಿಸಿತ್ತು. ಬಳಿಕ ಮತ್ತೆ ಸಿಬಿಐ ಸುಪ್ರೀಂಕೋರ್ಟ್‌ಗೆ ಮನವಿ ಸಲ್ಲಿಸಿದ ಸಿಬಿಐ ಹೈಕೋರ್ಟ್‌ನ ಮಧ್ಯಂತರ ತಡೆಗಳನ್ನು ನಿವಾರಿಸಬೇಕು ಎಂದು ಕೇಳಿತ್ತು. ಆಗ ಸುಪ್ರೀಂಕೋರ್ಟ್ ಡಿ.ಕೆ. ಶಿವಕುಮಾರ್ ಅವರಿಗೆ ನೋಟಿಸ್ ನೀಡಿತ್ತು.