Monday, February 24, 2025
Homeರಾಜ್ಯರಾಜ್ಯದ ತಂಬಾಕು ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರ ಸರ್ಕಾರ

ರಾಜ್ಯದ ತಂಬಾಕು ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರ ಸರ್ಕಾರ

Central government to the aid of tobacco growers

ಬೆಂಗಳೂರು, ಫೆ.18-ರಾಜ್ಯದ ತಂಬಾಕು ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂದು ಜೆಡಿಎಸ್‌‍ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರ ನೇತೃತ್ವದ ನಿಯೋಗ ಮಾಡಿದ್ದ ಮನವಿಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ನಿಖಿಲ್‌ ಅವರು, ಹುಣಸೂರು, ಪಿರಿಯಾಪಟ್ಟಣ, ಹೆಚ್‌.ಡಿ.ಕೋಟೆ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಬೆಳೆಯಲಾಗಿರುವ ಪರವಾನಗಿ ರಹಿತ ತಂಬಾಕು ಬೆಳೆಗಾರರಿಗೂ ಮಾರಾಟಕ್ಕೆ ಅವಕಾಶ ದೊರೆತಿದೆ. ಬೆಳೆಗಾರರಿಗೆ ವಿಧಿಸಲಾಗುತ್ತಿದ್ದ ದಂಡ ಮನ್ನಾ ಮಾಡುವ ನಿರ್ಧಾರ ಕೈಗೊಂಡಿರುವ ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವ ಪೀಯೂಷ್‌ ಗೋಯಲ್‌ ಅವರಿಗೆ ಧನ್ಯವಾದ ಹೇಳಿದ್ದಾರೆ.

2024ರ ಡಿಸೆಂಬರ್‌ 2ರಂದು ನವದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಪೀಯೂಷ್‌ ಗೋಯಲ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿತ್ತು. ಡಿಸೆಂಬರ್‌ 21ರಂದು ವಾಣಿಜ್ಯ ಇಲಾಖೆಯ ಉನ್ನತ ಅಧಿಕಾರಿಗಳ ಜತೆ ಮಹತ್ವದ ಸಭೆಯನ್ನು ನಡೆಸಲಾಗಿತ್ತು ಎಂದು ಅವರು ತಿಳಿಸಿದ್ದಾರೆ.

ಅಂದು ಸಚಿವರನ್ನು ಭೇಟಿ ಮಾಡಿದ ನಿಯೋಗದಲ್ಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌, ಮಾಜಿ ಸಚಿವ ಸಾ.ರಾ.ಮಹೇಶ್‌, ಹುಣಸೂರು ಶಾಸಕ ಜಿ.ಟಿ.ಹರೀಶ್‌ಗೌಡ ಅವರು ತಂಬಾಕು ಬೆಳೆಗಾರರು ಜತೆಯಲ್ಲಿದ್ದರು ಎಂದು ಅವರು ಹೇಳಿದ್ದಾರೆ.

ಕಳೆದ ವರ್ಷ ಮೇ, ಜುಲೈ ತಿಂಗಳಲ್ಲಿ ವಿಪರೀತ ಮಳೆಯಿಂದಾಗಿ ರಾಜ್ಯದ ತಂಬಾಕು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದರು. ರಾಜ್ಯದಲ್ಲಿ ಬೆಳೆಯಲಾಗುವ ಎಫ್‌ಸಿವಿ ತಂಬಾಕು ಬೆಳೆಯ ಇಳುವರಿ ಗಣನೀಯವಾಗಿ ಕಡಿಮೆಯಾಗಿತ್ತು. ತಂಬಾಕು ಎಲೆಗಳ ಗುಣಮಟ್ಟದಲ್ಲಿ ದೊಡ್ಡ ಮಟ್ಟದ ಹಾನಿಯಾಗಿತ್ತು. ಇದರಿಂದಾಗಿ ಬೆಳೆಗಾರರು ಭಾರೀ ನಷ್ಟಕ್ಕೆ ತುತ್ತಾಗಿದ್ದರು. ಕೇಂದ್ರ ಸರ್ಕಾರ ಇದೀಗ ನೆರವಿಗೆ ಧಾವಿಸಿರುವ ಪರಿಣಾಮ ಸಾವಿರಾರು ಬೆಳೆಗಾರರಿಗೆ ಅನುಕೂಲವಾಗಲಿದೆ ಎಂದು ಅವರು ಹೇಳಿದ್ದಾರೆ.

ಕೇಂದ್ರ ಸರ್ಕಾರದ ಈ ನಿರ್ಧಾರದ ಮೂಲಕ ತಂಬಾಕು ಮಂಡಳಿಯ ಹರಾಜು ಕೇಂದ್ರಗಳಲ್ಲಿ ನೋಂದಾಯಿತ ಬೆಳೆಗಾರರಿಂದ ಹೆಚ್ಚುವರಿ ತಂಬಾಕು ಮತ್ತು ನೋಂದಾಯಿಸದಿರುವ ಬೆಳೆಗಾರರಿಂದ ಅನಧಿಕೃತ ತಂಬಾಕು ಮಾರಾಟಕ್ಕೆ ಅನುಮತಿ ನೀಡಲಿದೆ.

ಜತೆಗೆ, ಯಾವುದೇ ಹೆಚ್ಚುವರಿ ಸೇವಾ ಶುಲ್ಕಗಳಿಲ್ಲದೆ ಬೆಳೆಗಾರರು ನ್ಯಾಯಯುತವಾಗಿ ಮಾರುಕಟ್ಟೆ ಬೆಲೆಯನ್ನು ಪಾರದರ್ಶಕವಾಗಿ ಪಡೆಯಬಹುದಾಗಿದೆ ಎಂದು ನಿಖಿಲ್‌ ಅವರು ಮಾಹಿತಿ ನೀಡಿದ್ದಾರೆ.

ಎಫ್‌ಸಿವಿ ತಂಬಾಕನ್ನು 53,325 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಯಲಾಗುತ್ತಿದೆ. 40,487 ನೋಂದಾಯಿತ ಹಾಗೂ 12,838 ಪರವಾನಗಿ ರಹಿತ ಬೆಳೆಗಾರರು ಬೆಳೆಯುತ್ತಿದ್ದಾರೆ. ಕೇಂದ್ರದ ಈ ನಿರ್ಧಾರದಿಂದಾಗಿ ಪ್ರಮುಖವಾಗಿ 12,838 ತಂಬಾಕು ಬೆಳೆಗಾರರಿಗೆ ಅನುಕೂಲವಾಗಲಿದೆ. ಕರ್ನಾಟಕದ ತಂಬಾಕು ಬೆಳೆಗಾರರ ಸಂಕಷ್ಟ ನಿವಾರಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಐತಿಹಾಸಿಕ ನಿರ್ಧಾರ ಕೈಗೊಂಡಿದೆ ಎಂದು ಅವರು ತಿಳಿಸಿದ್ದಾರೆ.

RELATED ARTICLES

Latest News