ಬೆಂಗಳೂರು, ಮೇ 10-ಭಾರತ- ಪಾಕಿಸ್ತಾನ ಗಡಿ ಭಾಗದಲ್ಲಿನ ಸೇನಾ ಉದ್ವಿಗ್ನತೆಯಿಂದ ಜಮ್ಮು ಮತ್ತು ಕಾಶ್ಮೀರದ ವಿದ್ಯಾರ್ಥಿಗಳಿಗೆ ಯುಜಿಸಿಇಟಿ-25 ಪ್ರವೇಶ ಸಲುವಾಗಿ ನಡೆಸುವ ಮೂಲ ದಾಖಲೆಗಳ ಪರಿಶೀಲನೆಗೆ ಮತ್ತೊಮ್ಮೆ ಅವಕಾಶ ನೀಡಲಾಗುವುದು. ಈ ವಿಷಯದಲ್ಲಿ ಆತಂಕ ಬೇಡ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಹೇಳಿದ್ದಾರೆ.
ಪ್ರಸಕ್ತ ಸಾಲಿನ ಸಿಇಟಿ ಸಲುವಾಗಿ ಜಮ್ಮು ಮತ್ತು ಕಾಶ್ಮೀರದ ಒಟ್ಟು 204 ಮಂದಿ ಪರೀಕ್ಷೆ ಬರೆದಿದ್ದು, ಅವರಲ್ಲಿ ಇದುವರೆಗೂ ಕೇವಲ 52 ಮಂದಿ ಮಾತ್ರ ದಾಖಲೆ ಪರಿಶೀಲನೆ ಮಾಡಿಸಿಕೊಂಡಿದ್ದಾರೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಗಡಿ ಭಾಗದಲ್ಲಿ ಉದ್ವಿಗ್ನ ಪರಿಸ್ಥಿತಿಯ ಅರಿವು ಇರುವ ಕಾರಣಕ್ಕೆ ಅವರಿಗೆ ಮತ್ತೊಂದು ಅವಕಾಶ ನೀಡಲಾಗುವುದು. ಒಂದು ವೇಳೆ 10-15 ದಿನಗಳ ನಂತರವೂ ಪರಿಸ್ಥಿತಿ ಸುಧಾರಿಸದೇ ಇದ್ದರೆ ವಿಡಿಯೋ ಸಂವಾದದ ಮೂಲಕವೇ ದಾಖಲೆಗಳ ಪರಿಶೀಲನೆ ಮಾಡಲಾಗುವುದು.
ಒಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಅನಾನುಕೂಲ ಆಗದಂತೆ ನೋಡಿಕೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಈ ಎಲ್ಲ ಅಭ್ಯರ್ಥಿಗಳಿಗೆ ಪ್ರತ್ಯೇಕ ಸಂದೇಶ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.