Friday, May 3, 2024
Homeರಾಜ್ಯನಾಳೆಯಿಂದ ಮೂರು ದಿನ ಸಿಇಟಿ ಪರೀಕ್ಷೆ

ನಾಳೆಯಿಂದ ಮೂರು ದಿನ ಸಿಇಟಿ ಪರೀಕ್ಷೆ

ಬೆಂಗಳೂರು, ಏ.17- ವೃತ್ತಿಪರ ಕೋರ್ಸ್‍ಗಳಿಗೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವ 2024ನೇ ಸಾಲಿನ ಸಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಪರೀಕ್ಷೆಗೆ ಕ್ಷಣಗಣನೆ ಆರಂಭವಾಗಿದೆ. ನಾಳೆಯಿಂದ ಮೂರು ದಿನ ನಡೆಯಲಿರುವ ಸಿಇಟಿ ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆ ಮಾಡಿಕೊಂಡಿದೆ.

ಭಾರೀ ಬಿಗಿಭದ್ರತೆಯೊಂದಿಗೆ ಪರೀಕ್ಷೆ ನಡೆಸಲಿದೆ. ಪರೀಕ್ಷಾ ಅಕ್ರಮಗಳಿಗೆ ಅವಕಾಶವಿಲ್ಲದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಕೆಲವು ಷರತ್ತು ಹಾಗೂ ಸೂಚನೆಗಳನ್ನು ಪ್ರವೇಶ ಪತ್ರದೊಂದಿಗೆ ನೀಡಿದೆ. ವಿದ್ಯಾರ್ಥಿ ಜೀವನದ ಮಹತ್ವ ಘಟ್ಟವೆಂದೇ ಪರಿಗಣಿಸಲಾಗಿರುವ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾದ ಒಂದು ವಾರದ ಬಳಿಕ ಸಿಇಟಿ ಪರೀಕ್ಷೆ ಆರಂಭವಾಗುತ್ತಿದೆ. ಕಳೆದ ವರ್ಷಕ್ಕಿಂದ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಈ ಬಾರಿ ದಾಖಲೆ ಪ್ರಮಾಣದಲ್ಲಿ ಪರೀಕ್ಷೆ ಬರೆಯಲಿದ್ದಾರೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮಾಹಿತಿ ಪ್ರಕಾರ 3,81,887 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದಾರೆ. ಇದರಲ್ಲಿ ಎಂಜಿನಿಯರಿಂಗ್ ಮತ್ತು ಮೆಡಿಕಲ್ ಸೇರಿದಂತೆ ವೃತ್ತಿಪರ ಕೋರ್ಸ್‍ಗಳಿಗೆ ಸೇರಬಯಸುವವರು ಸೇರಿದ್ದಾರೆ. ಬೆಂಗಳೂರಿನ 170 ಕೇಂದ್ರಗಳು ಸೇರಿದಂತೆ ರಾಜ್ಯದಲ್ಲಿ 738 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ನೋಂದಣಿ ಮಾಡಿಕೊಂಡ ವಿದ್ಯಾರ್ಥ್ಗಿಳಲ್ಲಿ 3,49,637 ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕ ಪಾವತಿಸಿದ್ದಾರೆ.

3,18.865 ವಿದ್ಯಾರ್ಥಿಗಳು ಸಿಇಟಿ ಪ್ರವೇಶ ಪತ್ರ ಡೌನ್‍ಲೋಡ್ ಮಾಡಿಕೊಂಡಿದ್ದಾರೆ. ಒಟ್ಟು 3.27 ಲಕ್ಷ ವಿದ್ಯಾರ್ಥಿಗಳು ಸಿಇಟಿ ಬರೆಯಲು ಅರ್ಹತೆ ಹೊಂದಿದ್ದಾರೆ. ನಾಳೆ ಬೆಳಿಗ್ಗೆ 10.30ರಿಂದ 11.50 ಗಂಟೆವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50ರವರೆಗೆ ಗಣಿತ ಪರೀಕ್ಷೆಗಳು ನಡೆಯಲಿವೆ. ಏ.19ರಂದು ಬೆಳಿಗ್ಗೆ 10.30ರಿಂದ 11.50 ಗಂಟೆವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50ರವರೆಗೆ ರಸಾಯನಶಾಸ್ತ್ರ ಪರೀಕ್ಷೆಗಳು ನಡೆಯಲಿವೆ. ಏ.20ರಂದು ಹೊರನಾಡು ಹಾಗೂ ಗಡಿನಾಡು ವಿದ್ಯಾರ್ಥಿಗಳಿಗೆ ಮಾತ್ರಕನ್ನಡ ಭಾಷಾ ಪರೀಕ್ಷೆಯು ಬೆಂಗಳೂರು, ಮಂಗಳೂರು, ಬೆಳಗಾವಿಯಲ್ಲಿ ನಡೆಯಲಿದೆ.

ಸಿಇಟಿ ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳು ಪ್ರವೇಶ ಪತ್ರದ ಜೊತೆಗೆ ಡ್ರೈವಿಂಗ್ ಲೈಸೆನ್ಸ್, ಪಾಸ್‍ ಪೋರ್ಟ್, ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ದ್ವಿತೀಯ ಪಿಯುಸಿ ಪ್ರವೇಶ ಪತ್ರ ತೆಗೆದುಕೊಂಡು ಹೋಗಬೇಕು.

ಪರೀಕ್ಷಾ ಕೋಠಡಿಗೆ ಯಾವುದೇ ರೀತಿಯ ಕೈಗಡಿಯಾರ ತೆಗೆದುಕೊಂಡು ಹೋಗುವಂತಿಲ್ಲ. ಯಾವುದೇ ರೀತಿಯ ಆಧುನಿಕ ಎಲೆಕ್ಟ್ರಾನಿಕ್ ಉಪಕರಣಗಳು, ಮೊಬೈಲ್ ಫೋನ್, ಬ್ಲೂಟೂಥ್, ಸ್ಲೈಡ್ ರೂಲ್ಸ್, ಕ್ಯಾಲ್ಕ್ಯುಲೇಟರ್, ವೈಟ್‍ಫ್ಲ್ಯೂಯಿಡ್, ವೈರ್ಲೆಸ್ ಸೆಟ್ಸ್, ಪೇಪರ್ ಚೀಟಿ, ಬುಕ್ಸ್, ಪುಸ್ತಕ ಮೊದಲಾದುವುಗಳನ್ನು ಪರೀಕ್ಷಾ ಕೇಂದ್ರಕ್ಕೆ ಕೊಂಡೊಯ್ಯುವುದನ್ನು ನಿಷೇಧಿಸಿದೆ.

ಅಭ್ಯರ್ಥಿಗಳು ಪರೀಕ್ಷೆಯು ಪ್ರಾರಂಭವಾಗುವ ಮೊದಲನೆಯ ಬೆಲ್ ಆಗುವ ಕನಿಷ್ಟ ಎರಡು ಗಂಟೆಗೂ ಮೊದಲು ಪರೀಕ್ಷಾ ಕೇಂದ್ರದ ಆವರಣದಲ್ಲಿ ಹಾಜರಿರಬೇಕು. ಮೂರನೇ ಬೆಲ್ ಆದ ನಂತರ ಪರೀಕ್ಷಾ ಕೊಠಡಿ ಪ್ರವೇಶಿಸಲು ಅಭ್ಯರ್ಥಿಗಳಿಗೆ ಅವಕಾಶವಿಲ್ಲ. ನೀಲಿ ಅಥವಾ ಕಪ್ಪು ಶಾಯಿಯ ಬಾಲ್ ಪಾಯಿಂಟ್ ಪೆನ್ನು ಮಾತ್ರ ಬಳಸಬೇಕು ಎಂದು ತಿಳಿಸಿದೆ.

RELATED ARTICLES

Latest News