ಅಮರಾವತಿ, ಏ.5- ಆಂಧ್ರಪ್ರದೇಶ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಮೇಲೆ ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರಿಗೆ ಚುನಾವಣಾ ಆಯೋಗ ನೋಟೀಸ್ ಜಾರಿ ಮಾಡಿದೆ.
ಮಾರ್ಚ್ 31 ರಂದು ಚುನಾವಣಾ ಪ್ರಚಾರ ಭಾಷಣದಲ್ಲಿ ಸಿಎಂ ಜಗನ್ ಅವರನ್ನು ರಾಕ್ಷಸ , ಪ್ರಾಣಿ, ಕಳ್ಳ ಎಂದು ಉಲ್ಲೇಖಿಸುವ ಮೂಲಕ ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಸಿದ್ದಕ್ಕಾಗಿ ಟಿಡಿಪಿ ಮುಖ್ಯಸ್ಥರಿಗೆ ನೋಟಿಸ್ ನೀಡಲಾಗಿದೆ.
ಆಂಧ್ರಪ್ರದೇಶದ ಮುಖ್ಯ ಚುನಾವಣಾಧಿಕಾರಿ ನೀಡಿದ ನೋಟಿಸ್ನ ಪ್ರಕಾರ, ವೈಎಸ್ಆರ್ ಕಾಂಗ್ರೆಸ್ ಪಕ್ಷ ಮತ್ತು ಅದರ ನಾಯಕ ವೈಎಸ್ ಜಗನ್ ಮೋಹನ್ ರೆಡ್ಡಿ ವಿರುದ್ಧ ಮಾಡಿದ ಅವಹೇಳನಕಾರಿ ಹೇಳಿಕೆಗಳ ಬಗ್ಗೆ ವಿವರಣೆ ನೀಡಲು ನಾಯ್ಡು ಅವರಿಗೆ 48 ಗಂಟೆಗಳ ಕಾಲಾವಕಾಶ ನೀಡಲಾಗಿದೆ.
ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷದ (ವೈಎಸ್ಆರ್ಸಿಪಿ) ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಪಿ ರೆಡ್ಡಿ ಮತ್ತು ಇನ್ನೊಬ್ಬ ವ್ಯಕ್ತಿ ಸಲ್ಲಿಸಿದ ದೂರಿನ ಮೇರೆಗೆ ನೋಟಿಸ್ ನೀಡಲಾಗಿದೆ. ನೋಟಿಸ್ ಪ್ರಕಾರ, ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ಯೆಮ್ಮಿಗನೂರು, ಮಾರ್ಕಪುರಂ ಮತ್ತು ಬಾಪಟ್ಲಾ ಕ್ಷೇತ್ರಗಳಲ್ಲಿ ನಡೆದ ತಮ್ಮ ಪ್ರಚಾರ ಸಭೆಗಳಲ್ಲಿ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರನ್ನು ರಾಕ್ಷಸ, ಪ್ರಾಣಿ, ಕಳ್ಳ ಮತ್ತು ಹಲವಾರು ಅವಹೇಳನಕಾರಿ ಪದಗಳನ್ನು ಬಳಸಿದ್ದಾರೆ ಎಂದು ವರದಿಯಾಗಿದೆ. ಆಂಧ್ರಪ್ರದೇಶದಲ್ಲಿ ಮೇ 13 ರಂದು ವಿಧಾನಸಭೆ ಮತ್ತು ಲೋಕಸಭೆ ಚುನಾವಣೆ ನಿಗದಿಯಾಗಿದ್ದು, ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.