ಬೆಂಗಳೂರು, ಆ.22– ಚುನಾವಣೆ ಘೋಷಣೆಯಾಗುವ ಮುನ್ನವೇ ಕಾವೇರಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಸ್ಥಳೀಯರನ್ನು ಕಣಕ್ಕಿಳಿಸುವ ಬಗ್ಗೆ ಜೆಡಿಎಸ್ ಗಂಭೀರ ಚಿಂತನೆ ನಡೆಸಿದೆ.ಈಗಾಗಲೇ ಜಿದ್ದಾಜಿದ್ದಿನ ಕ್ಷೇತ್ರವೆಂದು ಪರಿಗಣಿತವಾಗಿದ್ದು, ರಾಜ್ಯಾದ್ಯಂತ ಉಪ ಚುನಾವಣೆ ವಿಚಾರ ಸದ್ದು ಮಾಡುತ್ತಿದೆ.
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ಕ್ಷೇತ್ರಕ್ಕೆ ಸದ್ಯದಲ್ಲಿಯೇ ಉಪ ಚುನಾವಣೆ ನಡೆಯಲಿದೆ. ಚನ್ನಪಟ್ಟಣ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಹಾಗೂ ರಾಜ್ಯ ಒಕ್ಕಲಿಗರ ಸಂಘದ ಮಾಜಿ ಅಧ್ಯಕ್ಷ ಹೆಚ್.ಸಿ.ಜಯಮುತ್ತು
ಅವರ ಹೆಸರು ಜೆಡಿಎಸ್ ಟಿಕೆಟ್ ಆಕಾಂಕ್ಷಿಗಳಲ್ಲಿ ಮುಂಚೂಣಿಯಲ್ಲಿದೆ.
ರಾಜ್ಯ ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿ ಸಿ.ದೇವರಾಜು(ಹಾಪ್ಕಾಮ್ಸೌ) ಅವರ ಹೆಸರು ಕೂಡ ಕೇಳಿಬರುತ್ತಿದೆ. ಇವರಿಬ್ಬರಲ್ಲಿ ಒಬ್ಬರನ್ನು ಅಭ್ಯರ್ಥಿಯನ್ನಾಗಿ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದೆ.ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಚಿಹ್ನೆಯಡಿ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಸ್ಪರ್ಧಿಸದಿದ್ದರೆ, ಸ್ಥಳೀಯರಿಗೆ ಮಣೆ ಹಾಕಲು ಜೆಡಿಎಸ್ ಮುಂದಾಗಿದೆ.
ಜೆಡಿಎಸ್ ಉನ್ನತ ಮೂಲಗಳ ಪ್ರಕಾರ ಚನ್ನಪಟ್ಟಣ ಜೆಡಿಎಸ್ ಪಕ್ಷ ಗೆದ್ದಿದ್ದ ಕ್ಷೇತ್ರವಾಗಿದ್ದು, ಯೋಗೇಶ್ವರ್ ಅವರನ್ನು ಬಿಜೆಪಿ ಬದಲು ಜೆಡಿಎಸ್ ಚಿಹ್ನೆಯಡಿ ಸ್ಪರ್ಧೆ ಮಾಡುವಂತೆ ಸಲಹೆ ಮಾಡಲಾಗಿದೆ. ಆದರೆ, ಅವರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಅಲ್ಲದೆ, ಅವರು ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಬಿಜೆಪಿ ವರಿಷ್ಠರ ಮೇಲೆ ಒತ್ತಡ ತರುತ್ತಿದ್ದಾರೆ.
ಯೋಗೇಶ್ವರ್ ಅಭ್ಯರ್ಥಿಯಾಗಲು ಎರಡೂ ಪಕ್ಷಗಳಲ್ಲಿ ತಕರಾರಿಲ್ಲ. ಆದರೆ, ಯಾವ ಚಿಹ್ನೆಯ ಮೇಲೆ ಸ್ಪರ್ಧಿಸಬೇಕು ಎಂಬುದೇ ಗೊಂದಲಕ್ಕೆ ಕಾರಣವಾಗಿದೆ. ಉಪ ಚುನಾವಣೆಯಲ್ಲೂ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮುಂದುವರೆಯಲಿದ್ದು, ಇನ್ನೂ ಅಭ್ಯರ್ಥಿ ಆಯ್ಕೆ ಅಂತಿಮಗೊಂಡಿಲ್ಲ. ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿರುವ ಯೋಗೇಶ್ವರ್ ಜೆಡಿಎಸ್ ಚಿಹ್ನೆಯಡಿ ಸ್ಪರ್ಧಿಸಲು ಮುಂದಾಗುತ್ತಿಲ್ಲ. ಬದಲಿಗೆ ಬಿಜೆಪಿಯಿಂದ ಟಿಕೆಟ್ ನೀಡುವಂತೆ ಆಗ್ರಹಿಸುತ್ತಿದ್ದಾರೆ.
ಒಂದು ವೇಳೆ ಟಿಕೆಟ್ ನೀಡದಿದ್ದರೆ, ಸ್ವತಂತ್ರ ಸ್ಪರ್ಧೆ ಮಾಡುವ ಬಗ್ಗೆಯೂ ಸಂದೇಶ ರವಾನಿಸಿದ್ದಾರೆ ಎನ್ನಲಾಗಿದೆ. ಈ ನಡುವೆ ಮತ್ತೆ ಕಾಂಗ್ರೆಸ್ ಸೇರಿ ಅಭ್ಯರ್ಥಿಯಾಗಲಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.ಆದರೆ, ಇತ್ತೀಚೆಗೆ ದೆಹಲಿಗೆ ತೆರಳಿದ್ದ ಯೋಗೇಶ್ವರ್ ಬಿಜೆಪಿ ವರಿಷ್ಠರನ್ನು ಭೇಟಿಯಾಗಿ ಚನ್ನಪಟ್ಟಣ ಉಪಚುನಾವಣೆ ಬಗ್ಗೆ ಚರ್ಚಿಸಿದ್ದಾರೆ. ಪಕ್ಷದ ಹೈಕಮಾಂಡ್ ಟಿಕೆಟ್ ನೀಡುವ ಭರವಸೆ ಇದೆ ಎಂಬ ಹೇಳಿಕೆಯನ್ನೂ ನೀಡಿದ್ದಾರೆ.
ಈ ಕ್ಷೇತ್ರವನ್ನು ತಮ ತೆಕ್ಕೆಗೆ ತೆಗೆದುಕೊಳ್ಳಲು ಮೂರು ಪಕ್ಷಗಳು ಕಾತರಿಸುತ್ತಿವೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಹೇಳಿಕೆ ನೀಡಿದ್ದಾರೆ. ಈಗಾಗಲೇ ಚುನಾವಣೆ ಸಿದ್ಧತೆಯನ್ನು ಕ್ಷೇತ್ರದಲ್ಲಿ ಆರಂಭಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಈಗಿನಿಂದಲೇ ತಂತ್ರಗಾರಿಕೆ ರೂಪಿಸುತ್ತಿದ್ದಾರೆ.
ಚುನಾವಣೆಯಲ್ಲಿ ಕಣಕ್ಕಿಳಿಯಲು ನಿರ್ಧರಿಸಿರುವ ಯೋಗೇಶ್ವರ್ ಕೂಡ ತಮದೇ ಆದ ರೀತಿಯಲ್ಲಿ ಕಾರ್ಯಕರ್ತರನ್ನು ಸಂಘಟಿಸಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡುವಂತೆ ಪಕ್ಷದಲ್ಲಿ ಒತ್ತಡವಿದೆ. ಆದರೆ, ಈಗಾಗಲೇ ಸ್ಪರ್ಧೆ ಮಾಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ನಿಖಿಲ್ ಕುಮಾರಸ್ವಾಮಿ ಸಾರಥ್ಯದಲ್ಲಿ ಜೆಡಿಎಸ್ ಚುನಾವಣೆ ಸಿದ್ಧತೆ ಆರಂಭಿಸಿದೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಯೋಗೇಶ್ವರ ಸಾಧನೆಯ ಬಗ್ಗೆ ಜೆಡಿಎಸ್ಗೆ ಅಸಮಾಧಾನವಿದೆ. ಹೀಗಾಗಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಯೋಗೇಶ್ವರ್ ಬೆಂಬಲಿಸುವ ಬದಲು ಸ್ಥಳೀಯರನ್ನೇ ಕಣಕ್ಕಿಳಿಸಬೇಕು ಎಂಬ ಒತ್ತಡವನ್ನು ಜೆಡಿಎಸ್ ಕಾರ್ಯಕರ್ತರು ವರಿಷ್ಠರ ಮೇಲೆ ತರುತ್ತಿದ್ದಾರೆ.
ಜೆಡಿಎಸ್ನಲ್ಲಾಗುತ್ತಿರುವ ಬೆಳವಣಿಗೆಗಳು ಯೋಗೇಶ್ವರ್ಗೆ ನಿರಾಸೆಯನ್ನು ಉಂಟು ಮಾಡುತ್ತಿವೆ.ಉಪ ಚುನಾವಣೆಯಲ್ಲಿ ಗೆದ್ದು ಚನ್ನಪಟ್ಟಣ ಕ್ಷೇತ್ರವನ್ನು ಉಳಿಸಿಕೊಳ್ಳಬೇಕು ಎಂಬ ಉದ್ದೇಶ ಜೆಡಿಎಸ್ಗಿದೆ. ಹೀಗಾಗಿ ಮೈತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ? ಕಾಂಗ್ರೆಸ್ ಅಭ್ಯರ್ಥಿ ಯಾರು? ಎಂಬ ಕುತೂಹಲ ಕ್ಷೇತ್ರದಲ್ಲಿ ಮಾತ್ರವಲ್ಲ. ರಾಜ್ಯ ರಾಜಕೀಯದಲ್ಲೂ ಹೆಚ್ಚಾಗಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ.