ಬೆಂಗಳೂರು, ಅ.19- ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಹಾಗೂ ಜೆಡಿಎಸ್ ನಾಯಕರು ತಮ್ಮ ನಿಲುವಿಗೆ ಅಂಟಿಕೊಂಡು ಬಿಗಿಪಟ್ಟು ಹಿಡಿದಿರುವುದರಿಂದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿ ಕಗ್ಗಂಟ್ಟಾಗಿ ಪರಿಣಮಿಸಿದೆ.
ಬಿಜೆಪಿ ಮತ್ತು ಜೆಡಿಎಸ್ ನಾಯಕರು ಇಂದು ಸಂಜೆ ಸಭೆ ನಡೆಸಿ ಅಭ್ಯರ್ಥಿ ಆಯ್ಕೆಯನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ. ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ , ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಭೆ ನಡೆಸಿ ಅಭ್ಯರ್ಥಿ ಆಯ್ಕೆ ಬಿಕ್ಕಟ್ಟು ಬಗೆಹರಿಸಲಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ಬಿಡದಿ ಬಳಿಯ ಕುಮಾರಸ್ವಾಮಿ ಅವರ ತೋಟದ ಮನೆ ಅಥವಾ ನಗರದ ಖಾಸಗಿ ಹೋಟೆಲ್‌ನಲ್ಲಿ ಸಭೆ ನಡೆಸಲು ಉದ್ದೇಶಿಸಲಾಗಿದೆ ಎಂದು ಹೇಳಿವೆ.
ಉಪ ಚುನಾವಣೆಗೆ ಅಽಸೂಚನೆ ಪ್ರಕಟಗೊಂಡು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಶುರುವಾಗಿದ್ದರೂ ಉಭಯ ಪಕ್ಷಗಳ ನಡುವೆ ಅಭ್ಯರ್ಥಿ ಆಯ್ಕೆ ವಿಚಾರ ಅಂತಿಮಗೊಳ್ಳದೇ ಗೊಂದಲ ಉಂಟಾಗಿದೆ. ಚನ್ನಪಟ್ಟಣ ಕ್ಷೇತ್ರ ಜೆಡಿಎಸ್ ಪ್ರತಿನಿಧಿಸಿದ್ದು, ನಮಗೆ ಬಿಟ್ಟುಕೊಡಬೇಕು ಎಂದು ಜೆಡಿಎಸ್ ನಾಯಕರು ಪ್ರತಿಪಾದಿಸುತ್ತಿದ್ದಾರೆ. ಅಲ್ಲದೆ, ಯೋಗೇಶ್ವರ್ ರ್ಸ್ಪರ್ಧಿಸುವುದಾದರೆ ಜೆಡಿಎಸ್ ಚಿಹ್ನೆಯಡಿ ಸ್ಪರ್ಧೆ ಮಾಡಲು ಅವಕಾಶ ಮಾಡಿಕೊಡುವುದಾಗಿ ಹೇಳಿದ್ದಾರೆ. ಆದರೆ, ಯೋಗೇಶ್ವರ್, ಬಿಜೆಪಿ ಚಿಹ್ನೆಯಡಿ ಮಾತ್ರ ಸ್ಪರ್ಧೆ ಮಾಡಲು ಒಲುವು ತೋರಿರುವುದಲ್ಲದೆ, ಟಿಕೆಟ್‌ಗಾಗಿ ಬಿಗಿಪಟ್ಟು ಹಿಡಿದಿದ್ದಾರೆ. ಇದು ಎನ್‌ಡಿ ಎ ನಾಯಕರಿಗೆ ಬಿಸಿ ತುಪ್ಪವಾಗಿ ಪರಿಣಿಮಿಸಿದೆ.
ಆಡಳಿತಾರೂಢ ಕಾಂಗ್ರೆಸ್ ಅಭ್ಯರ್ಥಿ ಮಣಿಸಿ ಕ್ಷೇತ್ರ ಉಳಿಸಿಕೊಳ್ಳಲು ಸಮರ್ಥ ಅಭ್ಯರ್ಥಿ ಕಣಕ್ಕಿಳಿಸಬೇಕು ಎಂಬ ವಿಚಾರದಲ್ಲಿ ಉಭಯ ಪಕ್ಷಗಳ ನಡುವೆ ಒಮ್ಮತವಿದೆ. ಆದರೆ, ಜೆಡಿಎಸ್ ಅಭ್ಯರ್ಥಿಯೇ ಸ್ಪರ್ಧೆ ಮಾಡಬೇಕು ಎಂಬುದೇ ಸದ್ಯಕ್ಕಿರುವ ಬಿಕ್ಕಟ್ಟು.
ಚನ್ನಪಟ್ಟಣ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಡಬಾರದು, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡಬೇಕು ಎಂಬ ಒತ್ತಡವನ್ನು ಜೆಡಿಎಸ್ ಕಾರ್ಯಕರ್ತರು, ಮುಖಂಡರು ಪದೇ ಪದೇ ಮಾಡಿದ್ದಾರೆ.
ಕಾರ್ಯಕರ್ತರ ಭಾವನೆಗಳಿಗೆ ಪೂರಕವಾಗಿ ತೀರ್ಮಾನ ಮಾಡುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ. ಎನ್‌ಡಿಎ ಅಭ್ಯರ್ಥಿ ಕಣಕ್ಕಿಳಿಸಲಿದ್ದು, ಅವರ ಗೆಲುವಿಗೆ ಶ್ರಮಿಸಿ ಎಂಬ ಸಲಹೆ ಮಾಡಿದ್ದಾರೆ. ನಿಖಿಲ್ ಕುಮಾರಸ್ವಾಮಿ ಹಲವು ಬಾರಿ ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಿನ್ನೆ ಸಂಜೆ ಖಾಸಗಿ ಹೋಟೆಲ್‌ನಲ್ಲಿ ಯೋಗೇಶ್ವರ್ ಮನವೊಲಿಸುವ ಪ್ರಯತ್ನವನ್ನು ಜೆಡಿಎಸ್‌ನ ಮಾಜಿ ಸಚಿವರಾದ ಸಿ.ಎಸ್.ಪುಟ್ಟರಾಜು, ಸಾ.ರಾ. ಮಹೇಶ್ ಮೊದಲಾದವರು ಮಾಡಿದ್ದು, ನಿರೀಕ್ಷಿತ -ಫಲ ನೀಡಿಲ್ಲ. ಯೋಗೇಶ್ವರ್ ಅವರು ಬಿಜೆಪಿ ಚಿಹ್ನೆಯಡಿ ಸ್ಪರ್ಧೆ ಮಾಡುವ ನಿಲುವಿಗೆ ಅಂಟಿಕೊಂಡಿದ್ದಾರೆ. ಹೀಗಾಗಿ ಮತ್ತೊಂದು ಸುತ್ತಿನ ಮಾತುಕತೆಯನ್ನು ಬಿಜೆಪಿ ಮತ್ತು ಜೆಡಿಎಸ್ ನಾಯಕರು ನಡೆಸಲಿದ್ದಾರೆ.
ಟಿಕೆಟ್ ಕೈ ತಪ್ಪಿದರೆ ಯೋಗೇಶ್ವರ್ ಸ್ವತಂತ್ರ ಸ್ಪರ್ಧೆ ಮಾಡಲು ಹಿಂಜರಿಯುವುದಿಲ್ಲ ಎಂಬುದರ ಅರಿವು ಉಭಯ ಪಕ್ಷಗಳ ನಾಯಕರಿಗೆ ಇದೆ. ಒಂದು ವೇಳೆ ಆ ರೀತಿಯಾದರೆ ಕಾಂಗ್ರೆಸ್‌ಗೆ ಅನುಕೂಲವಾಗಬಹುದು ಎಂಬ ಲೆಕ್ಕಾಚಾರವೂ ಇದೆ. ಕಾಂಗ್ರೆಸ್ ಕೂಡ ಈ ಕ್ಷೇತ್ರವನ್ನು ಪ್ರತಿಷ್ಠೆಯಾಗಿ ಪರಿಗಣಿಸಿದ್ದು, ಪ್ರಬಲ ಸ್ಪರ್ಧೆಗೆ ಸಿದ್ಧತೆ ನಡೆಸಿದೆ.
ಈ ಎಲ್ಲಾ ಹಿನ್ನೆಲೆಯಲ್ಲಿ ಉಪ ಚುನಾವಣೆ ವಿಚಾರದಲ್ಲಿ ಆತುರ ಮಾಡದೇ ಮಾತುಕತೆ ಮೂಲಕ ಒಮ್ಮತ ಅಭ್ಯರ್ಥಿ ಆಯ್ಕೆಗೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ನಾನಾ ತಂತ್ರ ಹಾಗೂ ಕಸರತ್ತುಗಳನ್ನುನಡೆಸುತ್ತಿದ್ದಾರೆ.