ಬೆಂಗಳೂರು,ಜು.21- ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರಾಗ ಬೇಕೆಂಬುದನ್ನು ನಾಡಿನ ಜನರು ತೀರ್ಮಾನ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಮುಖ್ಯಮಂತ್ರಿ ವಿಚಾರ ಈಗ ಚರ್ಚೆಗೆ ಗ್ರಾಸವಾಗಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮೊದಲಿನಿಂದಲೂ ಮತ್ತೊಮ್ಮೆ ಮುಖ್ಯಮಂತ್ರಿಯಾಗಲು ಅವಕಾಶ ಮಾಡಿಕೊಡಿ ಎಂದು ಕೇಳುತ್ತಿದ್ದಾರೆ ಎಂದರು.
ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಮುಖ್ಯಮಂತ್ರಿಯಾಗಲು ಅವಕಾಶ ಕಲ್ಪಿಸುವಂತೆ ಕೋರುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಈ ಬಾರಿ ತಮಗೆ ಸಿಎಂ ಆಗುವ ಅವಕಾಶವಿದೆ ಎಂದು ಮನವಿ ಮಾಡುತ್ತಿದ್ದಾರೆ. ಜನರು ಈ ಎಲ್ಲಾ ವಿಚಾರವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ನಿರ್ಧರಿಸಲಿದ್ದಾರೆ ಎಂದು ಹೇಳಿದರು.
ಒಕ್ಕಲಿಗ ನಾಯಕತ್ವ ಹಾಗೂ ಮುಖ್ಯಮಂತ್ರಿ ಸ್ಥಾನದ ಬಗ್ಗೆ ನಡೆಯುತ್ತಿರುವ ಚರ್ಚೆ ಆಯಾ ಪಕ್ಷಗಳಿಗೆ ಸೀಮಿತವಾಗಿದ್ದು, ಕಾಂಗ್ರೆಸ್‍ನಲ್ಲಿ ನಾಯಕತ್ವಕ್ಕಾಗಿ ನಡೆಯುತ್ತಿರುವ ಪೈಪೋಟಿ ಹಾಗೂ ಮುಖ್ಯಮಂತ್ರಿ ಸ್ಥಾನದ ಸ್ಪರ್ಧೆಯ ಬಗ್ಗೆ ನಡೆಯುತ್ತಿರುವ ವಿಚಾರಗಳು ಈಗಾಗಲೇ ಎಲ್ಲರಿಗೂ ಗೊತ್ತಿರುವ ಸಂಗತಿಯಾಗಿದೆ. ಆ ಪಕ್ಷದಲ್ಲಿ ನಡೆಯುತ್ತಿರುವ ವಿಚಾರ ಆಂತರಿಕವಾಗಿದ್ದು, ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.
ನಿಗಮ ಮಂಡಳಿಯ ನೂತನ ಅಧ್ಯಕ್ಷರು, ಉಪಾಧ್ಯಕ್ಷರ ನೇಮಕ ಶೀಘ್ರದಲ್ಲೇ ನಡೆಯಲಿದೆ. ದೆಹಲಿ ಪ್ರವಾಸದ ಬಳಿಕ ನಿಗಮ ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷರ ನೇಮಕಕ್ಕೆ ಅಂತಿಮ ರೂಪ ನೀಡಲಾಗುವುದು ಎಂದು ಸಿಎಂ ಹೇಳಿದರು. ಸಚಿವ ಸಂಪುಟ ವಿಸ್ತರಣೆ ವಿಚಾರದ ಬಗ್ಗೆ ದೆಹಲಿ ಪ್ರವಾಸದ ಸಂದರ್ಭದಲ್ಲಿ ಪಕ್ಷದ ವರಿಷ್ಠರೊಂದಿಗೆ ಸಮಾಲೋಚನೆ ನಡೆಸಿದ ನಂತರ ನಿರ್ಧಾರ ಮಾಡಲಾಗುವುದು ಎಂದು ತಿಳಿಸಿದರು.
ರಾಜ್ಯದ 40 ನಿಗಮ ಮಂಡಳಿಗಳ ನೇಮಕವನ್ನು ರಾಜ್ಯ ಸರ್ಕಾರ ಈಗಾಗಲೇ ರದ್ದು ಪಡಿಸಿದ್ದು, 35ರಿಂದ 40ನಿಗಮ ಮಂಡಳಿಗಳ ಅಧ್ಯಕ್ಷ, ಉಪಾಧ್ಯಕ್ಷರ ನೇಮಕಕ್ಕೆ ಪಟ್ಟಿ ಸಿದ್ದಪಡಿಸಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ನಿಗಮ ಮಂಡಳಿಗಳಲ್ಲಿ ಪಕ್ಷದ ಕಾರ್ಯಕರ್ತರಿಗೆ ಅವಕಾಶ ಮಾಡಿಕೊಡಲಾಗುತ್ತದೆ. ಅಧ್ಯಕ್ಷ, ಉಪಾಧ್ಯಕ್ಷರ ನೇಮಕದ ನಂತರ ಸದಸ್ಯರನ್ನು ನೇಮಕ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ.