Sunday, June 30, 2024
Homeರಾಜ್ಯನೀಟ್‌ ಮರು ಪರೀಕ್ಷೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ

ನೀಟ್‌ ಮರು ಪರೀಕ್ಷೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು, ಜೂ.15- ವೈದ್ಯಕೀಯ ಶಿಕ್ಷಣ ಪ್ರವೇಶಕ್ಕೆ ಸಂಬಂಧಪಟ್ಟಂತೆ ನೀಟ್‌ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದ್ದು, ಮರು ಪರೀಕ್ಷೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರಿಗೆ ಫಸ್ಟ್‌ ರ್ಯಾಂಕ್‌ ನೀಡಲಾಗಿದೆ. ಕಷ್ಟಪಟ್ಟು ಓದಿ ಬರೆದಂತಹ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಈ ಬಗ್ಗೆ ತನಿಖೆಯಾಗಬೇಕು ಹಾಗೂ ಮರು ಪರೀಕ್ಷೆ ನಡೆಸಬೇಕು ಎಂದರು.

ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ನೀಟ್‌ ಪರೀಕ್ಷೆಯನ್ನು ಸರಿಯಾಗಿ ನಡೆಸಿಲ್ಲ. ಗ್ರೇಸ್‌‍ ಅಂಕ ಕೊಟ್ಟು ಪಾಸ್‌‍ ಮಾಡುವುದು ಕೆಟ್ಟ ಅಭ್ಯಾಸ. ಯಾರಿಗೂ ಗ್ರೇಸ್‌‍ ಅಂಕ ಕೊಡಬಾರದು ಎಂದು ಹೇಳಿದರು.ಕೇಂದ್ರ ಸರ್ಕಾರದಿಂದ ಬರ ನಿರ್ವಹಣೆಗಾಗಿ ಬಿಡುಗಡೆ ಮಾಡಲಾದ ಹಣವನ್ನು ರಾಜ್ಯ ಸರ್ಕಾರ ರೈತರ ಖಾತೆಗಳಿಗೆ ವರ್ಗಾವಣೆ ಮಾಡುತ್ತಿದೆ. ಯಾವುದನ್ನೂ ಉಳಿಸಿಕೊಳ್ಳುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ದಕ್ಷಿಣ ಭಾರತಕ್ಕೆ 8 ಸಚಿವ ಸ್ಥಾನಗಳನ್ನು ನೀಡುವ ಮೂಲಕ ಬಿಜೆಪಿ ತನ್ನ ಪಕ್ಷ ಸಂಘಟನೆಯನ್ನು ವಿಸ್ತರಣೆ ಮಾಡಿಕೊಳ್ಳುವ ಪ್ರಯತ್ನ ನಡೆಸಿದೆ ಎಂಬ ಟೀಕೆಗಳಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಏನೇ ಮಾಡಿದರೂ ದಕ್ಷಿಣ ಭಾರತದಲ್ಲಿ ಜನರು ಬಿಜೆಪಿಯನ್ನು ಬೆಂಬಲಿಸುವುದಿಲ್ಲ. ಏಕೆಂದರೆ, ಅದು ಆರ್‌ಎಸ್‌‍ಎಸ್‌‍ ಮೂಲದ ಪಕ್ಷ ಎಂದು ವ್ಯಾಖ್ಯಾನಿಸಿದರು.

ಉತ್ತರ ಭಾರತದಲ್ಲೂ ಈ ಬಾರಿ ಜನರು ಬಿಜೆಪಿಯನ್ನು ಬೆಂಬಲಿಸಿಲ್ಲ. ಆರ್‌ಎಸ್‌‍ಎಸ್‌‍ನವರೇ ಚುನಾವಣಾ ಫಲಿತಾಂಶದ ಬಗ್ಗೆ ಹೇಳಿಕೆ ನೀಡಿದ್ದು, ಅಹಂಕಾರವಿದ್ದರೆ ಜನ ಒಪ್ಪುವುದಿಲ್ಲ ಎಂದು ಹೇಳಿದ್ದಾರೆ. ಆದರೂ ಬಿಜೆಪಿಯವರು ದ್ವೇಷದ ರಾಜಕಾರಣ ಮಾಡುವುದನ್ನು ಬಿಟ್ಟಿಲ್ಲ. ಮೊದಲಿನಿಂದಲೂ ಅದೇ ಪರಿಪಾಠ ಅನುಸರಿಸುತ್ತಾ ಬಂದಿದ್ದಾರೆ. ಈಗಲೂ ಅದನ್ನೇ ಮುಂದುವರೆಸಿದ್ದಾರೆ.

ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಮತದಾರರು ಬಿಜೆಪಿಗೆ ಸ್ಪಷ್ಟ ಬಹುಮತ ನೀಡಿಲ್ಲ ಎಂದರು.ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ ವಿರುದ್ಧ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಳಿಬರುತ್ತಿರುವ ಟೀಕೆಗಳಿಗೆ ಉತ್ತರಿಸಿದ ಅವರು, ನನ್ನ ಮೇಲೆ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹಾಗೂ ಕಾಂಗ್ರೆಸ್‌‍ ನಾಯಕ ರಾಹುಲ್‌ ಗಾಂಧಿ ಅವರ ಮೇಲೆ ಕೇಸು ದಾಖಲಿಸಿರುವುದನ್ನು ಏನೆಂದು ಕರೆಯಬೇಕು ಎಂದು ಮರು ಪ್ರಶ್ನೆ ಹಾಕಿದರು.

ರಾಹುಲ್‌ ಗಾಂಧಿ ಅವರ ವಿರುದ್ಧ ಪ್ರಕರಣ ದಾಖಲಿಸಿ, ಸದಸ್ಯತ್ವವೇ ರದ್ದುಗೊಳ್ಳುವಂತೆ ಮಾಡಿರಲಿಲ್ಲವೇ? ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ ಅವರನ್ನು ಜೈಲಿಗೆ ಕಳುಹಿಸಿದ್ದಾರೆ. ಅದನ್ನು ದ್ವೇಷದ ರಾಜಕಾರಣ ಎನ್ನಬೇಕೇ ಅಥವಾ ಪ್ರೀತಿಯ ರಾಜಕಾರಣ ಎನ್ನಬೇಕೇ? ಸೇಡಿನ ರಾಜಕಾರಣ ಮಾಡುವವರು ಅವರು. ನಾವಲ್ಲ. ನಾನು ಎಂದೂ ಸೇಡಿನ ರಾಜಕಾರಣ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ಪರಿಶಿಷ್ಟ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶಿಷ್ಯವೇತನಕ್ಕೆ ನಿಗದಿಯಾಗಿದ್ದ ಶೇಕಡಾವಾರು ಅಂಕಗಳ ಪ್ರಮಾಣವನ್ನು ಶೇ. 60ರಿಂದ 75ಕ್ಕೆ ಹಾಗೂ ಆದಾಯ ಮಿತಿಯನ್ನು ಆರು ಲಕ್ಷ ರೂ.ಗಳಿಗೆ ಹೆಚ್ಚಿಸಿರುವ ಬಗ್ಗೆ ಪರಿಶೀಲನೆ ನಡೆಸಿ ಅಧಿಕಾರಿಗಳ ಜೊತೆ ಈ ಬಗ್ಗೆ ಚರ್ಚಿಸುವುದಾಗಿ ಹೇಳಿದರು.

ಎಂಜಿನಿಯರಿಂಗ್‌ ಕಾಲೇಜುಗಳ ಶೈಕ್ಷಣಿಕ ಶುಲ್ಕವನ್ನು ಶೇ.10ರಷ್ಟು ಹೆಚ್ಚಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ ಅವರು ಕಾಲೇಜು ಆಡಳಿತಮಂಡಳಿಗಳ ಒತ್ತಾಯದ ಮೇರೆಗೆ ಈ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಹೇಳಿದರು.ತಾಲ್ಲೂಕು ಮತ್ತು ಜಿಲ್ಲಾ ಪಂಚಾಯ್ತಿ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳಿಗೆ ಶೀಘ್ರವೇ ಚುನಾವಣೆ ನಡೆಸಲು ನಮ ಸರ್ಕಾರ ಬದ್ಧವಾಗಿದೆ ಎಂದರು.

RELATED ARTICLES

Latest News