Friday, November 22, 2024
Homeರಾಜ್ಯಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ತರಾಟೆ

ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ತರಾಟೆ

ಬೆಂಗಳೂರು, ಜೂ.26- ಕರ್ನಾಟಕ ಗಣಿ ಪರಿಸರ ಪುನಶ್ಚೇತನ ಯೋಜನೆಗಳಿಗೆ ವರ್ಷ ಕಳೆದರೂ ವಿಸ್ತೃತ ಯೋಜನಾ ವರದಿ ತಯಾರಾಗದೇ ಇರುವ ಬಗ್ಗೆ ಅಸಹನೆ ವ್ಯಕ್ತಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಇಲಾಖೆಯ ಕಾರ್ಯದರ್ಶಿಯವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡು ಗಂಭೀರ ಎಚ್ಚರಿಕೆ ನೀಡಿದ್ದಾರೆ.

ಮುಂದಿನ ಒಂದು ವಾರದೊಳಗಾಗಿ ವಿಸ್ತೃತ ಯೋಜನಾ ವರದಿಗಳನ್ನು ಪೂರ್ಣಗೊಳಿಸಿ ಅನುಮೋದನೆಗೆ ಸಲ್ಲಿಸಬೇಕು ಎಂದು ವಿಧಾನಸೌಧದಲ್ಲಿ ನಡೆದ ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಆದೇಶಿಸಿದ್ದಾರೆ.

ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ (ಕೆಎಂಇಆರ್‌ಸಿ)ದ ಅಡಿ ಗಣಿ ಪ್ರದೇಶಗಳ ಪುನಶ್ಚೇತನ ಯೋಜನೆ ಸಿಇಪಿಎಂಐಜೆಡ್‌ಗಾಗಿ 24,996.30 ಕೋಟಿ ರೂ. ಒದಗಿಸಲಾಗಿದೆ. ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳಿಗೆ ಈ ಹಣ ಖರ್ಚು ಮಾಡಬೇಕು.

ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿ.ಸುದರ್ಶನ್‌ ರೆಡ್ಡಿ ಅವರ ನೇತೃತ್ವದ ಸಮಿತಿ 7,978.78 ಕೋಟಿ ರೂ. ಮೊತ್ತದ 358 ಯೋಜನೆಗಳನ್ನು ಅನುಮೋದಿಸಿದೆ. ಈ ಪೈಕಿ ಒಟ್ಟು 3469.41 ಕೋಟಿ ರೂ. ವೆಚ್ಚದ 182 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. 135 ಯೋಜನೆಗಳಿಗೆ ಟೆಂಡರ್‌ ಕರೆಯಲಾಗಿದ್ದು, 47 ಕಾಮಗಾರಿಗಳಿಗೆ ಕಾರ್ಯಾದೇಶ ನೀಡಲಾಗಿದೆ. 23 ಕಾಮಗಾರಿಗಳನ್ನು ವಿವಿಧ ಸಂಸ್ಥೆಗಳಿಗೆ ವಹಿಸಲಾಗಿದೆ ಎಂದು ಸಭೆಯಲ್ಲಿ ವಿವರಿಸಲಾಯಿತು.

ಯೋಜನೆಗಳ ಸಕಾಲಿಕ ಹಾಗೂ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಸಂಬಂಧಿಸಿದ ಇಲಾಖೆಯಲ್ಲಿ ಯೋಜನಾ ಮೇಲ್ವಿಚಾರಣೆ ಘಟಕ ಸ್ಥಾಪಿಸುವಂತೆ ಮುಖ್ಯಮಂತ್ರಿ ಸೂಚಿಸಿದರು.ವರ್ಷ ಕಳೆದರೂ ಡಿಪಿಆರ್‌ ಆಗದೇ ಇದ್ದುದಕ್ಕೆ ಕಾರ್ಯದರ್ಶಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಮುಖ್ಯಮಂತ್ರಿಯವರು ಅಧಿಕಾರಿಗಳ ವಿಳಂಬ ಧೋರಣೆಯನ್ನು ಸಹಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಇದು ವಿಶೇಷ ಕಾರ್ಯಕ್ರಮವಾಗಿದ್ದು, ಟೆಂಡರ್‌ನ ವಾಡಿಕೆಯ ಷರತ್ತುಗಳು ಅನ್ವಯಿಸುವುದಿಲ್ಲ. ಟೆಂಡರ್‌ನಲ್ಲಿ ನಿಗಮವು ವಾರದೊಳಗೆ ಬಿಲ್‌ ಪಾವತಿಸಲಾಗುವುದರಿಂದ ಯಾವುದೇ ಮುಂಗಡ ನೀಡಲಾಗದು ಎಂಬುದನ್ನು ಗುತ್ತಿಗೆದಾರರಿಗೆ ಸ್ಪಷ್ಟವಾಗಿ ತಿಳಿಸಲು ಸೂಚಿಸಿದರು.

ರೈಲ್ವೆ ಯೋಜನೆಗಳಿಗೆ 5271.96 ಕೋಟಿ ರೂ., ಕುಡಿಯುವ ನೀರಿನ ಯೋಜನೆಗಳಿಗೆ 4929.84 ಕೋಟಿ ರೂ., ಆರೋಗ್ಯ ಕ್ಷೇತ್ರಕ್ಕೆ 1915.78 ಕೋಟಿ ರೂ., ಪರಿಸರ ಪುನಃಸ್ಥಾಪನೆಗೆ 2655.17 ಕೋಟಿ ರೂ., ರಸ್ತೆಗಳು ಮತ್ತು ಸಂವಹನ ಯೋಜನೆಗಳಿಗೆ 2559.17 ಕೋಟಿ ರೂ., ವಸತಿ ಯೋಜನೆಗಳಿಗೆ 1193.98 ಕೋಟಿ ರೂ. ನಿಗದಿ ಪಡಿಸಲಾಗಿದೆ ಎಂದು ಸಭೆಯಲ್ಲಿ ಮಾಹಿತಿ ನೀಡಲಾಯಿತು.

ವಸತಿ ಯೋಜನೆಗಳಡಿ ಲಾನುಭವಿಗಳನ್ನು ಶೀಘ್ರವೇ ಗುರುತಿಸಲು ಮುಖ್ಯಮಂತ್ರಿ ಆದೇಶಿಸಿದರು. ಸಣ್ಣ ನೀರಾವರಿ ಇಲಾಖೆ 14 ಯೋಜನೆಗಳ ಪೈಕಿ 7 ಯೋಜನೆಗಳ ಕಾಮಗಾರಿ ಆರಂಭಿಸಲಾಗಿದೆ. ಉಳಿದ 7 ಯೋಜನೆಗಳ ಟೆಂಡರ್‌ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸಿ ಕಾಮಗಾರಿ ಅನುಷ್ಠಾನ ಮಾಡುವಂತೆ ತಾಕೀತು ಮಾಡಿದರು.

ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಶಾಲೆಗಳ ಕಟ್ಟಡ ದುರಸ್ತಿ, ಕೊಠಡಿ, ಪ್ರಯೋಗಾಲಯ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕು. ಅಂಗನವಾಡಿ ಕಟ್ಟಡ, ವಿದ್ಯಾರ್ಥಿ ನಿಲಯಗಳು ಮತ್ತಿತರ ಯೋಜನೆಗಳಿಗೆ ಒತ್ತು ನೀಡಬೇಕು. ಲಭ್ಯವಿರುವ ಅನುದಾನದಲ್ಲಿ ಈ ನಾಲ್ಕೂ ಜಿಲ್ಲೆಗಳನ್ನು ಮಾದರಿ ಜಿಲ್ಲೆಗಳಾಗಿ ಅಭಿವೃದ್ಧಿ ಪಡಿಸಬೇಕಿದೆ ಎಂದು ಹೇಳಿದರು.

ಗಣಿ ಬಾಧಿತ ಜಿಲ್ಲೆಗಳಲ್ಲಿ ಮಾಲಿನ್ಯದ ಪ್ರಮಾಣ ಕಳೆದ ವರ್ಷಕ್ಕೆ ಹೋಲಿಸಿದರೆ ಕಡಿಮೆಯಾಗಿದ್ದು, ತೃಪ್ತಿಕರ ಹಂತಕ್ಕೆ ತಲುಪಿದೆ ಎಂದು ಅಧಿಕಾರಿಗಳು ವಿವರಿಸಿದರು.ಸಭೆಯಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಡಾ. ಶಾಲಿನಿ ರಜನೀಶ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್‌‍.ಕೆ. ಅತೀಕ್‌, ಕಾರ್ಯದರ್ಶಿ ಡಾ. ಕೆ.ವಿ.ತ್ರಿಲೋಕಚಂದ್ರ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕುದುರೆಮುಖ ಕಬ್ಬಿಣದ ಅದಿರು ಕಂಪನಿಗೆ ಬಳ್ಳಾರಿಯ ಬಳಿ ಮಂಜೂರಾಗಿದ್ದ ಜಮೀನಿಗೆ ಇತ್ತೀಚೆಗೆ ತಡೆ ನೀಡಲಾಗಿದೆ. ಕುದುರೆಮುಖ ಕಂಪನಿಯನ್ನು ಪುನಶ್ಚೇತನಗೊಳಿಸಬೇಕು ಎಂದು ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರಯತ್ನಿಸುತ್ತಿರುವುದರ ಹಂತದಲ್ಲೇ ಮುಖ್ಯಮಂತ್ರಿಗಳು ಗಣಿ ಭೂಪ್ರದೇಶ ಪುನಶ್ಚೇತನ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿರುವುದು ಗಮನ ಸೆಳೆದಿದೆ.

RELATED ARTICLES

Latest News