ಬೆಂಗಳೂರು,ಜು.11-ಸತತ ಮಳೆಯಿಂದ ತತ್ತರಿಸಿರುವ ಕೊಡುಗು, ದಕ್ಷಿಣಕನ್ನಡ, ಉಡುಪಿ, ಉತ್ತರಕನ್ನಡ ಜಿಲ್ಲೆಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ನಾಳೆ ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿ ಮಳೆಯಿಂದ ಉಂಟಾಗಿರುವ ಹಾನಿಯ ಬಗ್ಗೆ ಜಿಲ್ಲಾಧಿಕಾರಿ ಸೇರಿದಂತೆ ಜಿಲ್ಲಾಡಳಿತದೊಂದಿಗೆ ಸಭೆ ನಡೆಸಲಿದ್ದಾರೆ.
ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಕಳೆದ 10 ದಿನಗಳಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಜೊತೆ ಚರ್ಚೆ ಮಾಡಿ ಸಲಹೆ ಸೂಚನೆ ನೀಡಲಾಗಿದೆ. ನಾಳೆಯಿಂದ ಅತಿ ಮಳೆಯಿಂದ ತತ್ತರಿಸಿರುವ ನಾಲ್ಕು ಜಿಲ್ಲೆಗಳಿಗೆ ಭೇಟಿ ನೀಡಿ ಸ್ಥಳದಲ್ಲಿಯೇ ಸಭೆ ನಡೆಸಿ ಪರಿಹಾರ ಕ್ರಮಗಳ ಬಗ್ಗೆ ನಿರ್ದೇಶನ ನೀಡುವುದಾಗಿ ಹೇಳಿದರು.
ಬುಧವಾರ ಉಡುಪಿ ಹಾಗೂ ಕಾರವಾರ ಜಿಲ್ಲೆಗೆ ಭೇಟಿ ನೀಡಿ ಮಳೆಯಿಂದ ಉಂಟಾಗಿರುವ ಹಾನಿ ಹಾಗೂ ಪರಿಹಾರ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸುವುದಾಗಿ ಅವರು ತಿಳಿಸಿದರು. ಕಳೆದ ಎರಡು ವಾರಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಕೊಡಗು, ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳು ತತ್ತರಿಸಿಹೋಗಿದ್ದು, ಜನರು ತೀವ್ರ ಸಂಕಷ್ಟಕ್ಕೆ ಎದುರಾಗಿದೆ.
ಭೂಸಂಪರ್ಕದಿಂದ ಕೆಲವು ಕಡೆ ಸಂಪರ್ಕ ಕಡಿತವಾಗಿದ್ದರೆ, ಹಲವು ಕಡೆ ಹಾನಿಯಾಗಿದೆ. ಕೊಡುಗು ಮತ್ತು ದಕ್ಷಿಣ ಕನ್ನಡದ ಭಾಗದಲ್ಲಿ ಪದೇ ಪದೇ ಉಂಟಾಗುತ್ತಿರುವ ಭೂಕಂಪನದಿಂದ ಜನರು ಭಯಭೀತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮಳೆ ಪೀಡಿತ ಜಿಲ್ಲೆಗಳಿಗೆ ಮುಖ್ಯಮಂತ್ರಿ ಭೇಟಿ ನೀಡುತ್ತಿದ್ದಾರೆ.