ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹಠಾತ್ ನಿಧನ

Social Share

ಬೆಂಗಳೂರು,ಆ.22- ಹಿರಿಯ ಪತ್ರಕರ್ತ ಹಾಗೂ ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹೋಳಿಮಠ.ಎಚ್.ಬಿ(47) ಇಂದು ಹಠಾತ್ ನಿಧನರಾಗಿದ್ದಾರೆ. ಇಂದು ಬೆಳಗ್ಗೆ ಜಿಮ್‍ನಲ್ಲಿ ಕಸರತ್ತು ಮಾಡುವಾಗ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಇಂದು ಮಧ್ಯಾಹ್ನದವರೆಗೂ ಅನ್ನಪೂರ್ಣೇಶ್ವರಿನಗರದ ನಿವಾಸದಲ್ಲಿ ಮೃತದೇಹವನ್ನು ಅಂತಿಮ ದರ್ಶನಕ್ಕಾಗಿ ಇಡಲಾಗಿತ್ತು. ನಾಳೆ ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ಮೃತದೇಹದ ಅಂತ್ಯಕ್ರಿಯೆ ನೆರವೇರಲಿದೆ ಎಂದು ಆಪ್ತ ಮೂಲಗಳು ತಿಳಿಸಿವೆ.

ಗುರುಲಿಂಗಸ್ವಾಮಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಬೊಮ್ಮಾಯಿ ಗೃಹ ಸಚಿವರಾಗಿದ್ದಾಗಲೂ ಅವರು ಕಾರ್ಯ ನಿರ್ವಹಿಸಿದ್ದರು. ಪತ್ರಕರ್ತರಾಗಿ ಈಟಿವಿ, ವಿಜಯವಾಣಿ, ಟಿವಿ5 ವಾಹಿನಿಯಲ್ಲೂ ಸೇವೆ ಸಲ್ಲಿಸಿದ್ದ ಇವರು ಸರಳ ಹಾಗೂ ಸ್ನೇಹಜೀವಿಯಾಗಿದ್ದರು. ಮಾಧ್ಯಮದವರೊಂದಿಗೆ ಉತ್ತಮ ಒಡನಾಟ ಹೊಂದಿದ್ದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೃತರ ಅಂತಿಮ ದರ್ಶನ ಪಡೆದು ತೀವ್ರ ಸಂತಾಪ ವ್ಯಕ್ತಪಡಿಸಿದರು.
ಸಚಿವರಾದ ಡಾ.ಸಿ.ಎನ್.ಅಶ್ವಥ್ ನಾರಾಯಣ, ಮುರುಗೇಶ್ ನಿರಾಣಿ, ಗೋವಿಂದ ಕಾರಜೋಳ, ಕೆ.ಗೋಪಾಲಯ್ಯ, ಬಿ.ಸಿ.ಪಾಟೀಲ್, ಸಿ.ಸಿ.ಪಾಟೀಲ, ಆರಗ ಜ್ಞಾನೇಂದ್ರ, ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ, ಜಗದೀಶ್ ಶೆಟ್ಟರ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಬೆಂಗಳೂರು ಪ್ರೆಸ್‍ಕ್ಲಬ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಬೆಂಗಳೂರು ವರದಿಗಾರರ ಕೂಟ ಸೇರಿದಂತೆ ಸಚಿವರು, ಶಾಸಕರು, ಗಣ್ಯರು, ಅಪಾರ ಗೆಳೆಯರು ಮೃತರ ಆತ್ಮಕ್ಕೆ ಶ್ರದ್ದಾಂಜಲಿ ಸಲ್ಲಿಸಿದ್ದಾರೆ.

Articles You Might Like

Share This Article