ಬೆಳೆಹಾನಿ ಹಾಗೂ ಮನೆಹಾನಿ ತುರ್ತು ವಿತರಣೆಗೆ ಸಿಎಂ ಸೂಚನೆ

Social Share

ಬೆಂಗಳೂರು,ಅ.13- ಬೆಳೆಹಾನಿ ಹಾಗೂ ಮನೆಹಾನಿಗೆ ಪರಿಹಾರ ನೀಡಲು ಅನುದಾನದ ಕೊರತೆ ಇಲ್ಲ. ಮೂಲಸೌಕರ್ಯ ಹಾನಿಗೆ ಬಿಡುಗಡೆ ಮಾಡಲಾದ ಅನುದಾನಕ್ಕೆ ಕ್ರಿಯಾಯೋಜನೆ ರೂಪಿಸಿ, ಅನುಷ್ಠಾನಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಮಳೆಹಾನಿಗೊಳಗಾದ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನರೆನ್ಸ್ ನಡೆಸಿದ ಅವರು,
ಬೆಳೆಹಾನಿ ಪರಿಹಾರ ವಿತರಣೆಯನ್ನೂ ತ್ವರಿತವಾಗಿ ವಿತರಿಸಬೇಕು. ಅಕ್ಟೋಬರ್ ತಿಂಗಳಿನಲ್ಲಿ ಸಂಭವಿಸಿದ ಬೆಳೆಹಾನಿಯನ್ನು ಸಹ ಕೂಡಲೇ ಜಂಟಿ ಸಮೀಕ್ಷೆ ನಡೆಸಿ, ಈ ತಿಂಗಳೊಳಗೆ ಪರಿಹಾರ ವಿತರಿಸಲು ಸೂಚನೆ ಕೊಟ್ಟರು.

ಮೂಲಸೌಲಭ್ಯ ಹಾನಿಗೆ ಸಂಬಂಧಿಸಿದಂತೆ ಹಾನಿಯ ತೀವ್ರತೆಯನ್ನು ಆಧರಿಸಿ, ಸಿ ವರ್ಗ- ಎನ್‍ಡಿಆರ್‍ಎಫ್ ಮಾರ್ಗಸೂಚಿಯನ್ವಯ ದುರಸ್ತಿ, ಬಿ ವರ್ಗ- ಸರ್ಕಾರದಿಂದ ಹೆಚ್ಚುವರಿ ನೆರವು ಅಗತ್ಯವಿರುವ ಕಾಮಗಾರಿಗಳು, ಎ- ಸಂಪೂರ್ಣ ಪುನರ್ ನಿರ್ಮಾಣ ಅಗತ್ಯವಿರುವ ಕಾಮಗಾರಿಗಳು- ಎಂದು ಗುರುತಿಸಿ, ಪ್ರಸ್ತಾವನೆ ಸಲ್ಲಿಸುವಂತೆ ನಿರ್ದೇಶನ ನೀಡಿದರು.

ರಾಜ್ಯದಲ್ಲಿ ಹಿಂದೆಂದೂ ಕಾಣದಂತಹ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಮಳೆಹಾನಿಯಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿಗಳು ಖುದ್ದು ಭೇಟಿ ನೀಡಿ, ಪರಿಹಾರ ವಿತರಣೆ, ಮಾಹಿತಿ ದಾಖಲಿಸುವಲ್ಲಿ ಲೋಪಗಳಾಗದಂತೆ ತಹಸೀಲ್ದಾರರಿಗೆ ಮಾರ್ಗಸೂಚಿ ನೀಡಬೇಕೆಂದು ಸಿಎಂ ತಾಕೀತು ಮಾಡಿದರು.

ಮನೆಗಳಿಗೆ ಸಂಬಂಧಿಸಿದ ಹಾನಿ ದಾಖಲಿಸುವಲ್ಲಿ ಯಾವುದೇ ಲೋಪವಾಗದಂತೆ ಜಿಲ್ಲಾಧಿಕಾರಿಗಳು ಖುದ್ದು ಮೇಲ್ವಿಚಾರಣೆ ವಹಿಸಬೇಕು. ವಸ್ತುಸ್ಥಿತಿ ಆಧರಿಸಿ, ಪರಿಹಾರ ಕೋರಿ ಬಂದ ಮನವಿಗಳನ್ನು ದಾಖಲಿಸಬೇಕು. ಮನೆ ಹಾನಿಗೆ ಸಂಬಂಧಿಸಿದಂತೆ ಹೆಚ್ಚುವರಿ ಪರಿಹಾರ ವಿತರಣೆಗೆ ಸುತ್ತೋಲೆ ಹೊರಡಿಸುವಂತೆ ವಿಪತ್ತು ನಿರ್ವಹಣೆ ಆಯುಕ್ತರಿಗೆ ಸೂಚಿಸಲಾಗಿದೆ ಎಂದು ಬೊಮ್ಮಾಯಿ ಹೇಳಿದರು.

ದಿಢೀರ್ ಪ್ರವಾಹ ಉಂಟಾಗುವ ಹೊಳೆ, ಹಳ್ಳಗಳ ವ್ಯಾಪ್ತಿಯಲ್ಲಿ ಸೂಕ್ತ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಬೇಕು. ಕೆರೆಗಳು ಒಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು, ವಿದ್ಯುತ್ ಕಂಬಗಳು, ಟ್ರಾನ್ಸ್‍ಫಾರ್ಮರುಗಳನ್ನು 24 ಗಂಟೆಗಳೊಳಗೆ ಸರಿಪಡಿಸಿ, ವಿದ್ಯುತ್ ಸಂಪರ್ಕ ಒದಗಿಸಬೇಕು ಎಂದು ಸೂಚಿಸಿದರು.

ಕೆರೆಗಳು ದುರ್ಬಲವಾಗಿರುವುದು, ನೀರಿನ ಒತ್ತಡ ಹೆಚ್ಚಿರುವ ಸೂಕ್ಷ್ಮ ಪರಿಸ್ಥಿತಿಯನ್ನು ಅವಲೋಕಿಸಿ, ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳುವುದು, ಸೇತುವೆಗಳ ನಿರ್ಮಾಣದ ವಿಷಯದಲ್ಲಿಯೂ ಆದ್ಯತೆಯನ್ನು ಗುರುತಿಸಿ, ಅದರಂತೆ ದುರಸ್ತಿ, ಮರುನಿರ್ಮಾಣ ಮಾಡಬೇಕು ಎಂದು ಸೂಚಿಸಿದರು. ಈ ವೇಳೆ ಸಚಿವರಾದ ಗೋವಿಂದ ಕಾರಜೋಳ, ಶಶಿಕಲಾ ಜೊಲ್ಲೆ ಹಾಗೂ ಕೆಲ ಅಧಿಕಾರಿಗಳು ಉಪಸ್ಥಿತರಿದ್ದರು.

Articles You Might Like

Share This Article