Friday, April 4, 2025
Homeರಾಜಕೀಯ | Politicsಹೈಕಮಾಂಡ್‌ ಭೇಟಿಗೆ ನಾಳೆ ದೆಹಲಿಗೆ ಹಾರಲಿದ್ದಾರೆ ಸಿಎಂ, ಡಿಸಿಎಂ

ಹೈಕಮಾಂಡ್‌ ಭೇಟಿಗೆ ನಾಳೆ ದೆಹಲಿಗೆ ಹಾರಲಿದ್ದಾರೆ ಸಿಎಂ, ಡಿಸಿಎಂ

ಬೆಂಗಳೂರು,ಜು.29- ಇತ್ತೀಚಿನ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಾಳೆ ದೆಹಲಿಗೆ ಭೇಟಿ ನೀಡುತ್ತಿದ್ದಾರೆ.

ಈ ಬಗ್ಗೆ ಖಚಿತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಪಕ್ಷ ಹಾಗೂ ಸರ್ಕಾರದ ಬಗ್ಗೆ ಚರ್ಚೆ ನಡೆಸಲು ಹೈಕಮಾಂಡ್‌ ನಾಯಕರು ಆಹ್ವಾನ ನೀಡಿದ್ದಾರೆ. ನಾನು, ಉಪಮುಖ್ಯಮಂತ್ರಿಯವರು ದೆಹಲಿಗೆ ಭೇಟಿ ನೀಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಮುಡಾ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ ಮತ್ತು ಜೆಡಿಎಸ್‌‍ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ನಡೆಸುತ್ತಿದೆ. ಇದರ ಜೊತೆಗೆ ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟಿಸ್‌‍ ನೀಡಲು ಮುಂದಾಗಿದೆ. ಈ ಮೂಲಕ ಕರ್ನಾಟಕದಲ್ಲಿರುವ ಕಾಂಗ್ರೆಸ್‌‍ ಸರ್ಕಾರವನ್ನು ಅಸ್ಥಿರಗೊಳಿಸಲು ನಡೆಯುತ್ತಿರುವ ಹುನ್ನಾರ ಎಂಬ ಟೀಕೆಗಳು ಕೇಳಿಬಂದಿವೆ.

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌‍ ಹೈಕಮಾಂಡ್‌ ರಾಜ್ಯ ನಾಯಕರ ಜೊತೆ ಚರ್ಚೆ ನಡೆಸಲು ಮುಂದಾಗಿದೆ. ಒಂದು ವೇಳೆ ಜಾರಿ ನಿರ್ದೇಶನಾಲಯ ನೋಟಿಸ್‌‍ ನೀಡಿದರೆ ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ರಣನೀತಿ ರೂಪಿಸುವ ಸಲುವಾಗಿ ಹೈಕಮಾಂಡ್‌ ಸಮಾಲೋಚನೆ ನಡೆಸಲಿದೆ ಎಂದು ತಿಳಿದುಬಂದಿದೆ.

ಈಗಾಗಲೇ ಜಾರ್ಖಂಡ್‌, ದೆಹಲಿಯ ಮುಖ್ಯಮಂತ್ರಿಗಳನ್ನು ಇ.ಡಿ. ಬಳಸಿಕೊಂಡು ಕೇಂದ್ರ ಸರ್ಕಾರ ಇಕ್ಕಟ್ಟಿಗೆ ಸಿಲುಕಿಸಿದೆ. ಈಗ ಕಾಂಗ್ರೆಸ್‌‍ ಆಡಳಿತವಿರುವ ಕರ್ನಾಟಕದಲ್ಲಿ ಇದೇ ತಂತ್ರವನ್ನು ನಡೆಸಲು ಮುಂದಾಗಿದೆ.

ಇದಕ್ಕೆ ತಿರುಗೇಟು ನೀಡುವ ನಿಟ್ಟಿನಲ್ಲಿ ಯಾವ ರೀತಿಯ ಕಾರ್ಯತಂತ್ರಗಳನ್ನು ಅನುಸರಿಸಬೇಕು?, ಪಕ್ಷದಲ್ಲಿ ಒಗ್ಗಟ್ಟನ್ನು ಯಾವ ರೀತಿ ಕಾಯ್ದುಕೊಳ್ಳಬೇಕು? ಎಂಬುದರ ಬಗ್ಗೆಯೂ ಹೈಕಮಾಂಡ್‌ ಸೂಚನೆ ನೀಡಲಿದೆ ಎಂದು ತಿಳಿದುಬಂದಿದೆ.

ಬಿಜೆಪಿ ಮತ್ತು ಜೆಡಿಎಸ್‌‍ನ ಕೆಲ ನಾಯಕರು ಡಿಸೆಂಬರ್‌ ವೇಳೆಗೆ ಕಾಂಗ್ರೆಸ್‌‍ ಸರ್ಕಾರ ಪತನವಾಗಲಿದೆ. ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ವದಂತಿಗಳು ತೆರೆಮರೆಯಲ್ಲಿ ಹರಿದಾಡುತ್ತಿವೆ. ಈ ಕುರಿತು ಕೆಲವು ಕಾರ್ಯಾಚರಣೆಗಳು ಸದ್ದಿಲ್ಲದೆ ನಡೆಯುತ್ತಿರುವ ಮುನ್ಸೂಚನೆಯೂ ದೊರೆತಿದೆ.

ಈ ಹಿನ್ನೆಲೆಯಲ್ಲಿ ಅನುಸರಿಸಬೇಕಾದ ಎಚ್ಚರಿಕೆ ಕ್ರಮಗಳ ಬಗ್ಗೆ ಹೈಕಮಾಂಡ್‌ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಜೊತೆ ಚರ್ಚೆ ನಡೆಸಲಿದೆ. ಎರಡು ದಿನಗಳ ಭೇಟಿಗಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ನಾಳೆ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳುತ್ತಿದ್ದಾರೆ.

RELATED ARTICLES

Latest News