ಬೆಂಗಳೂರು,ಜು.13- ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆಗಿಳಿಯುವ ಸಾಧ್ಯತೆಗಳಿವೆ. ಕೋಲಾರ ಪ್ರತಿನಿಧಿಸುತ್ತಿದ್ದ ಮಾಜಿ ಸಚಿವ ಶ್ರೀನಿವಾಸ್ ಗೌಡ ಅವರನ್ನು ಇತ್ತೀಚೆಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿದ ಆರೋಪದ ಮೇಲೆ ಜೆಡಿಎಸ್‍ನಿಂದ ಉಚ್ಛಾಟಿಸಲಾಗಿದೆ.
ಶ್ರೀನಿವಾಸ್ ಗೌಡ ಕೂಡ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಲು ಉತ್ಸುಕರಾಗಿದ್ದಾರೆ. ಹೀಗಾಗಿ ಕೋಲಾರ ಕ್ಷೇತ್ರದಲ್ಲಿ ಜೆಡಿಎಸ್‍ನಿಂದ ಇಬ್ರಾಹಿಂ ಅವರನ್ನು ಕಣಕ್ಕಿಳಿಸುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಇಬ್ರಾಹಿಂ ಕೂಡ ಕೋಲಾರದಲ್ಲಿ ಪಕ್ಷ ಸಂಘಟನೆಗೆ ಮುಂದಾಗಿದ್ದು, ಚುನಾವಣೆ ಸಿದ್ದತೆಯನ್ನು ಆರಂಭಿಸಿದ್ದಾರೆ. ಕೋಲಾರ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರು, ಮುಖಂಡರನ್ನು ಜೆಡಿಎಸ್‍ಗೆ ಸೇರ್ಪಡೆ ಮಾಡಿಕೊಳ್ಳುತ್ತಿದ್ದಾರೆ. ಆ ಮೂಲಕ ಕೋಲಾರದಲ್ಲಿ ಜೆಡಿಎಸ್ ಬಲವರ್ಧನೆಗೆ ಮುಂದಾಗಿದ್ದಾರೆ.
ಕೇಂದ್ರದ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ಕಾಂಗ್ರೆಸ್ ನಾಯಕರ ವಿರುದ್ದ ಮುನಿಸಿಕೊಂಡಿದ್ದು, ಜೆಡಿಎಸ್‍ನತ್ತ ಮುಖ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಒಂದು ಸುತ್ತಿನ ಮಾತುಕತೆಯನ್ನು ನಡೆಸಿದ್ದಾರೆ.
ಮಾಜಿ ವಿಧಾನಸಭಾಧ್ಯಕ್ಷ ರಮೇಶ್‍ಕುಮಾರ್ ವಿರುದ್ಧ ಮುನಿಯಪ್ಪ ಅವರು ಪದೇ ಪದೇ ಆರೋಪ ಮಾಡುತ್ತಲೇ ಬಂದಿದ್ದಾರೆ.
ಹಾಗೊಂದು ವೇಳೆ ಮುನಿಯಪ್ಪ ಅವರು ಜೆಡಿಎಸ್‍ಗೆ ಬಂದಿದ್ದೇ ಆದರೆ ಪಕ್ಷ ಮತ್ತಷ್ಟು ಬಲಗೊಳ್ಳುತ್ತದೆ ಎಂಬ ವಿಶ್ವಾಸದಲ್ಲಿ ಜೆಡಿಎಸ್ ನಾಯಕರಿದ್ದಾರೆ.
ಕೋಲಾರ ಕ್ಷೇತ್ರವನ್ನು ಉಳಿಸಿಕೊಳ್ಳುವ ಉದ್ದೇಶದಿಂದ ಪ್ರಬಲವಾದ ಅಭ್ಯರ್ಥಿಯನ್ನೇ ಕಣಕ್ಕಿಳಿಸಲು ಜೆಡಿಎಸ್ ಉದ್ದೇಶಿಸಿದೆ. ಇಬ್ರಾಹಿಂ ಅವರು ವಿಧಾನಪರಿಷತ್ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿ ಜೆಡಿಎಸ್‍ಗೆ ಸೇರ್ಪಡೆಯಾಗಿದ್ದಾರೆ.
ಅವರಿಗೆ ರಾಜ್ಯಾಧ್ಯಕ್ಷ ಹುದ್ದೆಯನ್ನು ನೀಡಿದ್ದರೂ ಮುಂಬರುವ ಚುನಾವಣೆಯಲ್ಲಿ ಸ್ರ್ಪಸುವ ಅವಕಾಶ ನೀಡಲು ತೀರ್ಮಾನಿಸಲಾಗಿದೆ. ಹೀಗಾಗಿ ಕೋಲಾರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಇಬ್ರಾಹಿಂ ಸ್ರ್ಪಸುವ ಸಾಧ್ಯತೆಗಳು ಹೆಚ್ಚಾಗಿವೆ.