ರಾಹುಲ್‍ ಜೊತೆ ಸಿಎಂ ಕುಮಾರಸ್ವಾಮಿ ಮಹತ್ವದ ಮಾತುಕತೆ

Spread the love

Rahul-Kumaraswamy--01

ನವದೆಹಲಿ, ಜೂ.18-ಬೂದಿ ಮುಚ್ಚಿದ ಕೆಂಡದಂತಿರುವ ಬಂಡಾಯ ಶಮನಗೊಳಿಸಲು ಮತ್ತೊಂದು ಹಂತದ ಸಂಪುಟ ವಿಸ್ತರಣೆ, ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕ, ಬಜೆಟ್ ಮಂಡನೆ ವಿಷಯದ ಬಗ್ಗೆ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರನ್ನು ನದದೆಹಲಿಯಲ್ಲಿಂದು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದರು.ರಾಜ್ಯದಲ್ಲಿ ಸುಭದ್ರ ಸಮ್ಮಿಶ್ರ ಸರ್ಕಾರ ನಡೆಸುವ ಸಂಬಂಧ ಪರಸ್ಪರ ಅನುಸರಿಸಬೇಕಾದ ಹಲವು ಕ್ರಮಗಳ ಬಗ್ಗೆ ಮಾಹಿತಿ ವಿನಿಮಯ ಮಾಡಿಕೊಂಡರು. ಸಂಪುಟ ವಿಸ್ತರಣೆಯ ಸಂಬಂಧವೂ ಕೂಡ ಗಂಭೀರ ಚರ್ಚೆ ನಡೆಸಿದರು. ಅಲ್ಲದೆ, ಮತ್ತೆ ಸಂಪುಟ ವಿಸ್ತರಣೆ ಮಾಡಿದರೆ ಎದುರಾಗಬಹುದಾದ ಸಮಸ್ಯೆಗಳ ಬಗ್ಗೆ ರಾಹುಲ್‍ಗಾಂಧಿ ಅವರ ಗಮನ ಸೆಳೆದಿದ್ದಾರೆ.

ಸಂಪುಟ ವಿಸ್ತರಣೆಯಾಗಿ ಎರಡು ವಾರ ಕಳೆದರೂ ತಣ್ಣಗಾಗದ ಭಿನ್ನಮತ ಪದೇ ಪದೇ ಸರ್ಕಾರಕ್ಕೆ ಮುಜುಗರ ತರುವ ರೀತಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಉಭಯ ನಾಯಕರು ಸಮಾಲೋಚನೆ ನಡೆಸಿದ್ದಾರೆ. ಅಲ್ಲದೆ, ನಿಗಮ ಮಂಡಳಿಗಳಿಗೆ ನೇಮಕ ಮಾಡುವ ಬಗ್ಗೆಯೂ ಕೂಡ ಚರ್ಚಿಸಿದ್ದಾರೆ.

ಬಜೆಟ್ ಮಂಡನೆ ಸಂಬಂಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪೂರಕ ಬಜೆಟ್ ಮಂಡಿಸಿದರೆ ಸಾಕು ಎಂದು ನೀಡಿರುವ ಹೇಳಿಕೆ ಬಗ್ಗೆಯೂ ಕೂಡ ಪ್ರಸ್ತಾಪಿಸಿದ್ದಾರೆ. ಹೊಸ ಸರ್ಕಾರ ಅಸ್ಥಿತ್ವಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಉಭಯ ಪಕ್ಷಗಳ ಪ್ರಣಾಳಿಕೆ ಅಂಶಗಳನ್ನೊಳಗೊಂಡ ಹೊಸದಾದ ಪೂರ್ಣ ಪ್ರಮಾಣದ ಬಜೆಟ್ ಮಂಡಿಸುವ ಅವಶ್ಯಕತೆ ಇದೆ ಎಂಬುದನ್ನು ರಾಹುಲ್‍ಗಾಂಧಿ ಗಮನಕ್ಕೆ ತಂದಿದ್ದಾರೆ. ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದಲ್ಲಿರುವ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರಲ್ಲಿ ಮನವಿ ಮಾಡಲಾಗಿದೆ ಎಂದು ತಿಳಿಸಿದರು. ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ಇರುವ ಕೆಲವು ಸಮಸ್ಯೆಗಳ ನಿವಾರಣೆಗೆ ರಾಹುಲ್‍ಗಾಂಧಿ ಅವರಲ್ಲಿ ಮನವಿ ಮಾಡಿದ್ದು, ಅವರದೇ ಪಕ್ಷದಲ್ಲಿ ಇರುವ ಸಮಸ್ಯೆಗಳಿಗೆ ಆಂತರಿಕವಾಗಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

ಸೌಹಾರ್ದಯುತ ಭೇಟಿ ಇದಾಗಿದ್ದು, ಹಲವು ಮಹತ್ವದ ವಿಚಾರಗಳ ಬಗ್ಗೆಯೂ ಚರ್ಚೆ ಮಾಡಲಾಯಿತು. ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವಿದ್ದು, ಮುಂದಿನ ದಿನಗಳಲ್ಲಿ ಯಾವ ರೀತಿಯಲ್ಲಿ ಒಗ್ಗೂಡಿ ಹೋಗಬೇಕು, ರಾಜ್ಯದ ಅಭಿವೃದ್ಧಿಗೆ ರಾಹುಲ್‍ಗಾಂಧಿ ಅವರ ಭಾವನೆಗಳೇನು ಎಂಬುದರ ಬಗ್ಗೆ ಸಮಾಲೋಚನೆ ನಡೆಸಲಾಯಿತು.

ರಾಜ್ಯದ ಅಭಿವೃದ್ಧಿಗೆ ಪೂರಕವಾದ ಸಲಹೆಗಳನ್ನು ರಾಹುಲ್‍ಗಾಂಧಿ ನೀಡಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿಗೆ ಪೂರಕವಾದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವುದರ ಜತೆಗೆ ಸುಭದ್ರ ಸರ್ಕಾರ ನಡೆಸಬೇಕು ಎಂಬ ಉದ್ದೇಶದಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಆ ಉದ್ದೇಶ ಈಡೇರಲು ಸಂಪೂರ್ಣ ಸಹಕಾರ ನೀಡುವ ಭರವಸೆಯನ್ನು ಸಹ ರಾಹುಲ್‍ಗಾಂಧಿ ನೀಡಿದ್ದಾರೆ. ಹಲವು ಮಹತ್ವದ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಲಾಗಿದೆ. ನಿಗಮ ಮಂಡಳಿ ನೇಮಕದ ವಿಚಾರ ಪ್ರಸ್ತಾಪ ಮಾಡಿದ್ದರೂ ಈಗಾಗಲೇ ಸಮನ್ವಯ ಸಮಿತಿ ಸಭೆಯಲ್ಲಿ ಆ ವಿಚಾರ ಚರ್ಚೆಯಾಗಿದೆ. ಸಮನ್ವಯ ಸಮಿತಿ ಸಭೆಯಲ್ಲೇ ಆ ಬಗ್ಗೆ ನಿರ್ಣಯಗಳನ್ನು ಕೈಗೊಳ್ಳಲಾಗುತ್ತದೆ ಎಂದು ಹೇಳಿದರು. ಜೆಡಿಎಸ್ ರಾಷ್ಟ್ರೀಯ ಮಹಾಪ್ರಧಾನಕಾರ್ಯದರ್ಶಿ ಡ್ಯಾನಿಶ್‍ಆಲಿ, ಎಐಸಿಸಿ ಪ್ರಧಾನಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಭೇಟಿ ಸಂದರ್ಭದಲ್ಲಿ ಹಾಜರಿದ್ದರು.

Facebook Comments

Sri Raghav

Admin