Thursday, December 5, 2024
Homeರಾಜ್ಯಪ.ಜಾತಿ, ಪ.ಪಂಗಡಕ್ಕೆ ಮೀಸಲಿಟ್ಟ ಹಣವನ್ನು ಆಯಾ ವರ್ಷವೇ ಖರ್ಚು ಮಾಡುವಂತೆ ಸಿಎಂ ಕಟ್ಟಪ್ಪಣೆ

ಪ.ಜಾತಿ, ಪ.ಪಂಗಡಕ್ಕೆ ಮೀಸಲಿಟ್ಟ ಹಣವನ್ನು ಆಯಾ ವರ್ಷವೇ ಖರ್ಚು ಮಾಡುವಂತೆ ಸಿಎಂ ಕಟ್ಟಪ್ಪಣೆ

ಬೆಂಗಳೂರು ಜು.5- ಎಸ್‌‍ಸಿಎಸ್‌‍ಪಿ ಮತ್ತು ಟಿಎಸ್ಪಿ ಅಡಿ ನಿಗದಿ ಮಾಡಲಾದ ಅನುದಾನ ಆಯಾ ವರ್ಷವೇ ಖರ್ಚು ಮಾಡಬೇಕು. ನಿರ್ಲಕ್ಷ್ಯ ತೋರಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ರಾಜ್ಯ ಅಭಿವೃದ್ಧಿ ಪರಿಷತ್‌ ಸಭೆಯಲ್ಲಿ ಮಾತನಾಡಿದ ಅವರು, ನಿಗದಿ ಪಡಿಸಿದ ಅನುದಾನ ಆಯಾಯ ವರ್ಷವೇ ಶೇ.100 ರಷ್ಟು ಖರ್ಚು ಮಾಡಬೇಕು ಎನ್ನುವ ಕಾನೂನು ಪಾಲನೆ ಮಾಡಲಾಗಿದೆ. ಇಲ್ಲವಾದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವ ಕಾನೂನು ರೂಪಿಸಲಾಗಿದೆ. ಈ ನಿಯಮವನ್ನು ಯಾರು ನಿರ್ಲಕ್ಷ್ಯಿಸಿದರೂ ಕ್ರಮ ತೆಗೆದುಕೊಳ್ಳಲಾಗುವುದು, ನಿರ್ಲಕ್ಷ್ಯಕ್ಕೆ ಕ್ಷಮೆ ಇಲ್ಲ ಎಂದು ಎಚ್ಚರಿಸಿದರು.

ಇಡೀ ದೇಶದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಅನುದಾನ ಮೀಸಲಿಡಲು ಎಸ್‌‍ಸಿಎಸ್‌‍ಪಿ ಮತ್ತು ಟಿಎಸ್‌‍ಪಿ ಕಾಯ್ದೆ ಮಾಡಿರುವುದು ನಮ ಸರ್ಕಾರ ಮಾತ್ರ. ಇದರಿಂದ 2024-25 ನೇ ಸಾಲಿಗೆ ಎಸ್‌‍.ಸಿ.ಎಸ್‌‍.ಪಿ., ಟಿಎಸ್‌‍.ಪಿ. ಅಡಿ ಒಟ್ಟಾರೆ. ರೂ.39,121.46 ಕೋಟಿ ಅನುದಾನ ಒದಗಿಸಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಇದು ಶೇ.11ರಷ್ಟು ಅಂದರೆ ರೂ.3897 ಕೋಟಿ ಹೆಚ್ಚಳವಾಗಿದೆ. ಎಸ್‌‍.ಸಿ.ಎಸ್‌‍.ಪಿ. ಅಡಿ 27,673.96 ಕೋಟಿ ರೂ. ಹಾಗೂ ಟಿ.ಎಸ್‌‍.ಪಿ. ಅಡಿ 11447.50 ಕೋಟಿ ರೂ. ಒದಗಿಸಲಾಗಿದೆ ಎಂದು ತಿಳಿಸಿದರು.

ಈ ವರ್ಷದ ಕ್ರಿಯಾ ಯೋಜನೆಯಲ್ಲಿ ಮುಖ್ಯವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ 8,480 ಕೋಟಿ ರೂ., ಇಂಧನ ಇಲಾಖೆಗೆ 5026 ಕೋಟಿ, ಸಮಾಜ ಕಲ್ಯಾಣ ಇಲಾಖೆಗೆ 4174 ಕೋಟಿ ರೂ., ಕಂದಾಯ ಇಲಾಖೆಗೆ 3403 ಕೋಟಿ ರೂ. , ಗ್ರಾಮೀಣಾಭಿವೃದ್ಧಿ ಇಲಾಖೆಗೆ 3163 ಕೋಟಿ ರೂ. ಒದಗಿಸಲಾಗಿದೆ. ಕಳೆದ ವರ್ಷ 35221.84 ಕೋಟಿ ರೂ. ಆಯವ್ಯಯ ಹಂಚಿಕೆಗೆ ಎದುರಾಗಿ ಶೇ. 97.23 ರಷ್ಟು ಹಣ ಬಿಡುಗಡೆಗೆಯಾಗಿದ್ದು, ಅದರಲ್ಲಿ ಶೇ. 99.64 ರಷ್ಟು ಸಾಧನೆಯಾಗಿದೆ. ಈ ಅನುದಾನ ಯಾವ ಕಾರಣಕ್ಕೂ ಬಳಕೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ತಾಕೀತು ಮಾಡಿದರು.

ಉಳಿಕೆ ಹಣ ವ್ಯಯವಾಗಬಾರದು. ಅದೇ ವರ್ಷ ವೆಚ್ಚವಾಗಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ನಿಗಮಗಳಲ್ಲಿ ಹಣ ವೆಚ್ಚವಾಗಿಲ್ಲ. ಇದಕ್ಕೆ ಶಾಸಕರು ಪಟ್ಟಿ ಕೊಡಲಿಲ್ಲ ಎಂಬ ಕಾರಣ ನೀಡುತ್ತಾರೆ. ನಿಗಮಗಳ ಅಧ್ಯಕ್ಷರು ಹಾಗೂ ಸಂಬಂಧಿಸಿದ ಸಚಿವರು, ಶಾಸಕರು ಫಲಾನುಭವಿಗಳ ಪಟ್ಟಿ ಒದಗಿಸುವಂತೆ ಮನವೊಲಿಸಬೇಕು. ಈ ಯೋಜನೆಗಳ ಮೌಲ್ಯಮಾಪನದಿಂದ ಶೇ. 65 ರಷ್ಟು ಉಪಯೋಗವಾಗಿರುವುದು ಕಂಡು ಬರುತ್ತದೆ. ಸೆಕ್ಷನ್‌ 7 (ಡಿ) ಕೈಬಿಡಲಾಗಿದೆ. ಇದರಿಂದಾಗಿ ಈ ಯೋಜನೆಯ ಸಂಪೂರ್ಣ ವೆಚ್ಚ ಈ ಸಮುದಾಯದವರಿಗೇ ಬಳಕೆಯಾಗಲಿದೆ ಎಂದು ವಿವರಿಸಿದರು.

ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಮಾಜ ಕಲ್ಯಾಣ ಸಚಿವ ಡಾ.ಹೆಚ್‌.ಸಿ. ಮಹದೇವಪ್ಪ, ಸಚಿವರಾದ ಹೆಚ್‌.ಕೆ.ಪಾಟೀಲ್‌‍, ಪ್ರಿಯಾಂಕ್‌ ಖರ್ಗೆ, ಡಾ. ಎಂ.ಸಿ. ಸುಧಾಕರ್‌, ಶಾಸಕರುಗಳಾದ ಪ್ರಸಾದ್‌ ಅಬ್ಬಯ್ಯ, ಬಸಂತಪ್ಪ, ಶ್ರೀನಿವಾಸ್‌‍, ಪಿ.ಎಂ.ನರೇಂದ್ರಸ್ವಾಮಿ, ಕೃಷ್ಣಾನಾಯಕ್‌ , ವಿಧಾನ ಪರಿಷತ್‌ ಸದಸ್ಯರಾದ ಪ್ರಕಾಶ್‌ ರಾಥೋಡ್‌, ಸಂಸದರಾದ ಸುನಿಲ್‌ ಬೋಸ್‌‍ ಪ್ರಕಾಶ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಡಾ. ಶಾಲಿನಿ ರಜನೀಶ್‌ ಗೋಯೆಲ್‌, ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಪಿ. ಮಣಿವಣ್ಣನ್‌ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

RELATED ARTICLES

Latest News