ಬೀದರ್,ಮಾ.7- ಲೋಕಸಭಾ ಚುನಾವಣೆಗೆ ಇನ್ನೆರಡು ಮೂರು ದಿನಗಳಲ್ಲಿ ಅಭ್ಯರ್ಥಿಗಳನ್ನು ಘೋಷಿಸುವ ಸಾಧ್ಯತೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಲ್ಲಿನ ಬಸವಕಲ್ಯಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಪಟ್ಟಂತೆ ದೆಹಲಿಯಲ್ಲಿಂದು ಕೇಂದ್ರ ಚುನಾವಣಾ ಸಮಿತಿಯ ಸಭೆ ನಡೆಯುತ್ತಿದೆ. ಅಲ್ಲಿ ಚರ್ಚೆಯಾಗುವ ನಿರೀಕ್ಷೆಯಿದೆ. ಇನ್ನೆರಡು ಮೂರು ದಿನಗಳಲ್ಲಿ ಪಟ್ಟಿಯನ್ನು ಪ್ರಕಟಿಸುವ ಅವಕಾಶವಿದೆ ಎಂದರು.
ಬೆಂಗಳೂರು ಸ್ಪೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳನ್ನು ಬಂಧಿಸಲು ರಾಷ್ಟ್ರೀಯ ತನಿಖಾ ಸಂಸ್ಥೆಗಳು ಮತ್ತು ರಾಜ್ಯದ ಸಿಸಿಬಿ ಪೊಲೀಸರು ಜಂಟಿಯಾಗಿ ಹುಡುಕಾಟ ನಡೆಸುತ್ತಿದ್ದಾರೆ. ಮಹತ್ವದ ಸುಳಿವುಗಳು ದೊರೆತಿವೆ. ತನಿಖೆ ಜಾರಿಯಲ್ಲಿರುವುದರಿಂದ ಈ ಹಂತದಲ್ಲಿ ಹೆಚ್ಚಿನ ಮಾಹಿತಿಯನ್ನು ನೀಡಲು ಸಾಧ್ಯವಿಲ್ಲ ಎಂದು ನುಡಿದರು.
ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಕೂಗಿಗೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿದ ಅವರು, ಸಚಿವ ಎಚ್.ಸಿ.ಮಹದೇವಪ್ಪ, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿದ್ದನ್ನು ಪುನರುಚ್ಚರಿಸಿದ್ದಾರೆ ಎಂದರು.
ಬಸವ ಕಲ್ಯಾಣ ಅಭಿವೃದ್ಧಿಗೆ 50 ಕೋಟಿ ರೂ.ಗಳನ್ನು ಜಿಲ್ಲಾಕಾರಿಗಳಿಗೆ ಬಿಡುಗಡೆ ಮಾಡಲಾಗಿದೆ. ಅಗತ್ಯವಿದ್ದರೆ ಇನ್ನೂ ಹೆಚ್ಚಿನ ಹಣ ಒದಗಿಸುವುದಾಗಿ ತಿಳಿಸಿದರು.