ಬೆಂಗಳೂರು, ನ.7-ಪ್ರತಿ ಟನ್ ಕಬ್ಬು ಖರೀದಿಗೆ 3500 ರೂ. ನಿಗದಿಪಡಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕಬ್ಬು ಬೆಳಗಾರರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಸ್ಯೆ ಪರಿಹಾರಕ್ಕೆ ಮುಂದಾಗಿದ್ದಾರೆ. ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಪರಿಹರಿಸುವ ಕುರಿತಂತೆ ಮುಖ್ಯಮಂತ್ರಿಗಳು ವಿಧಾನಸೌಧದಲ್ಲಿ ರಾಜ್ಯದ ಲೋಕಸಭೆ ಮತ್ತು ರಾಜ್ಯಸಭಾ ಸದಸ್ಯರೊಂದಿಗೆ ಸಭೆ ನಡೆಸಿ ಸಲಹೆ ಸೂಚನೆಗಳನ್ನು ಆಲಿಸಿದ್ದಾರೆ. ಬಳಿಕ ಸಕ್ಕರೆ ಕಾರ್ಖಾನೆಗಳ ಅಧ್ಯಕ್ಷರ ಜೊತೆ ಸಭೆ ನಡೆಸಿ ಅಭಿಪ್ರಾಯ ಪಡೆದಿದ್ದಾರೆ.
ಕೇಂದ್ರ ಸರ್ಕಾರ ನಿಗದಿಪಡಿಸಿರುವ ಎಫ್ಆರ್ಪಿ ದರ ನೀಡಬೇಕು ಎಂದು ಪಟ್ಟು ಹಿಡಿದು ರೈತರು ಒಂದೆಡೆ ಪ್ರತಿಭಟನೆ ನಡೆಸುತ್ತಿರುವುದರಿಂದ ಸಮಸ್ಯೆ ಜಟಿಲವಾಗಿದೆ. ಈ ನಡುವೆ ರಾಜ್ಯ ಸರ್ಕಾರ ಪರಿಹಾರ ಕ್ರಮಗಳ ಕಡೆ ಗಮನ ಹರಿಸಿದೆ. ರೈತರೊಂದಿಗೆ ಇದುವರೆಗೆ ಸರ್ಕಾರ ನಡೆಸಿದ ಮಾತುಕತೆಗಳು ಫಲಪ್ರದವಾಗಿಲ್ಲ.
ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ, ಬೇಡಿಕೆಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದ್ದು, ಮಾತುಕತೆ ಮೂಲಕ ಪರಿಹಾರ ಸೂತ್ರ ಕಂಡುಕೊಳ್ಳಲು ಸರ್ಕಾರ ಮುಂದಾಗಿದೆ. ಈ ನಡುವೆ ಸಮಸ್ಯೆ ಪರಿಹಾರಕ್ಕೆ ಕೇಂದ್ರ ಸರ್ಕಾರವೇ ಗಮನ ಹರಿಸಬೇಕು. ಎಫ್ಆರ್ಪಿ ದರ ನಿಗದಿ ಪಡಿಸುವ ಕೇಂದ್ರದ ಪಾತ್ರ ದೊಡ್ಡದಿದೆ. ರಾಜ್ಯದ ಪಾತ್ರ ಅತ್ಯಲ್ಪ ಎಂದೂ ಮುಖ್ಯಮಂತ್ರಿ ಹೇಳಿದ್ದಾರೆ.
ಅಲ್ಲದೆ, ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆ 9 ದಿನಕ್ಕೆ ಕಾಲಿಟ್ಟಿದ್ದು, ಪ್ರತಿಪಕ್ಷಗಳು ರೈತರಿಗೆ ಬೆಂಬಲ ವ್ಯಕ್ತಪಡಿಸಿವೆ. ಜೊತೆಗೆ ರಾಜ್ಯ ಸರ್ಕಾರದಿಂದಲೂ ಪ್ರತಿ ಟನ್ ಕಬ್ಬಿಗೆ 500 ರೂ.ವರೆಗೆ ಪ್ರೋತ್ಸಾಹಧನ ನೀಡಬೇಕು ಎಂದು ಆಗ್ರಹಿಸಿವೆ. ಈ ಹಿನ್ನೆಲೆಯಲ್ಲಿ ಕಬ್ಬು ಬೆಳೆಗಾರರ ಹೋರಾಟದ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.
