ಬೆಂಗಳೂರು,ಫೆ.20- ಹೊಸ ಪಿಂಚಣಿ ಯೋಜನೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ಕಾಂಗ್ರೆಸ್ ಪ್ರಣಾಳಿಕೆಯನುಸಾರ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲು ಅಧ್ಯಯನ ಸಮಿತಿ ವರದಿ ಬಳಿಕ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ನಗರದ ಅರಮನೆ ಮೈದಾನದಲ್ಲಿ ನಡೆದ ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರ ಹಾಗೂ ಜಿಲ್ಲೆ, ತಾಲ್ಲೂಕು ಶಾಖೆಗಳ ನಿರ್ದೇಶಕರ ಪದಾಧಿಕಾರಿಗಳ ಸಮಾವೇಶದಲ್ಲಿ ಆನ್‌ಲೈನ್ ಮೂಲಕ ಮಾತನಾಡಿದ ಅವರು, 2006 ರ ಏಪ್ರಿಲ್ 1ರ ನಂತರ ನೇಮಕವಾಗಿರುವವರಿಗೆ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು ಎಂಬ ಸರ್ಕಾರಿ ನೌಕರರ ಬೇಡಿಕೆಯ ಸಾಧಕ-ಬಾಧಕಗಳ ಅಧ್ಯಯನಕ್ಕೆ ಸಮಿತಿಯನ್ನು ರಚಿಸಲಾಗಿದೆ. ಅದು ಕೊನೆಯ ಹಂತದ ಸಭೆ ನಡೆಸಿದೆ.
ವರದಿ ಬಂದ ಬಳಿಕ ಅಧಿಕಾರಿಗಳ ಜೊತೆ ಚರ್ಚಿಸಿ ಜಾರಿಗೊಳಿಸಲಾಗುವುದು ಎಂದು ಭರವಸೆ ನೀಡಿದರು. ಅದೇ ರೀತಿ 2015 ರಲ್ಲಿ ನಗದು ರಹಿತ ಜ್ಯೋತಿ ಸಂಜೀವಿನಿ ಯೋಜನೆಯನ್ನು 7 ಗಂಭೀರ ಕಾಯಿಲೆಗಳಿಗೆ ಅನುಷ್ಠಾನಕ್ಕೆ ತರಲಾಗಿದೆ. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ತಾಂತ್ರಿಕ ಕಾರಣಗಳಿಂದಾಗಿ ವಿಳಂಬವಾಗಿದ್ದು, ಶೀಘ್ರವಾಗಿ ಅದನ್ನು ಅನುಷ್ಠಾನಕ್ಕೆ ತರಲಾಗುವುದು ಎಂದು ತಿಳಿಸಿದರು.
ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಸದಸ್ಯರಿಗೆ 1 ಕೋಟಿ ರೂ. ಸಾಲಸೌಲಭ್ಯ ಯೋಜನೆಯನ್ನು ಜಾರಿಗೊಳಿಸಲು ಸಚಿವ ಸಂಪುಟದ ಅನುಮೋದನೆ ಪಡೆಯಲಾಗಿದ್ದು, ಶೀಘ್ರವೇ ಸರ್ಕಾರಿ ಆದೇಶ ಹೊರಡಿಸಲಾಗುವುದು ಎಂದರು.
ಸರ್ಕಾರಿ ನೌಕರರು ಸಾರ್ವಜನಿಕರಿಗೆ ಉತ್ತಮ ಸೇವೆ ಸಲ್ಲಿಸಬೇಕು. ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಲೋಕಾಯುಕ್ತ ಬಿ.ಎಸ್.ಪಾಟೀಲ್, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ, ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.