ಬೆಂಗಳೂರು,ಜ.25- ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‍ರವರಿಗೆ ಕಾಂಗ್ರೆಸ್‍ನಲ್ಲಿ ಯಾವುದೇ ಅನ್ಯಾಯವಾಗಿರಲಿಲ್ಲ, ಗೌರವ ಯುತವಾಗಿ ನಡೆಸಿಕೊಳ್ಳಲಾಗಿತ್ತು. ಆದರೂ ಅವರು ಮರಳಿ ಬಿಜೆಪಿಗೆ ಹೋಗಿದ್ದೇಕೆ ಎಂದು ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಡಿಕೇರಿಯಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗರು ಟಿಕೆಟ್ ನೀಡಲಿಲ್ಲ ಎಂಬ ಕಾರಣಕ್ಕೆ ಕಾಂಗ್ರೆಸ್‍ಗೆ ಬಂದಿದ್ದರು. ಪಕ್ಷ ಅವರಿಗೆ ಟಿಕೆಟ್ ನೀಡಿತ್ತು. ಸೋಲು ಕಂಡ ಬಳಿಕವೂ ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿದ್ದೆವು ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿಯಾಗಿದ್ದ ಅವರನ್ನು ಗೌರವಯುತವಾಗಿ ನಡೆಸಿಕೊಂಡಿದ್ದೆವು. ನಮ್ಮಲ್ಲಿ ಅವರಿಗೆ ಯಾವುದೇ ಅನ್ಯಾಯವಾಗಲೀ, ಅಪಮಾನವಾಗಲೀ ಆಗಿಲ್ಲ. ಬಿಜೆಪಿ ನನಗೆ ಅಪಮಾನ ಮಾಡಿದೆ. ಮತ್ತೆ ಆ ಪಕ್ಷಕ್ಕೆ ವಾಪಸ್ ಹೋಗುವುದಿಲ್ಲ ಎಂದು ತಮ್ಮ ಜೊತೆ ಜಗದೀಶ್ ಶೆಟ್ಟರ್ ಹೇಳಿದ್ದರು. ಅನಂತರ ಯಾವ ಬೆಳವಣಿಗೆಗಳಾಗಿವೆ ಎಂದು ನನಗೆ ಗೊತ್ತಿಲ್ಲ ಎಂದರು.
ಕ್ಷಿಪ್ರ ಬೆಳವಣಿಗೆಯಲ್ಲಿ ಮತ್ತೆ ಬಿಜೆಪಿಗೆ ವಾಪಸ್ಸಾದ ಜಗದೀಶ್ ಶೆಟ್ಟರ್
ಕೆಲ ದಿನಗಳ ಹಿಂದೆ ಕಾಂಗ್ರೆಸ್ ಕಚೇರಿಯಲ್ಲಿ ನಡೆದಿದ್ದ ಪಕ್ಷದ ಸಭೆಯಲ್ಲಿ ಜಗದೀಶ್ ಶೆಟ್ಟರ್ ಭಾಗವಹಿಸಿದ್ದರು. ಆ ವೇಳೆ ತಮ್ಮೊಂದಿಗೆ ಮಾತನಾಡಿದ್ದರು ಎಂದು ಹೇಳಿದರು. ಕೊಡಗಿನಲ್ಲಿ ಕಾಫಿ ಬೆಳೆಗಾರರಿಗೆ ವಿದ್ಯುತ್ ರಿಯಾಯಿತಿ ಸೇರಿದಂತೆ ಹಲವು ಸೌಲಭ್ಯಗಳ ಬಗ್ಗೆ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.
ಈ ಹಿಂದೆ ಬಿಜೆಪಿ ಆಡಳಿತದಲ್ಲಿದ್ದಾಗ ಶಾಸಕರಾಗಿದ್ದವರು ಜನರ ಬೇಡಿಕೆಗಳಿಗೆ ಸ್ಪಂದಿಸಲಿಲ್ಲ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಮನವಿ ಮಾಡಿದ್ದೆವು. ಅದಕ್ಕೆ ಜನ ಸ್ಪಂದಿಸಿದ್ದಾರೆ ಎಂದು ಹೇಳಿದರು. ನಿಗಮ ಮಂಡಳಿ ನೇಮಕಾತಿಯಲ್ಲಿ ಎಲ್ಲಾ ಸಚಿವರೂ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ. ಆದರೆ ಅಂತಿಮವಾಗಿ ಹೈಕಮಾಂಡ್ ಮತ್ತು ಪಕ್ಷದ ಅಧ್ಯಕ್ಷರು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು. ಲೋಕಸಭೆ ಚುನಾವಣೆಯಲ್ಲಿ ತಮ್ಮ ಪುತ್ರ ಯತೀಂದ್ರ ಸ್ರ್ಪಧಿಸುವುದಿಲ್ಲ ಎಂದು ಇದೇ ಸಂದರ್ಭದಲ್ಲಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.