ಬೆಂಗಳೂರು,ಸೆ.28- ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮೈಸೂರು ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿರುವ ಬೆನ್ನಲ್ಲೇ ಬಂಧನದ ಭೀತಿ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ಅವರು ಜಾಮೀನು ಅರ್ಜಿ ಸಲ್ಲಿಸಲು ಸಜ್ಜಾಗಿದ್ದಾರೆ.
ಸೋಮವಾರ ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಸಿದ್ದರಾಮಯ್ಯ ಪರ ವಕೀಲರು ನಿರೀಕ್ಷಣಾ ಜಾಮೀನು ಕೋರಿ ಮೇಲನವಿ ಅರ್ಜಿ ಸಲ್ಲಿಸಲಿದ್ದಾರೆ.
ಈ ಕುರಿತು ಅಡ್ವೋಕೇಟ್ ಜನರಲ್ ಶಶಿಕಿರನ್ ಶೆಟ್ಟಿ ಹಾಗೂ ಕಾನೂನು ಸಲಹೆಗಾರ ಪೊನ್ನಣ್ಣ ಅವರ ಜೊತೆ ಮಾತುಕತೆ ನಡೆಸಿದ್ದು, ಸೋಮವಾರ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಲಿದ್ದಾರೆ. ಈ ಮೊದಲು ಹೈಕೋರ್ಟ್ನಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಹಾಕಬೇಕೆಂಬ ಚಿಂತನೆಯಿತ್ತು. ಆದರೆ ಅಲ್ಲಿ ಅರ್ಜಿ ವಜಾಗೊಂಡರೆ ಸುಪ್ರೀಂಕೋರ್ಟ್ಗೆ ಹೋಗಬೇಕಾಗುತ್ತದೆ ಎಂಬ ಮುನ್ನೆಚ್ಚರಿಕೆ ಹಿನ್ನಲೆಯಲ್ಲಿ ಕೆಳಹಂತದ ನ್ಯಾಯಾಲಯದಿಂದಲೇ ಕಾನೂನು ಹೋರಾಟ ನಡೆಸಬೇಕೆಂದು ತಜ್ಞರು ಸಲಹೆ ಮಾಡಿದ್ದಾರೆ.
ಹೀಗಾಗಿ ಮೊದಲು ಸಿದ್ದರಾಮಯ್ಯ, ಪಾರ್ವತಿ, ಮಲ್ಲಿಕಾರ್ಜುನಸ್ವಾಮಿ ಹಾಗೂ ದೇವರಾಜ್ ಅವರುಗಳು ನಿರೀಕ್ಷಣಾ ಜಾಮೀನಿಗೆ ಅರ್ಜಿ ಹಾಕಲಿದ್ದಾರೆ. ಹೈಕೋರ್ಟ್ನ ಏಕಸದಸ್ಯ ಪೀಠದ ನ್ಯಾಯಮೂರ್ತಿ ನಾಗಪ್ರಸನ್ನ ಅವರು ಮುಡಾ ಪ್ರಕರಣ ಸಂಬಂಧ ತನಿಖೆಗೆ ಆದೇಶ ನೀಡಿದ್ದರು. ಇದಾದ ಮರುದಿನವೇ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಿಸಿ ಮೂರು ತಿಂಗಳೊಳಗೆ ವರದಿ ನೀಡುವಂತೆ ಆದೇಶ ನೀಡಿತ್ತು.
ನ್ಯಾಯಾಲಯದ ಸೂಚನೆಯಂತೆ ಮೈಸೂರು ಲೋಕಾಯುಕ್ತ ಎಸ್ಪಿ ಉದೇಶ್ ಅವರು ಶುಕ್ರವಾರ ಸಿದ್ದರಾಮಯ್ಯ ಸೇರಿದಂತೆ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿರುವ ನಾಲ್ವರ ವಿರುದ್ದ ಎಫ್ಐಆರ್ ದಾಖಲಿಸಿದ್ದಾರೆ. ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡುವ ಸಾಧ್ಯತೆ ಇರುವುದರಿಂದ ಜಾಮೀನು ಪಡೆಯಲು ಮುಂದಾಗಿದ್ದಾರೆ.