Friday, October 24, 2025
Homeರಾಜ್ಯನ್ಯಾಯಾಲಯಗಳ ತೀರ್ಪಿನ ಕುಂಟುನೆಪ ಹೇಳಿದರೆ ಸಹಿಸುವುದಿಲ್ಲ : ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ

ನ್ಯಾಯಾಲಯಗಳ ತೀರ್ಪಿನ ಕುಂಟುನೆಪ ಹೇಳಿದರೆ ಸಹಿಸುವುದಿಲ್ಲ : ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ

CM warns officials against making excuses for court decisions

ಬೆಂಗಳೂರು, ಅ.24- ಕೈಗಾರಿಕಾ ಸ್ನೇಹಿ ವಾತಾವರಣ ನಿರ್ಮಿಸುವ ಸಲುವಾಗಿ ಅಧಿಕಾರಿಗಳು ನ್ಯಾಯಾಲಯಗಳ ತೀರ್ಪಿನ ಕುಂಟು ನೆಪ ಹೇಳಿದರೆ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.

ವಿಧಾನಸೌಧ ಸಭಾಂಗಣದಲ್ಲಿ ನಡೆದ ಬಂಡವಾಳ ಹೂಡಿಕೆ ಆಕರ್ಷಣೆ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಬಂಡವಾಳ ಹೂಡಿಕೆದಾರ ಸ್ನೇಹಿ ವಾತಾವರಣವನ್ನು ಇನ್ನಷ್ಟು ಉತ್ತಮಪಡಿಸಬೇಕು. ಇದಕ್ಕಾಗಿ ಭೂ ಬಳಕೆ ಬದಲಾವಣೆ ಪ್ರಕ್ರಿಯೆ ಸೇರಿದಂತೆ ವಿವಿಧ ಎನ್‌ಒಸಿಗಳ ನೀಡಿಕೆಯ ಕಾಲಮಿತಿಯನ್ನು ಕಡಿಮೆ ಮಾಡಬೇಕು. ಕಾಲಮಿತಿಯನ್ನು ಕಡಿಮೆ ಮಾಡುವ ಬಗ್ಗೆ ವಿವರವಾದ ಪ್ರಸ್ತಾವನೆಯನ್ನು ಸಲ್ಲಿಸಬೇಕು. ಯಾವುದೇ ಕಾರಣಕ್ಕೂ ವಿಳಂಬಕ್ಕೆ ಅವಕಾಶ ನೀಡಬಾರದು ಎಂದು ಹೇಳಿದ್ದಾರೆ.

ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಅಗ್ನಿಶಾಮಕ ಇಲಾಖೆ ಅನುಮೋದನೆ ವಿಳಂಬವಾಗುತ್ತಿದ್ದು, ಇದನ್ನು ತ್ವರಿತಗೊಳಿಸಬೇಕು. ಇದಕ್ಕಾಗಿ ಮಂಡಳಿಯ ನಿಯಮಾವಳಿಯಲ್ಲಿ ಅಗತ್ಯ ಬದಲಾವಣೆಗಳನ್ನು ಮಾಡಬೇಕು ಎಂದು ಸಲಹೆ ನೀಡಿದ್ದಾರೆ.ಕೈಗಾರಿಕೆಗಳಿಗೆ ರಸ್ತೆ, ನೀರು, ವಿದ್ಯುತ್‌ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಒದಗಿಸುವ ಕುರಿತಾಗಿ ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಅವರು ಸೂಚಿಸಿದರು.

ರಾಜ್ಯದಲ್ಲಿ ಈ ವರ್ಷದ ಆರಂಭದಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ರೂ.10.27 ಲಕ್ಷ ಕೋಟಿ ಹೂಡಿಕೆ ಆಕರ್ಷಿಸಲಾಗಿದ್ದು, ಈಗಾಗಲೇ ಶೇ.60ರಷ್ಟು ಹೂಡಿಕೆಗಳು ಅನುಷ್ಠಾನ ಹಂತದಲ್ಲಿವೆ ಎಂದಿದ್ದಾರೆ.

ಸುಮಾರು ರೂ.1.5ಲಕ್ಷ ಕೋಟಿಗೂ ಹೆಚ್ಚಿನ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ವಿವಿಧ ಹಂತದಲ್ಲಿವೆ. ಸುಪ್ರೀಂಕೋರ್ಟ್‌ ತೀರ್ಪಿನ ನೆಪ ಹೇಳಿಕೊಂಡು ಅಧಿಕಾರಿಗಳು ಕೂರಬಾರದು. ಅಕ್ಕ ಪಕ್ಕದ ರಾಜ್ಯಗಳಿಗೆ ಇರುವುದೂ ಇದೇ ಸುಪ್ರೀಂಕೋರ್ಟ್‌. ಬೇರೆ ರಾಜ್ಯಗಳಿಗೆ ಆಗದ ಸಮಸ್ಯೆ ನಮಗೆ ಆಗತ್ತೆ ಅನ್ನುವ ನೆಪ ಹೇಳಿಕೊಂಡು ಕೂತರೆ ಕ್ರಮ ಜರುಗಿಸಬೇಕಾಗತ್ತೆ ಎಂದು ಎಚ್ಚರಿಕೆ ನೀಡಿದರು.

RELATED ARTICLES

Latest News