ಬೆಂಗಳೂರು, ಫೆ.22- ಕಾಂಗ್ರೆಸ್ ವಿರೋಧ ಪಕ್ಷದಲ್ಲೂ ಕುಳಿತುಕೊಳ್ಳುವ ಅರ್ಹತೆ ಮತ್ತು ನೈತಿಕತೆಯನ್ನು ಕಳೆದುಕೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.ರಾಜ್ಯಪಾಲರು ಉಭಯ ಸದನಗಳ ಜಂಟಿ ಅಧಿವೇಶನ ಉದ್ದೇಶಿಸಿ ಮಾಡಿದ ಭಾಷಣದ ಮೇಲಿನ ಚರ್ಚೆಗೆ ವಿಧಾನ ಪರಿಷತ್ ನಲ್ಲಿ ಬೋಜನ ವಿರಾಮದ ಬಳಿಕ ಸರ್ಕಾರದ ಪರವಾಗಿ ಉತ್ತರ ನೀಡಿದ ಮುಖ್ಯಮಂತ್ರಿಯವರು, ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯಲ್ಲಿ ವಿಪಕ್ಷ ತೊಡಗಿಸಿಕೊಳ್ಳದೆ ಉತ್ತರ ನೀಡಬೇಕಾದ ಪರಿಸ್ಥಿತಿ ಇತಿಹಾಸದಲ್ಲಿ ಇದೇ ಮೊದಲು, ವಿರೋಧ ಪಕ್ಷ ಸರ್ಕಾರದ ನ್ಯೂನತೆಗಳನ್ನು ಎತ್ತಿ ತೋರಿಸುವ ಅವಕಾಶವನ್ನು ಕಳೆದುಕೊಂಡಿದೆ ಎಂದು ವಿಷಾಧಿಸಿದರು. ನಮ್ಮ ಪಕ್ಷದ ಮೂವರು ಚರ್ಚೆಯಲ್ಲಿ ಭಾಗವಹಿಸಿದ್ದರು ಎಂದು ಹರಿಪ್ರಸಾದ್ ಸ್ಪಷ್ಟನೆ ನೀಡಿದರು.
ಪೂರ್ಣ ಪ್ರಮಾಣದಲ್ಲಿ ಚರ್ಚೆ ಸಾಧ್ಯವಾಗಿಲ್ಲವಲ್ಲ ಎಂದು ಹೇಳಿದ ಮುಖ್ಯಮಂತ್ರಿಯವರು, ಕೋವಿಡ್ ಸಂಕಷ್ಟ ಸಮಯದಲ್ಲೂ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಅಭಾದಿತವಾಗಿ ಮುಂದುವರೆಸಿದೆ. ದಕ್ಷತೆಯಿಂದ ಕೆಲಸ ಮಾಡುತ್ತಾ, ಭವ್ಯ ಭವಿಷ್ಯ ನಿರ್ಮಾಣ, ಆರ್ಥಿಕ ಸಬಲತೆ, ಸುಭಿಕ್ಷ ರಾಜ್ಯ ಕ್ಕಾಗಿ ಕೆಲಸ ಮಾಡುತ್ತಿದ್ದೇವೆ.
ಕಲ್ಯಾಣ ಕರ್ನಾಟಕಕ್ಕೆ ಒಂದೇ ಕಂತಿನಲ್ಲಿ 1400 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ. ಮುಖ್ಯಮಂತ್ರಿ ವಿದ್ಯಾನಿಧಿ ಯೋಜನೆಯನ್ನು ಗ್ರಾಮೀಣ ಭಾಗದಲ್ಲಿರುವ 8 ರಿಂದ 10ನೆ ತರಗತಿಯ ಹೆಣ್ಣುಮಕ್ಕಳಿಗೂ ವಿಸ್ತರಿಸಲು ನಿರ್ಧರಿಸಲಾಗಿದೆ. ರಾಜ್ಯ ಹೆದ್ದಾರಿಗಳ ಸುಧಾರಣೆಗೆ 3500 ಕೋಟಿ, 5 ಲಕ್ಷ ಮನೆಗಳ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ.
11.20 ಲಕ್ಷ ಮನೆಗಳಿಗೆ ಜಲಜೀವನ್ ಮಿಷನ್ ಯೋಜನೆಯಡಿ ನಲ್ಲಿ ಸಂಪರ್ಕ ಕಲ್ಪಿಸಲಾಗಿದೆ. ಆಡಳಿತಸುಧಾರಣಾಗೆ ಎರಡು ವರದಿಗಳನ್ನು ಜಾರಿ ಮಾಡಲಾಗುವುದು, ಕೆಎಸ್ ಆರ್ ಟಿಸಿ ಮತ್ತು ಬೆಸ್ಕಾಂ ಸಂಸ್ಥೆಗಳ ಆರ್ಥಿಕ ಸ್ವಾವಲಂಬನೆಗೆ ಸಮಿತಿಗಳನ್ನು ರಚಿಸಲಾಗಿದ್ದು, ಮಧ್ಯಂತರ ವರದಿ ಸಲ್ಲಿಕೆಯಾಗಿದೆ. ಅದರ ಆಧಾರದ ಮೇಲೆ ಮಹತ್ವದ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದರು.
ಗ್ರಾಮ ಒನ್ ಘಟಕಗಳ ಮೂಲಕ ಹಳ್ಳಿಗಳಲ್ಲೇ 100ಕ್ಕೂ ಹೆಚ್ಚು ಸರ್ಕಾರಿ ಸೇವೆಗಳನ್ನು ಒದಗಿಸಲಾಗುತ್ತಿದೆ. ಸಂಶೋಧನೆ, ಸೆಮಿಕಂಡಕ್ಟರ್ ಉದ್ಯಮಕ್ಕೆ ಒತ್ತು ನೀಡಲಾಗುತ್ತಿದೆ. ಕೈಗಾರಿಕೆಗಳಲ್ಲಿ ಉದ್ಯೋಗ ಸೃಷ್ಟಿಯ ಆದ್ಯತೆ ಮೇರೆಗೆ ಭತ್ಯೆ ನೀಡುವ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ. ವಿದೇಶಿ ಬಂಡವಾಳ ಹೂಡಿಕೆಯನ್ನು ನಮ್ಮ ರಾಜ್ಯ ನಂಬರ್ ಒನ್ ಸ್ಥಾನದಲ್ಲಿದೆ.
ನೂತನ ಶಿಕ್ಷಣ ನೀತಿಯ ಮೂಲಕ ಜಾಗತಿಕ ಸ್ಪರ್ಧೆಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲಾಗುತ್ತಿದೆ. ಕೋವಿಡ್ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಸಿದ್ದು, ಮೃತಪಟ್ಟ ಕುಟುಂಬದವರಿಗೆ ಪರಿಹಾರ ನೀಡಲಾಗಿದೆ. ಆರ್ಥಿಕ ಸಂಕಷ್ಟಕ್ಕೆ ಸಿಲುಕಿದವರಿಗೆ ಎರಡುವರೆ ಸಾವಿರ ಕೋಟಿ ರೂಪಾಯಿಗಳ ವೆಚ್ಚದಲ್ಲಿ ಆರ್ಥಿಕ ನೆರವು ನೀಡಲಾಗಿದೆ ಎಂದು ವಿವರಿಸಿದರು.
ಕೋವಿಡ್ ಸಂದರ್ಭದಲ್ಲಿ ಭ್ರಷ್ಟಾಚಾರ ನಡೆದಿದೆ ಎಮದು ಹರಿಪ್ರಸಾದ್ ಆರೋಪಿಸಿದರು.ತಮ್ಮ ಉತ್ತರ ಮುಂದುವರೆಸಿದ ಮುಖ್ಯಮಂತ್ರಿಯವರು, ಸಚಿವ ಈಶ್ವರಪ್ಪ ಹೇಳದೆ ಇರುವ ಮಾತುಗಳನ್ನು ಸೃಷ್ಟಿಸಿಕೊಂಡು ವಿರೋಧ ಪಕ್ಷ ಧರಣಿ ನಡೆಸಿ ಕಲಾಪಕ್ಕೆ ಅಡ್ಡಿ ಪಡಿಸಿದೆ.
ಇದೇ ವಿಷಯವನ್ನು ಮುಂದಿಟ್ಟುಕೊಂಡು ಜನರ ಮುಂದೆ ಹೋಗಿ ನಿಮ್ಮನ್ನು ತಿರಸ್ಕರಿಸುತ್ತಾರೆ. ವಿರೋಧ ಪಕ್ಷವಾಗಿ ಕೆಲಸ ಮಾಡುವ ನೈತಿಕತೆ ಮತ್ತು ಅರ್ಹತೆಯನ್ನು ಕಾಂಗ್ರೆಸ್ ಕಳೆದುಕೊಂಡಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.
